ಸಂವಿಧಾನ, ಸಾಮಾಜಿಕ ನ್ಯಾಯ, ಸಹಬಾಳ್ವೆ ಮತ್ತು ಸ್ವಾಭಿಮಾನದ ಸಂರಕ್ಷಣೆಗಾಗಿ ಚಿತ್ರದುರ್ಗದ ಮಾದಾರ ಚನ್ನಯ್ಯ ಪೀಠದ ಪಕ್ಕದಲ್ಲಿರುವ ಮೈದಾನದಲ್ಲಿ ಶೋಷಿತರ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕೆ.ಎಂ ರಾಮಚಂದ್ರಪ್ಪ ತಿಳಿಸಿದ್ದಾರೆ.
ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. “ಶೋಷಿತ ಸಮುದಾಯಗಳ ಮಹಾ ಒಕ್ಕೂಟ, ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಸಮಾವೇಶ ಆಯೋಜಿಸಲಾಗಿದೆ. ಜನವರಿ 28ರಂದು ಸಮಾವೇಶ ನಡೆಯಲಿದೆ” ಎಂದು ತಿಳಿಸಿದ್ದಾರೆ.
“ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರು ಹಾಗೂ ಮುಖಂಡರು ಭಾಗಿಯಾಗಲಿದ್ದಾರೆ. ಸುಮಾರು 10 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ” ಎಂದಿದ್ದಾರೆ.
“ಕಾಂತರಾಜು ವರದಿ ಸ್ವೀಕರಿಸಿ, ಯಥಾವತ್ತಾಗಿ ಅಂಗೀಕರಿಸಬೇಕು. ಕೇಂದ್ರ ಸರ್ಕಾರ ಜಾತಿವಾರು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡಿಸಬೇಕು. ಇಡಬ್ಲ್ಯೂಎಸ್ ಶೇ.10 ಮೀಸಲಾತಿ ರದ್ದುಪಡಿಸಬೇಕು. ಮಹಿಳಾ ರಾಜಕೀಯ ಮೀಸಲಾತಿ ಕಾಯಿದೆ ಕೂಡಲೇ ಜಾರಿ ಮಾಡಬೇಕು. ರಾಜಕೀಯ ಕ್ಷೇತ್ರದಲ್ಲೂ ಒಳಮೀಸಲಾತಿ ತರಬೇಕು. ರಾಜಕೀಯ ಮೀಸಲಾತಿಯಲ್ಲಿ ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಹಿಂದುಳಿದ ಜಾತಿಗಳಿಗೆ ಮತ್ತು ಅಲ್ಪಸಂಖ್ಯಾತರಿಗೆ ಅವಕಾಶ ಕಲ್ಪಿಸಬೇಕು ಎಂಬುದು ಸೇರಿದಂತೆ ಹಲವು ಹಕ್ಕೊತ್ತಾಯಗಳನ್ನು ಸಮಾವೇಶದಲ್ಲಿ ಮಂಡಿಸಲಾಗುವುದು” ಎಂದು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಹೊದಿಗೆರೆ ರಮೇಶ್.ಡಿ.ಬಸವರಾಜ್, ಎಣ್ಣೆಗೆರೆ ಆರ್ ವೆಂಕಟರಾಮು. ಎಂ.ರಾಮಚಂದ್ರಪ್ಪ, ಅಂಜಿನಪ್ಪ,ಸುಬ್ರಹ್ಮಣ್ಯ, ಹೆಚ್.ಚಂದ್ರಪ್ಪ ಮತ್ತಿತರರಿದ್ದರು.