ವಿಪಕ್ಷಗಳ ಮೈತ್ರಿ ಕೂಟ ‘ಇಂಡಿಯಾ’ ಸಭೆಯಲ್ಲಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನ ಮಂತ್ರಿ ಅಭ್ಯರ್ಥಿಯನ್ನಾಗಿ ಪ್ರಸ್ತಾಪಿಸಿದ್ದಕ್ಕೆ ಆಮ್ ಆದ್ಮಿ ಪಕ್ಷದ ಕರ್ನಾಟಕ ಅಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಸಂತಸ ವ್ಯಕ್ತಪಡಿಸಿದ್ದಾರೆ.
“ಕೇಜ್ರಿವಾಲ್ ಅವರು ಖರ್ಗೆ ಹೆಸರನ್ನು ಪ್ರಸ್ತಾಪ ಮಾಡಿರುವುದು ನನಗೆ ವೈಯಕ್ತಿಕವಾಗಿ ಸಂತೋಷ ತಂದಿದೆ. ವಿಭಜಕ ರಾಜಕಾರಣ ಉತ್ತುಂಗದಲ್ಲಿದ್ದು, ಒಕ್ಕೂಟ ವ್ಯವಸ್ಥೆ ಅಪಾಯದಲ್ಲಿದೆ. ನಮ್ಮ ದೇಶ ರಾಜಕೀಯ ಸಂಕಷ್ಟವನ್ನು ಎದುರಿಸುತ್ತಿದ್ದು, ಈ ಕಾಲದಲ್ಲಿ ಪ್ರಜಾಪ್ರಭುತ್ವ ಕೂಡ ಅಪಾಯದಲ್ಲಿದೆ” ಎಂದರು.
“ಇಂತಹ ಸಂದರ್ಭದಲ್ಲಿ ಅಪಾರ ರಾಜಕೀಯ ಅನುಭವ ಹೊಂದಿರುವ, ರಾಜಕೀಯ ಮುತ್ಸದ್ದಿ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಪ್ರಸ್ತಾಪಿಸಿರುವುದು ಸಂತೋಷ ತಂದಿದೆ. 5 ದಶಕಗಳ ರಾಜಕೀಯ ಅನುಭವ ಹೊಂದಿರುವ ಖರ್ಗೆಯವರು ಎಲ್ಲ ಸಮಾನ ಮನಸ್ಕ ಪಕ್ಷಗಳನ್ನು ಒಗ್ಗೂಡಿಸಿಕೊಂಡು ಇಂಡಿಯಾ ಒಕ್ಕೂಟವನ್ನು ಗೆಲ್ಲಿಸುವ ನಂಬಿಕೆ ಇದೆ” ಎಂದರು.
ಈ ಸುದ್ದಿ ಓದಿದ್ದೀರಾ? ರಾಜ್ಯದ ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಕ್ಷೇತ್ರ ಪುನರ್ ವಿಂಗಡಣೆ ಅಧಿಸೂಚನೆ
“ದೇಶದ ಬಹುತ್ವ ಮತ್ತು ವೈವಿಧ್ಯತೆಗೆ ಧಕ್ಕೆ ಉಂಟಾಗುತ್ತಿರುವ ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ನಾಯಕರೊಬ್ಬರು ದೇಶದ ಪ್ರಧಾನಿ ಅಭ್ಯರ್ಥಿಯಾಗಿ ಹೊರಹೊಮ್ಮಿರುವುದು ಹೆಮ್ಮೆಯ ಸಂಗತಿ. ಖರ್ಗೆ ಅವರಿಗೆ ರಾಜ್ಯದ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಸಲ್ಲಿಸುತ್ತೇನೆ” ಎಂದರು.