ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧ ಆಡಳಿತ ವಿರೋಧಿ ಅಲೆ ಇದೆ ಎಂದು ಹೇಳಲಾಗಿತ್ತು. ಹೀಗಾಗಿ, ಕೇಂದ್ರ ಸರ್ಕಾರದಲ್ಲಿ ಸಚಿವರಾಗಿದ್ದ ಮೂವರು ಸಚಿವರು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಅವರಲ್ಲಿ ಒಬ್ಬರನ್ನು ಹೊರತು ಪಡಿಸಿ, ಉಳಿದವರು ಮುನ್ನಡೆ ಸಾಧಿಸಿದ್ದಾರೆ.
ಕೇಂದ್ರ ಸಚಿವ ಫಗ್ಗನ್ ಸಿಂಗ್ ಕುಲಸ್ತೆ ಅವರು ನಿವಾಸ್ ವಿಧಾನಸಭಾ ಕ್ಷೇತ್ರದಲ್ಲಿ 11,560 ಮತಗಳಿಂದ ಹಿನ್ನಡೆಯಲ್ಲಿದ್ದಾರೆ.
ಉಳಿದಂತೆ, ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ದಿಮಾನಿ ಕ್ಷೇತ್ರದಲ್ಲಿ 3,700 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಕೇಂದ್ರ ಸಚಿವ ಮತ್ತು ಪ್ರಮುಖ ಒಬಿಸಿ ಮುಖಂಡ ಪ್ರಹ್ಲಾದ್ ಪಟೇಲ್ ಅವರು ನರಸಿಂಗ್‌ಪುರದಲ್ಲಿ 6,521 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಇಂದೋರ್-1 ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ಕೂಡ 19,940 ಮತಗಳಿಂದ ಮುನ್ನಡೆಯಲ್ಲಿದ್ದಾರೆ.
ಪ್ರಮುಖವಾಗಿ, ರಾಜ್ಯದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ದಾತಿಯಾದಲ್ಲಿ 2,243 ಮತಗಳಿಂದ ಹಿನ್ನಡೆ ಸಾಧಿಸಿದ್ದಾರೆ. 2008ರಿಂದ ಮಿಶ್ರಾ ವಿರುದ್ಧ ಸ್ಪರ್ಧಿಸುತ್ತಿದ್ದ ರಾಜೇಂದ್ರ ಭಾರ್ತಿ ಅವರು ಮುನ್ನಡೆ ಸಾಧಿಸಿದ್ದಾರೆ.