ವಿದ್ಯಾರ್ಥಿಗಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛಗೊಳಿಸಿದ್ದ ಆರೋಪದಲ್ಲಿ ವಸತಿ ಶಾಲೆಯ ಪ್ರಾಂಶುಪಾಲೆ ಮತ್ತು ಶಿಕ್ಷಕನನ್ನು ಬಂಧಿಸಲಾಗಿದೆ. ಆದರೆ, ಅವರಿಬ್ಬರ ಬಂಧನವನ್ನು ಖಂಡಿಸಿ ಶಾಲೆಯ ವಿದ್ಯಾರ್ಥಿಗಳೇ ಪ್ರತಿಭಟನೆ ನಡೆಸಿದ್ದಾರೆ.
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲೆ ಭಾರತಮ್ಮ ಮತ್ತು ಚಿತ್ರಕಲಾ ಶಿಕ್ಷಕ ಮುನಿಯಪ್ಪ ಅವರು ವಿದ್ಯಾರ್ಥಿಗಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛಗೊಳಿಸಿದ್ದರು. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ.
ಆದರೆ, ಶಿಕ್ಷಕರ ಬಂಧನವನ್ನು ಖಂಡಿಸಿ ವಿದ್ಯಾರ್ಥಿಗಳೇ ಪ್ರತಿಭಟನೆ ನಡೆಸಿದ್ದಾರೆ. ಶಿಕ್ಷಕರ ವಿರುದ್ಧದ ಪ್ರಕರಣವನ್ನು ವಾಪಸ್ ಪಡೆದು, ಅವರಿಬ್ಬರನ್ನೂ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಸ್ಥಳಕ್ಕೆ ಜಿಲ್ಲಾಧಿಕಾರಿ ಬರಬೇಕು, ಸಮಸ್ಯೆಯನ್ನು ಬಗೆಹರಿಸಿ, ಶಿಕ್ಷಕರನ್ನು ಬಿಡುಗಡೆ ಮಾಡಿಸಬೇಕು. ಇಲ್ಲದಿದ್ದರೆ, ಶಾಲೆ ತೊರೆದು ಪ್ರತಿಭಟನೆ ಮಾಡುತ್ತೇವೆಂದು ಎಚ್ಚರಿಕೆಯನ್ನೂ ನೀಡಿದ್ದಾರೆ.