ರಾಜ್ಯದಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿರುವ 1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿ ಶ್ರೀಕಾಂತ್ ಪೂಜಾರಿಗೆ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಮೂವತ್ತು ವರ್ಷಗಳ ಹಿಂದಿನ ಹುಬ್ಬಳ್ಳಿ ಗಲಭೆ ಆರೋಪಿಯಾಗಿರುವ ಶ್ರೀಕಾಂತ್ ಪೂಜಾರಿ ಅವರನ್ನು ಇತ್ತೀಚೆಗೆ ಬಂಧಿಸಲಾಗಿತ್ತು. ಈತನ ಬಂಧನದ ಬಳಿಕ ರಾಮಮಂದಿರದ ಉದ್ಘಾಟನೆಯ ಸಂದರ್ಭ ಕರಸೇವಕನನ್ನು ರಾಜ್ಯ ಸರ್ಕಾರ ಬಂಧಿಸಿದೆ ಎಂದು ಆರೋಪಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಈ ಬೆಳವಣಿಗೆ ರಾಜ್ಯದಲ್ಲಿ ರಾಜಕೀಯ ಕೆಸೆರೆರಚಾಟಕ್ಕೂ ಕಾರಣವಾಗಿತ್ತು.
ಈ ನಡುವೆ ಬಂಧಿತ ಶ್ರೀಕಾಂತ್ ಪೂಜಾರಿ ಜಾಮೀನಿಗಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರು, ಷರತ್ತುಬದ್ದ ಜಾಮೀನು ಮಂಜೂರು ಮಾಡಿದ್ದಾರೆ. ಹುಬ್ಬಳ್ಳಿ ನಗರ ಠಾಣೆಯ ಪೊಲೀಸರು ಈತನನ್ನು ಬಂಧಿಸಿದ್ದರು.
ಡಿ. 5, 1992ರಂದು ಹುಬ್ಬಳ್ಳಿ ನಗರದಲ್ಲಿ ಸಂಭವಿಸಿದ್ದ ಹಿಂಸಾಚಾರ ಸಂದರ್ಭ ಮಳಿಗೆಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಶ್ರೀಕಾಂತ್ ಪೂಜಾರಿ ಸೇರಿದಂತೆ ಒಟ್ಟು 9 ಜನರ ವಿರುದ್ಧ ಹುಬ್ಬಳ್ಳಿಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬಿಜೆಪಿ ನಾಯಕರು ಶ್ರೀಕಾಂತ್ ಪೂಜಾರಿಯನ್ನು ಕರಸೇವಕ ಎಂದು ಹೇಳಿಕೊಂಡಿತ್ತು. ಹೀಗಾಗಿ, ಶ್ರೀಕಾಂತ್ ವಿರುದ್ಧ ಈ ಹಿಂದೆ ಅಂದರೆ 1992 ರಿಂದ 2014ರವರೆಗೆ ಒಟ್ಟು 16 ಪ್ರಕರಣಗಳು ದಾಖಲಾಗಿದ್ದಾಗಿ ಸ್ವತಃ ಸರ್ಕಾರವೇ ಮಾಹಿತಿ ಬಹಿರಂಗಗೊಳಿಸಿತ್ತು.