ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ವಿಪರೀತವಾಗಿ ಏರಿಕೆಯಾಗಿದೆ. ಇನ್ನು ಕೆಲವು ದಿನ ಈ ಚಳಿ ವಾತಾವರಣ ಹೀಗೇ ಮುಂದುವರಿಯಲಿದೆ. ಇನ್ನು ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಿದ್ದು, ಡಿಸೆಂಬರ್ 17ರಿಂದ ಎರಡು ದಿನಗಳ ಕಾಲ ರಾಜ್ಯದ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಾದ ಚಾಮರಾಜನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು, ಹಾಸನ, ಚಿಕ್ಕಮಗಳೂರು, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ದಿನ ಬಿಟ್ಟು ದಿನ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಾಮರಾಜನಗರ, ಹಾಸನ, ಕೊಡಗು, ಶಿವಮೊಗ್ಗದಲ್ಲೂ ಮಳೆಯಾಗುವ ಸಾಧ್ಯತೆಯಿದೆ. ಒಂದೆರಡು ಕಡೆಗಳಲ್ಲಿ ಸಾಧಾರಣಕ್ಕಿಂತ ಅತ್ಯಧಿಕ ಪ್ರಮಾಣದ ಮಳೆ ಆಗಲಿದೆ ಎಂದು ಹೇಳಿದೆ.
ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಆಗುವ ಲಕ್ಷಣಗಳಿವೆ ಎಂದು ಹೇಳಿದೆ.
ಸದ್ಯ ಕರ್ನಾಟಕದಲ್ಲಿ ಅಲ್ಲಲ್ಲಿ ಹಿಂಗಾರು ಮಳೆ ಚುರುಕುಗೊಳ್ಳುವ ಜತೆಗೆ ಚಳಿ ಹೆಚ್ಚಾಗುವ ಮುನ್ಸೂಚನೆ ಇದೆ. ಉತ್ತರ ಒಳನಾಡಿನಲ್ಲಿ ಈ ವಾರಪೂರ್ತಿ ಶುಷ್ಕ ವಾತಾವರಣವೇ ಮುಂದುವರಿಯಲಿದೆ. ಹೀಗಿದ್ದರೂ ಈ ಭಾಗದಲ್ಲಿ ಚಳಿಯ ಪ್ರಮಾಣ ಹೆಚ್ಚಿರಲಿದೆ ಎಂದು ವರದಿ ತಿಳಿಸಿದೆ.
ರಾಜ್ಯದಲ್ಲಿ ಚಳಿಯ ವಾತಾವರಣ ಹೆಚ್ಚಳ
ಕರ್ನಾಟಕದಲ್ಲಿ ಚಳಿಯ ವಾತಾವರಣ ಕಂಡು ಬಂದಿದ್ದು. ಹಾವೇರಿ, ಧಾರವಾಡ, ವಿಜಯಪುರ, ಗದಗ, ಕೊಪ್ಪಳ, ರಾಯಚೂರು ಭಾಗಗಳಲ್ಲಿ 17 ಡಿಗ್ರಿ ಸೆಲ್ಸಿಯಸ್‌ಗಿಂತಲೂ ಕಡಿಮೆ ತಾಪಮಾನ ದಾಖಲಾಗಿದೆ. ಚಿಕ್ಕಮಗಳೂರಿನಲ್ಲಿ 15 ಡಿಗ್ರಿ ಸೆಲ್ಸಿಯಸ್ ಮತ್ತು ವಿಜಯಪುರದಲ್ಲಿ 12 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ರಾಜ್ಯದಲ್ಲಿ ಸರಾಸರಿ ಗರಿಷ್ಠ ತಾಪಮಾನ 28 ಹಾಗೂ ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಹವಾಮಾನ ಇಲಾಖೆ ವರದಿ ಪ್ರಕಾರ, ರಾಜ್ಯದ ಬಹುತೇಕ ಕಡೆ ಗರಿಷ್ಠ ತಾಪಮಾನ ಮತ್ತು ಕನಿಷ್ಠ ತಾಪಮಾನ ಇಳಿಕೆ ಆಗಿದೆ. ಹೀಗಾಗಿ ಚಳಿಗಾಲ ಆರಂಭವಾದ ಅನುಭವವಾಗುತ್ತಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಲಗುವ ವಿಚಾರಕ್ಕೆ ಜಗಳ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಬರ್ಬರ ಹತ್ಯೆ
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಮಳೆಬರುವ ಸಾಧ್ಯತೆ ಕಡಿಮೆ ಇದೆ. ಎಚ್ಎಎಲ್ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 26.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರು ನಗರ ಸೇರಿದಂತೆ ರಾಜ್ಯದ ಒಳನಾಡು ಭಾಗದಲ್ಲಿ ಚಳಿ ಆವರಿಸುತ್ತಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.