ಪ್ರಜಾಪ್ರಭುತ್ವದ ಆಶಯಗಳು ಭಾರತೀಯರ ಜೀವನದ ಅವಿಭಾಜ್ಯ ಭಾಗವಾಗಿದ್ದು, ಸಮಾನತೆ, ಭ್ರಾತೃತ್ವ ಮತ್ತು ಸಂವಿಧಾನಿಕ ಮೌಲ್ಯಗಳನ್ನು ಯುವಜನರಲ್ಲಿ ಬೆಳೆಸುವುದು ಅಗತ್ಯ ಎಂದು ವಿಧಾನ ಪರಿಷತ್ ಶಾಸಕ ಎಫ್.ಎಚ್. ಜಕ್ಕಪ್ಪನವರ ಹೇಳಿದರು.
ಧಾರವಾಡ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ-2026ರ ಅಂಗವಾಗಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಯುವ ಸಂಸತ್ತು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬುದ್ಧರ ಕಾಲದ ಗಣರಾಜ್ಯ ವ್ಯವಸ್ಥೆ, ಅಶೋಕನ ಆಡಳಿತ ಹಾಗೂ ಬಸವೇಶ್ವರರ ಅನುಭವ ಮಂಟಪ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಸಾಕ್ಷಿಯಾಗಿವೆ. ಸಂವಿಧಾನದ ಆಶಯಗಳನ್ನು ವಿದ್ಯಾರ್ಥಿಗಳು ಮತ್ತು ಯುವಜನರು ಅರಿತುಕೊಂಡು ಸಮಾನತೆ ಹಾಗೂ ಭ್ರಾತೃತ್ವದ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
ಶಿಕ್ಷಣದ ಮೂಲಕ ಗ್ರಾಮೀಣ ಭಾಗದ ಪ್ರತಿಭಾವಂತ ಯುವಜನರೂ ಉನ್ನತ ಸಾಧನೆ ಮಾಡಲು ಸಾಧ್ಯವಿದೆ ಎಂದು ತಿಳಿಸಿದರು.ಜಿಲ್ಲಾಧಿಕಾರಿ ಸ್ನೇಹಲ್ ಆರ್., ವಿಧಾನ ಪರಿಷತ್ ಸದಸ್ಯ ಲಿಂಗರಾಜ ಪಾಟೀಲ, ಜಿಪಂ ಸಿಇಒ ಭುವನೇಶ ಪಾಟೀಲ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.



