ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಹೊತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅಧಿಕಾರಾವಧಿ ಮುಗಿದಿದೆ. ಆತನಿಂದ ತೆರವಾಗುತ್ತಿರುವ ಸ್ಥಾನಕ್ಕೆ ಆತನ ಆಪ್ತನೇ ಆಗಿರುವ ಸಂಜಯ್ ಸಿಂಗ್ ಆಯ್ಕೆಯಾಗಿದ್ದಾರೆ. ಗುರುವಾರ ನಡೆದ ಚುನಾವಣೆಯಲ್ಲಿ ಸಂಜಯ್ ಸಿಂಗ್ ಹೊಸ ಅಧ್ಯಕ್ಷನಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಉತ್ತರ ಪ್ರದೇಶದ ಕುಸ್ತಿ ಅಸೋಸಿಯೇಷನ್‌ನ ಉಪಾಧ್ಯಕ್ಷರಾಗಿದ್ದ ಸಂಜಯ್ ಅವರು ಪ್ರತಿಸ್ಪರ್ಧಿ ಅನಿತಾ ಶೆರಾನ್ ವಿರುದ್ಧ ಗೆಲುವು ಸಾಧಿಸಿದ್ದಾರೆ.
ಮಹಿಳಾ ಕುಸ್ತಿಪಟುಗಳಿಗೆ ಬ್ರಿಜ್ ಭೂಷಣ್ ಸಿಂಗ್ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಕುಸ್ತಿಪಟು ಬಜರಂಗ್ ಪುನಿಯಾ, ವಿನೇಶ್ ಫೋಗಟ್ ಮತ್ತು ಸಾಕ್ಷಿ ಮಲಿಕ್ ಅವರು ಪ್ರತಿಭಟನೆ ಆರಂಭಿಸಿದ್ದರು. ಅವರ ಪ್ರತಿಭಟನೆಗೆ ದೇಶಾದ್ಯಂತ ಬೆಂಬಲ ವ್ಯಕ್ತವಾಗಿತ್ತು. ಆದರೆ, ಕೇಂದ್ರ ಸರ್ಕಾರದಲ್ಲಿ ಸಂಸದರೂ ಆಗಿರುವ ಬ್ರಿಜ್ ಭೂಷಣ್ ವಿರುದ್ಧ ಸರ್ಕಾರ ಯಾವುದೇ ಕ್ರಮವನ್ನು ಕೈಗೊಳ್ಳಲಿಲ್ಲ. ಬದಲಾಗಿ, ದೆಹಲಿ ಪೊಲೀಸರು ಧರಣಿ ನಿರತ ಕುಸ್ತಿಪಟುಗಳನ್ನು ಜಂತರ್-ಮಂತರ್‌ನಿಂದ ಹೊರಗಟ್ಟಲು ಭಾರೀ ಪ್ರಯತ್ನ ನಡೆಸಿದ್ದರು.
ಮೇ 28 ರಂದು ಕುಸ್ತಿಪಟುಗಳು ಜಂತರ್ ಮಂತರ್‌ನಿಂದ ಹೊಸ ಸಂಸತ್ತಿನ ಭವನದ ಕಡೆಗೆ ಮೆರವಣಿಗೆ ಹೊರಟಿದ್ದರು. ಅವರನ್ನು ಪೊಲೀಸರು ತಡೆದಿದ್ದರು. ಜೂನ್ 7 ರಂದು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಬ್ರಿಜ್ ಭೂಷಣ್ ಅವರ ಕುಟುಂಬದ ಸದಸ್ಯರು ಅಥವಾ ಆಪ್ತರು ಯಾರೂ ಕುಸ್ತಿ ಫೆಡರೇಷನ್ ಚುನಾವಣೆಗೆ ಸ್ಪರ್ಧಿಸಲು ಅನುಮತಿ ನೀಡುವುದಿಲ್ಲ ಎಂದು ಭರವಸೆ ನೀಡದ ಬಳಿಕ, ಪ್ರತಿಭಟನೆಯನ್ನು ಸ್ಥಗಿತಗೊಳಿಸಿದ್ದರು.
ಆದರೆ, ಈಗ ಬ್ರಿಜ್ ಭೂಷಣ್ ಅವರ ಆಪ್ತ ಸಂಜಯ್ ಕುಸ್ತಿ ಫೆಡರೇಷನ್‌ನ ನೂತನ ಅಧ್ಯಕ್ಷರಾಗಿದ್ದಾರೆ. ಅಲ್ಲದೆ, ಸಂಜಯ್ ಆರ್‌ಎಸ್‌ಎಸ್ ಹಿನ್ನೆಲೆಯನ್ನೂ ಹೊಂದಿದ್ದಾರೆ.