ಈ ವರ್ಷ ರಾಜ್ಯದಲ್ಲಿ ಬರಗಾಲ ಆವರಿಸಿದೆ. ಬೆಳೆ ಇಳುವರಿ ಬಾರದೆ ರೈತರು ಕಂಗಾಲಾಗಿದ್ದಾರೆ. ಹಲವರು ಕೃಷಿಗಾಗಿ ಮಾಡಿದ್ದ ಸಾಲ ತೀರಿಸಲಾಗದೆ ಸಂಕಷ್ಟದಲ್ಲಿದ್ದಾರೆ. ರಾಜ್ಯದ 236 ತಾಲೂಕುಗಳ ಪೈಕಿ 223 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿದೆ. ಈ ನಡುವೆ, ಸಾಲಬಾಧೆಯಿಂದ 2023ರ ಏಪ್ರಿಲ್‌ನಿಂದ ನವೆಂಬರ್‌ವರೆಗೆ ಒಟ್ಟು 456 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಕಳೆದ ಏಳು ತಿಂಗಳಲ್ಲಿ ದಾಖಲಾದ ಈ 456 ರೈತರ ಆತ್ಮಹತ್ಯೆ ಪ್ರಕರಣಗಳ ಪೈಕಿ 354 ಪ್ರಕರಣಗಳು ಪರಿಹಾರಕ್ಕೆ ಅರ್ಹವಾಗಿವೆ ಎಂದು ಸರ್ಕಾರ ಹೇಳಿರುವುದಾಗಿ ತಿಳಿದುಬಂದಿದೆ. ಅರ್ಹ ಸಂತ್ರಸ್ತ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ಮತ್ತು ಮಾಸಿಕ 2,000 ರೂ. ಪಿಂಚಣಿ ನೀಡಲಾಗುತ್ತದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಆತ್ಮಹತ್ಯೆ ಮಾಡಿಕೊಂಡ ರೈತರ ಪೈಕಿ 259 ರೈತರು ಉತ್ತರ ಕರ್ನಾಟಕದವರಾಗಿದ್ದಾರೆ. ಅದರಲ್ಲಿಯೂ ಹಾವೇರಿ ಜಿಲ್ಲೆಯಲ್ಲಿ 61 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ರೈತರ ಆತ್ಮಹತ್ಯೆಯಲ್ಲಿ ಮೊದಲ ಸ್ಥಾನದಲ್ಲಿದೆ. ಉಳಿದಂತೆ ಬೆಳಗಾವಿ ಜಿಲ್ಲೆಯಲ್ಲಿ 56 ಮತ್ತು ಚಿಕ್ಕಮಗಳೂರಿನಲ್ಲಿ 49 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ನಂತರದ ಸ್ಥಾನದಲ್ಲಿವೆ.
ಕಳೆದ ಆರ್ಥಿಕ ವರ್ಷದಲ್ಲಿ (2022ರ ಏಪ್ರಿಲ್‌ನಿಂದ 2023 ಮಾರ್ಚ್‌ವರೆಗೆ) 968 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರಲ್ಲಿ, 849 ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡಲಾಗಿದೆ ಎಂದು ವರದಿಯಾಗಿದೆ.
ಈ ವರ್ಷ ಬರಗಾಲದಿಂದಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಹೆಚ್ಚಿನವರು ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ, ಬ್ಯಾಂಕ್‌ಗಳಲ್ಲಿ ರೈತರ ಸಂಪೂರ್ಣ ಸಾಲವನ್ನು ಮನ್ನಾ ಮಾಡಬೇಕೆಂದು ರೈತ ಸಂಘಟನೆಗಳು ಒತ್ತಾಯಿಸಿವೆ. ಈ ನಡುವೆ, ಬ್ಯಾಂಕ್ ಸಾಲಗಳಲ್ಲಿ ಅಸಲನ್ನು ಕಟ್ಟುವ ರೈತರಿಗೆ ಬಡ್ಡಿ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.