ಮೃತರ ಅಂತ್ಯಸಂಸ್ಕಾರ ಮಾಡಲು ಸ್ಮಶಾನ ಜಾಗವಿಲ್ಲದೆ ಕುಟುಂಬವೊಂದು ರಸ್ತೆ ಬದಿಯಲ್ಲೇ ಮೃತ ವ್ಯಕ್ತಿಯೊಬ್ಬರ ಅಂತ್ಯಸಂಸ್ಕಾರ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ದುರ್ಗದಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿ ಸಾರ್ವಜನಿಕ ಸ್ಮಶಾನವಿಲ್ಲದ ಕಾರಣ, ರಸ್ತೆ ಬದಿಯಲ್ಲೇ ಅಂತ್ಯ ಸಂಸ್ಕಾರ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಗ್ರಾಮದ ತಿಮ್ಮರಾಜು ಎಂಬವರ ತಂದೆ ಪೆದ್ದಯ್ಯ ಅವರು ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದರು. ಅವರ ಅಂತ್ಯಸಂಸ್ಕಾರ ಮಾಡಲು ಗ್ರಾಮದಲ್ಲಿ ಸ್ಮಶಾನವಿಲ್ಲದ ಕಾರಣ, ಕುಟುಂಬದವರು ರಸ್ತೆ ಬದಿಯಲ್ಲೇ ಅಂತ್ಯಸಂಸ್ಕಾರ ಮಾಡಿದ್ದಾರೆ.
ಗ್ರಾಮಕ್ಕೆ ಸ್ಮಶಾನ ಭೂಮಿ ಮಂಜೂರು ಮಾಡುವಂತೆ ತಾಲೂಕು ಕಚೇರಿಗೆ ಹಲವಾರು ಬಾರಿ ಗ್ರಾಮಸ್ಥರು ಮನವಿ ಸಲ್ಲಿಸಿದ್ದಾರೆ. ಆದರೆ, ಅಧಿಕಾರಿಗಳು ಗ್ರಾಮಸ್ಥರ ಮನವಿಗೆ ಸ್ಪಂದಿಸಿಲ್ಲ. ಹೀಗಾಗಿ, ಗ್ರಾಮಕ್ಕೆ ಸ್ಮಶಾನ ಭೂಮಿಯೂ ಇಲ್ಲವೆಂದು ಆರೋಪಿಸಲಾಗಿದೆ.
ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ರಾಜ್ಯಾದ್ಯಂತ ಹಲವಾರು ಗ್ರಾಮಗಳಲ್ಲಿ ಸ್ಮಶಾನ ಭೂಮಿಯ ಸಮಸ್ಯೆ ಇದೆ ಹಲವು ಗ್ರಾಮಗಳಲ್ಲಿ ಸ್ಮಶಾನ ಭೂಮಿ ಇದ್ದರೂ, ದಲಿತರಿಗೆ ಅಲ್ಲಿ ಅಂತ್ಯಸಂಸ್ಕಾರಕ್ಕೆ ಅವಕಾಶ ನೀಡುವುದಿಲ್ಲ ಎಂಬ ಆರೋಪಗಳೂ ಇವೆ. ಆದರೆ, ಸಮಸ್ಯೆಯನ್ನು ಪರಿಹರಿಸುವಲ್ಲಿ ಆಡಳಿತಾಂಗ ವಿಫಲವಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.