ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಳಿ ಹೆಚ್ಚಾಗುತ್ತಿದ್ದು, ಜನರು ಸ್ವೆಟರ್, ಟೋಪಿ ಸೇರಿದಂತೆ ದಪ್ಪನೆಯ ಬಟ್ಟೆಗಳಿಗೆ ಮಾರು ಹೋಗಿದ್ದಾರೆ. ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಚಳಿ ಇನ್ನೂ ಹೆಚ್ಚಾಗಲಿದೆ. ಜತೆಗೆ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಚಳಿ ಜತೆಗೆ ಮೋಡ ಮುಸುಕಿದ ವಾತಾವರಣ ಕೂಡ ಮುಂದುವರಿಯುವ ಸಾಧ್ಯತೆಯಿದೆ. ಮುಂದಿನ ಎರಡು ದಿನ ರಾಜ್ಯದ ಸುಮಾರು 12 ಜಿಲ್ಲೆಗಳಲ್ಲಿ ಮಳೆ ಬೀಳುವ ಲಕ್ಷಣಗಳಿವೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಎರಡು ದಿನ ತುಂತುರು ಮಳೆ ಆಗಲಿದೆ ಎಂದು ತಿಳಿಸಿದೆ.
ಕಳೆದ ವಾರ ವಿಜಯಪುರ ಜಿಲ್ಲೆ, ಹಾವೇರಿ, ಬಾಗಲಕೋಟೆ, ಧಾರವಾಡ, ಬೆಳಗಾವಿ ಸೇರಿದಂತೆ ನಾನಾ ಕಡೆ 16-12 ಡಿಗ್ರಿ ಸೆಲ್ಸಿಯಸ್‌ನಷ್ಟು ಕನಿಷ್ಠ ತಾಪಮಾನ ದಾಖಲಾಗಿತ್ತು. ಆದರೆ, ಈಗ ಕನಿಷ್ಠ ತಾಪಮಾನದಲ್ಲಿ ತುಸು ಏರಿಕೆ ಆಗಿದ್ದು, 15-20 ಡಿಗ್ರಿ ಸೆಲ್ಸಿಯಸ್ ದಾಖಲಾಗುತ್ತಿದೆ. ಈ ಮೂಲಕ ಈ ಭಾಗದ ಜಿಲ್ಲೆಗಳಲ್ಲಿ ಚಳಿ ಕಡಿಮೆ ಆಗುತ್ತಿದೆ.
ಇನ್ನೂ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರುತ್ತದೆ. ಬೆಳಗ್ಗೆ ಮಬ್ಬು ವಾತಾವರಣ ಜತೆಗೆ ತುಸು ಚಳಿ ಕಂಡು ಬರಲಿದೆ. ನಗರ ಜಿಲ್ಲೆಯಲ್ಲಿ ಒಂದೆರಡು ಕಡೆಗಳಲ್ಲಿ ತುಂತುರು ಮಳೆ ಆಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಸುದ್ದಿ ಓದಿದ್ದೀರಾ? ರೈತ ನಾಯಕ ಪ್ರೊ. ನಂಜುಂಡಸ್ವಾಮಿ ಜೀವನಾಧಾರಿತ ‘ಡೈರೆಕ್ಟ್ ಆ್ಯಕ್ಷನ್’ ನಾಟಕ ಪ್ರದರ್ಶನ
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಾರವಾರದಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.
ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ನಾನಾ ಭಾಗದ ಜಿಲ್ಲೆಗಳಲ್ಲಿ ಮಳೆ ಜತೆಗೆ ಚಳಿ ಪ್ರಮಾಣ ಏರಿಕೆ ಆಗಿತ್ತು. ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಅತ್ಯಧಿಕ ಚಳಿ ದಾಖಲಾಗಿತ್ತು. ಇನ್ನುಳಿದಂತೆ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆ ಆಗಿತ್ತು.
ಸಾಮಾನ್ಯವಾಗಿ ರಾಜ್ಯದ ಕೆಲವೆಡೆ ಮೋಡ ಕವಿದ ವಾತಾವರಣವಿರಲಿದೆ. ಗರಿಷ್ಠ ಉಷ್ಣಾಂಶ 26 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.