ರಾಜ್ಯದಲ್ಲಿರುವ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನವೆಂಬರ್ 23ರಿಂದ ತರಗತಿಗಳನ್ನು ಬಹಿಷ್ಕರಿಸಿ ಹೋರಾಟ ನಡೆಸುತ್ತಿದ್ದಾರೆ. ಆ ಹೋರಾಟಕ್ಕೆ ನಮ್ಮ ಬೆಂಬಲವಿದೆ. ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಒತ್ತಾಯಿಸಿದೆ.
ಗದಗ ನಗರದಲ್ಲಿ ಸಂಘಟನೆಯ ಮುಖಂಡರು ಮತ್ತು ವಿದ್ಯಾರ್ಥಿಗಳು ಪ್ರತಿಬಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆ ಮುಖಂಡ ಗಣೇಶ ರಾಠೋಡ್, “ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ಖಾಸಗಿ ಕಾಲೇಜುಗಳಿಗೆ ಶುಲ್ಕ ಕಟ್ಟಲಾರದ ಹಲವಾರು ವಿದ್ಯಾರ್ಥಿಗಳು ಸರ್ಕಾರಿ ಕಾಲೇಜಿಗೆ ದಾಖಲಾಗಿದ್ದರು. ಆದರೆ, ಈ ಶೈಕ್ಷಣಿಕ ವರ್ಷದಲ್ಲಿ ಮತ್ತೆ ದಾಖಲಾತಿಯಲ್ಲಿ ಇಳಿಕೆಯಾಗಿದೆ. ಆದರೂ, ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಸರ್ಕಾರಿ ಕಾಲೇಜುಗಳಲ್ಲೇ ವ್ಯಾಸಂಗ ಮಾಡುತ್ತಿದ್ದಾರೆ. ಆದರೆ, ವಿದ್ಯಾರ್ಥಿಗಳಿಗೆ ಪಾಠ ಮಾಡಲು ಇಲ್ಲಿ ಅತಿಥಿ ಉಪನ್ಯಾಸಕರೇ ಇಲ್ಲ. ಅವರೆಲ್ಲರೂ ಕಳೆದ 14 ದಿನಗಳಿಂದ ಹೋರಾಟ ಮಾಡುತ್ತಿದ್ದಾರೆ. ಸರ್ಕಾರ ಅವರ ಬೇಡಿಕೆ ಈಡೇರಿಸಬೇಕು” ಎಂದು ಆಗ್ರಹಿಸಿದರು.
ಎಸ್‌ಎಫ್‌ಐ ಮುಖಂಡ ಚಂದ್ರು ರಾಠೋಡ ಮಾತನಾಡಿ, “ಪ್ರತೀ ವರ್ಷ ಸರ್ಕಾರಿ ಕಾಲೇಜುಗಳಲ್ಲಿ ಬೋಧನೆ ಮಾಡುವ ನೂರಾರು ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ಮಾಡುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಪಾಠಗಳಿಂದ ದೂರ ಉಳಿಯುತ್ತಿದ್ದಾರೆ. ಇದರಿಂದ ಸಾಕಷ್ಟು ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಸಮಸ್ಯೆಯಾಗುತ್ತಿದೆ. ಈ ಸಮಸ್ಯೆಯನ್ನು ದೂರ ಮಾಡುವುದಕ್ಕೆ ಎಲ್ಲಾ ಸರ್ಕಾರಿ ಕಾಲೇಜುಗಳಿಗೆ ಖಾಯಂ ಉಪನ್ಯಾಸಕರ ಅಗತ್ಯವಿದೆ” ಎಂದರು.
ಅತಿಥಿ ಉಪನ್ಯಾಸಕ ನಾರಾಯಣ ಗೌಡ ಮಾತನಾಡಿ, “ರಾಜ್ಯದ ಅತಿಥಿ ಉಪನ್ಯಾಸಕರ ಪರವಾಗಿ ನೀತಿ ನಿಯಮಾವಳಿಗಳನ್ನು ರೂಪಿಸಿ ಸೇವಾ ಭದ್ರತೆ ಒದಗಿಸಬೇಕು. ಸಕಾಲಕ್ಕೆ ವೇತನವನ್ನು ನೀಡಿ ಅವರ ನ್ಯಾಯಯುತ ಬೇಡಿಕೆಗಳನ್ನು ಶೀಘ್ರವೇ ಬಗೆಹರಿಸಬೇಕು. ತರಗತಿಗಳು ಸುಸಜ್ಜಿತವಾಗಿ ನಡೆಯಲು ಅನುಕೂಲ ಮಾಡಿಕೊಡಬೇಕು” ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ಮುಖಂಡೆ ಕಾವ್ಯ ಪಾಟೀಲ, ವಿದ್ಯಾರ್ಥಿನಿ ಸುಮಾ, ಮಧು, ನೇತ್ರಾ, ನೇಹಾ, ಪಲ್ಲವಿ,ಸುಜಾತಾ, ಶೈಲಾ, ಮಂಜುಳಾ, ವೀಣಾ, ಭಾರತಿ, ನೇತ್ರಾ, ಮೇಘಾ, ರಕ್ಷಿತಾ, ತನುಜಾ, ವಿಜಯಲಕ್ಷೀ, ಆರತಿ, ಶ್ರವಾಣ, ಚಂದಾಭಿ ಹಲವಾರು ವಿದ್ಯಾರ್ಥಿಗಳು ಇದ್ದರು.