ಮಂಡ್ಯ, ಮೈಸೂರು ಮತ್ತು ಬೆಂಗಳೂರಿನ ಭಾಗದಲ್ಲಿ ಹೆಣ್ಣು ಭ್ರೂಣ ಹತ್ಯೆಯಂತಹ ಸಮಾಜಘಾತುಕ ಕೃತ್ಯದಲ್ಲಿ ಭಾಗಿಯಾದ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಈಜಾಲವನ್ನು ಭೇದಿಸಿ ಹೆಣ್ಣುಮಕ್ಕಳಿಗೆ ಸೂಕ್ತ ರಕ್ಷಣೆ ನೀಡುವಂತೆ ಒತ್ತಾಯಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ಸದಸ್ಯರು ದಾವಣಗೆರೆ ಉಪವಿಭಾಗಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಕಳೆದ ಎರಡು ವರ್ಷಗಳಿಂದ 900ಕ್ಕೂ ಹೆಚ್ಚು ಹೆಣ್ಣು ಭ್ರೂಣ ಹತ್ಯೆ ಮಾಡಿರುವಂತಹ ಸಮಾಜಘಾತುಕ ಘಟನೆ ನಡೆದಿದೆ. ಇದರ ಹಿಂದೆ ದೊಡ್ಡ ಜಾಲವಿರುವ ಶಂಕೆಯಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿ, ಆರೋಗ್ಯ ಅಧಿಕಾರಿಗಳನ್ನು ಅಮಾನತು ಪಡಿಸಿದೆ. ಅಲ್ಲದೇ ಸಿಐಡಿ ತನಿಖೆಗೆ ಒಳಪಡಿಸಿದೆ. ಶೀಘ್ರವೇ ತನಿಖೆ ನಡೆಸಿ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.
ಇಂತಹ ಸಮಾಜಘಾತುಕ ಘಟನೆಯಲ್ಲಿ ಭಾಗಿ ಯಾದವರಿಗೆ ಶಿಕ್ಷೆ ವಿಧಿಸಿ, ಹೆಣ್ಣುಮಕ್ಕಳಿಗೆ ಸೂಕ್ತ ರಕ್ಷಣೆ ಖಾತ್ರಿಪಡಿಸಿ, ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ನಿಷೇಧ ಕಾನೂನನ್ನು ಇನಷ್ಟು ಬಲಗೊಳಿಸಿ ಪರಿಣಾಮಕಾರಿಯಾಗಿ ಜಾರಿಗೆ ತರುವಂತೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಸಂಘಟನೆಯ ಕಾರ್ಯದರ್ಶಿ ಭಾರತಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.