ರಾಜ್ಯದಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದ್ದು, ಬೆಂಗಳೂರು ಸೇರಿದಂತೆ 4 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗಿತ್ತು. ಇಂದು ಕಾಸರಗೋಡು ಸುತ್ತಮುತ್ತಲಿನ ಸುಳ್ಯ, ಸುಬ್ರಹ್ಮಣ್ಯ ಪ್ರದೇಶಗಳಲ್ಲಿ ಸಂಜೆಯವರೆಗೂ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಆಲಿಕಲ್ಲು ಮಳೆಯಾಗುವ ಸೂಚನೆಯಿದ್ದು, ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗಲಿದ್ದು, ಗಂಟೆಗೆ 40ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ಉಡುಪಿಯಲ್ಲಿ ಗುಡುಗು ಸಹಿತ ಮಳೆ, ತಾಪಮಾನದಲ್ಲಿ ಇಳಿಕೆ
ಉತ್ತರ ಒಳನಾಡಿನ ಗದಗ, ಧಾರವಾಡ, ಹಾವೇರಿ, ಬೆಳಗಾವಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯಿದ್ದು, ಉಳಿದ ಭಾಗಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ವರದಿ ತಿಳಿಸಿದೆ.




