ರಾಜ್ಯದಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಟಿದೆ. ನಿನ್ನೆ ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು. ಒಂದೆಡೆ ಸುಡು ಬಿಸಿಲ ಧಗೆ ಮತ್ತೊಂದೆಡೆ ಬಿರುಗಾಳಿ ಸಹಿತ ಗುಡುಗು ಸಿಡಿಲಿನ ಮಳೆಯಿಂದ ರಾಜ್ಯದ ಜನ ಹೈರಾಣಾಗಿದ್ದಾರೆ.
ಬೆಂಗಳೂರಿನಲ್ಲಿ ಸದ್ಯಕ್ಕೆ ಮಳೆಯ ಲಕ್ಷಣವಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ರಾಜಧಾನಿಯಲ್ಲಿ 37 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ತಾಪಮಾನ ಏರಿಕೆ ಕಂಡಿದ್ದು, ಮೋಡ ಕವಿದ ವಾತಾವರಣವಿದ್ದರೂ ಸೆಖೆ ಕಿಂಚಿತ್ತೂ ತಗ್ಗಿಲ್ಲ.
ಇಂದು ಎಲ್ಲೆಲ್ಲಿ ಮಳೆ?
ಕಳೆದ ಒಂದು ವಾರದಿಂದ ರಾಜ್ಯದ ಕೆಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ಇಂದು ಕೆಲವು ಜಿಲ್ಲೆಗಳಲ್ಲಿ ಮಳೆಯ ಸಿಂಚನ ಮುಂದುವರೆಯಲಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಗಾಳಿ ಮಳೆಯಾಗುವ ಮುನ್ಸೂಚನೆ ದೊರೆತಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಗದಗ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿಮೀ ವೇಗದಲ್ಲಿ, ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗಲಿದೆ. ಉಳಿದಂತೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಗುಡುಗುಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ> ರಾಜ್ಯಾದ್ಯಂತ ಬಿಸಿಲಿನ ತೀವ್ರತೆ ನಡುವೆ ಏ.26ರವರೆಗೂ ಮಳೆ: ಹವಾಮಾನ ಇಲಾಖೆ
ಆರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ: ಕರ್ನಾಟಕದ 6 ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯೊಂದಿಗೆ ಧಾರಾಕಾರ ಮಳೆ ಸುರಿಯುವ ಸೂಚನೆಯಿದೆ. ಬೆಳಗಾವಿ, ಧಾರವಾಡ, ವಿಜಯಪುರ, ಬಾಗಲಕೋಟೆ, ಗದಗ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಂಭವವಿರುವುದರಿಂದ ಈ ಆರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಒಳನಾಡಿನ ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳು ಕರಾವಳಿಯ ಉತ್ತರ ಕನ್ನಡ, ದಕ್ಷಿಣಕನ್ನಡ, ಉಡುಪಿ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರೆಯಲಿದ್ದು, ಸದ್ಯಕ್ಕೆ ಮಳೆಯ ಸೂಚನೆ ಕಂಡುಬಂದಿಲ್ಲ.




