ಕಾಯಂ ನೇಮಕಾತಿಗೆ ಆಗ್ರಹಿಸಿ ತುಮಕೂರಿನ ಸಿದ್ದಗಂಗಾ ಮಠದಿಂದ ಜ.1ರಂದು ಆರಂಭಿಸಲಾಗಿದ್ದ ಅತಿಥಿ ಉಪನ್ಯಾಸಕರ ಪಾದಯಾತ್ರೆ ಗುರುವಾರ ಬೆಂಗಳೂರು ತಲುಪಿದ್ದು, ನಗರದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಸಮಾವೇಶ ನಡೆಸಿ, ಸರ್ಕಾರದ ನಡೆಯ ವಿರುದ್ಧ ಪ್ರತಿಭಟನೆ ನಡೆಸಿದರು.
ವಿವಿಧ ಪಕ್ಷಗಳ ಮುಖಂಡರು ಹಾಗೂ ವಿಧಾನ ಪರಿಷತ್ ಸದಸ್ಯರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಅತಿಥಿ ಶಿಕ್ಷಕರ ಸಮಸ್ಯೆಗಳನ್ನು ಆಲಿಸಿದರು.
ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಮಾತನಾಡಿ, “ಅತಿಥಿ ಶಿಕ್ಷಕರನ್ನು ಕಾಯಂ ಮಾಡಬೇಕು ಎಂದು ಈ ಹಿಂದೆ ಸಿದ್ದರಾಮಯ್ಯ ಅವರು, ಮುಖ್ಯಮತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದರು. ತಾವು ಅಧಿಕಾರಕ್ಕೆ ಬಂದರೆ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳುತ್ತೇವೆ ಎಂದಿದ್ದರು. ಈಗ ಅವರು ಅಧಿಕಾರದಲ್ಲಿ ಇದ್ದಾರೆ. ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು” ಎಂದು ಒತ್ತಾಯಿಸಿದರು.
ವಿಧಾನ ಪರಿಷತ್ ಸದಸ್ಯ ಶ್ರೀಕಂಠೇಗೌಡ ಮಾತನಾಡಿ, “ಸಿದ್ದರಾಮಯ್ಯ ಅವರೇ ಬೇಡಿಕೆ ಈಡೇರಿಸುತ್ತೇವೆ ಎಂದು ಅಧಿಕಾರಕ್ಕೆ ಬಂದಿದ್ದೀರಿ. ಈಗ ಸಬೂಬು ಹೇಳಬೇಡಿ. ಹತ್ತಾರು ವರ್ಷಗಳಿಂದ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಯಾವ ಕಾನೂನು ಅಡ್ಡಿ ಬರುವುದಿಲ್ಲ. ಇಚ್ಛಾಶಕ್ತಿ ಪ್ರದರ್ಶಿಸಿ ಬೇಡಿಕೆ ಈಡೇರಿಸಿ” ಎಂದು ಮನವಿ ಮಾಡಿದರು.
ಅತಿಥಿ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಹನುಮಂತಗೌಡ ಕಲ್ಮನಿ ಮಾತನಾಡಿ, “ಕೇವಲ 10 ತಿಂಗಳು ಮಾತ್ರ ಕೆಲಸ ನೀಡಲಾಗುತ್ತಿದೆ. ತಿಂಗಳಿಗೆ ಒಂದು ರಜೆ ಸೌಲಭ್ಯ ಕಲ್ಪಿಸಲಾಗಿದೆ. ಅದರಲ್ಲೂ ಸ್ಪಷ್ಟತೆ ಇಲ್ಲ. ಬಹಳಷ್ಟು ಉಪನ್ಯಾಸಕರು ಮನೆ ಬಾಡಿಗೆ ಕಟ್ಟಲಾಗದೆ, ಮಕ್ಕಳ ಶಾಲಾ ಶುಲ್ಕ ಭರಿಸಲಾಗದೆ ಪರಿತಪಿಸುತ್ತಿದ್ದಾರೆ. ಸರ್ಕಾರ ಕೂಡಲೇ ನಮಗೆ ಸೇವಾ ಭದ್ರತೆ ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ಪರಿಹಾರ ಸಿಗುವರೆಗೂ ನಾವು ಫ್ರೀಡಂ ಪಾರ್ಕಿನಲ್ಲಿ ಹೋರಾಟ ಮುಂದುವರೆಸುತ್ತೇವೆ” ಎಂದು ತಿಳಿಸಿದರು.
ಕಡಿಮೆ ಸಂಭಾವನೆ ಪಡೆದು ಉದ್ಯೋಗ ಭದ್ರತೆ ಇಲ್ಲದೆ ಕಾರ್ಯ ನಿರ್ವಹಿಸುತ್ತಿದ್ದೇವೆ. ಹೊಸ ಹೊಸ ಕಾಲೇಜು ಮತ್ತು ಜಿಲ್ಲೆಗೊಂದು ವಿಶ್ವವಿದ್ಯಾಲಯ ಸ್ಥಾಪಿಸುವಲ್ಲಿ ತೋರಿಸುವ ಉತ್ಸಾಹವನ್ನು ಸರ್ಕಾರ ಉಪನ್ಯಾಸಕರ ನೇಮಕಾತಿಯಲ್ಲಿ ತೋರಿಸುತ್ತಿಲ್ಲ ಎಂದು ಅತಿಥಿ ಉಪನ್ಯಾಸಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಸದಸ್ಯ ಎ.ದೇವೇಗೌಡ, ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ, ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಪೃಥ್ವಿರೆಡ್ಡಿ, ಸರ್ಕಾರಿ ಪದವಿಪೂರ್ವ ಕಾಲೇಜು ನೌಕರರ ಸಂಘದ ಅಧ್ಯಕ್ಷ ನಿಂಗೇಗೌಡ, ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ, ವಕೀಲ ಅನಂತ ನಾಯಕ ಮಾತನಾಡಿದರು.
ಪ್ರತಿಭಟನೆ ವೇಳೆ ಕೆಲವು ಉಪನ್ಯಾಸಕರು ಕುಸಿದು ಬಿದ್ದರು. ಅವರನ್ನು ಕೂಡಲೇ ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ದು, ಚಿಕಿತ್ಸೆ ನೀಡಲಾಯಿತು.