ತುಮಕೂರು ಜಿಲ್ಲೆಯಲ್ಲಿ ಒಂದು ಸಾವಿರಕೋಟಿ ವೆಚ್ಚದಲ್ಲಿ ಆರಂಭವಾಗಲಿರುವ ವಿವಿಧ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 2024 ಜನವರಿ 29, ಸೋಮವಾರದಂದು ಜಿಲ್ಲೆಗೆ ಭೇಟಿ ನೀಡಿ ಉದ್ಘಾಟನೆ, ಶಂಕುಸ್ಥಾಪನೆ, ಶಿಲಾನ್ಯಾಸ, ಭೂಮಿಪೂಜೆ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ (ಡಿ.27) ಪೂರ್ವಭಾವಿ ಸಭೆ ನಡೆಸಿ ಅವರು ಮಾತನಾಡಿದರು, ಜನವರಿ 29ರಂದು ಮುಖ್ಯಮಂತ್ರಿಗಳು ಜಿಲ್ಲೆಯಲ್ಲಿ ಪೂರ್ಣಗೊಂಡಿರುವ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಲಿದ್ದು, ಹೊಸದಾಗಿ ಪ್ರಾರಂಭಿಸಬೇಕಾಗಿರುವ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಶಿಲಾನ್ಯಾಸವನ್ನು ನೆರವೇರಿಸಿ ವಿವಿಧ ಯೋಜನೆಗಳಡಿ 30 ಸಾವಿರ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಿದ್ದಾರೆ.
ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ಗ್ಯಾರಂಟಿ ಯೋಜನೆಗಳು ಸೇರಿದಂತೆ ತಮ್ಮ ಇಲಾಖೆಯ ವಿವಿಧ ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ಸಿದ್ಧಪಡಿಸಬೇಕು. ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅವರು ಡಿಸೆಂಬರ್ 29ರಂದು ಮುಖ್ಯಮಂತ್ರಿ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಸಲಿದ್ದು, ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಪ್ರಗತಿ ವಿವರವನ್ನು ತಪ್ಪದೇ ಈ ಸಭೆಗೆ ತರಬೇಕೆಂದು ಸೂಚಿಸಿದರು.
ಗ್ರಾಮೀಣ ನೀರು ಮತ್ತು ನೈರ್ಮಲ್ಯ, ಲೋಕೋಪಯೋಗಿ, ಪಂಚಾಯತ್ ರಾಜ್ ಇಲಾಖೆ, ಸ್ಮಾರ್ಟ್ ಸಿಟಿ, ಪಾಲಿಕೆ ಸೇರಿದಂತೆ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ತಮ್ಮ ಇಲಾಖಾ ವ್ಯಾಪ್ತಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಆರ್ಥಿಕ ಹಾಗೂ ಭೌತಿಕ ಪ್ರಗತಿ ವಿವರಗಳುಳ್ಳ ಪಿಪಿಟಿಯನ್ನು ಸಿದ್ಧಪಡಿಸಬೇಕು ಹಾಗೂ ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಗ್ರಾಮೀಣ ಕೈಗಾರಿಕೆ, ಕಂದಾಯ, ಆರೋಗ್ಯ, ಕಾರ್ಮಿಕ ಮತ್ತು ಪಶು ಸಂಗೋಪನಾ ಇಲಾಖೆ ಸೇರಿದಂತೆ ವಿವಿಧ ನಿಗಮ ಮಂಡಳಿಗಳ ಅಧಿಕಾರಿಗಳು ತಮ್ಮ ಇಲಾಖೆಯಿಂದ ಫಲಾನುಭವಿಗಳಿಗೆ ವಿತರಿಸಲಾಗುವ ಸವಲತ್ತುಗಳ ವಿವರವನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಒದಗಿಸಬೇಕೆಂದು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಜಿ. ಪ್ರಭು, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮರಿಯಪ್ಪ, ಮಹಾನಗರಪಾಲಿಕೆ ಆಯುಕ್ತೆ ಅಶ್ವಿಜ ಬಿ.ವಿ. ಸೇರಿದಂತೆ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.