ಉಪತಹಸೀಲ್ದಾರ್ ಕಿರುಕುಳಕ್ಕೆ ಬೇಸತ್ತ ಕಂಪ್ಯೂಟರ್ ಆಪರೇಟರ್ ನಾಡಕಚೇರಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯಲ್ಲಿ ನಡೆದಿದೆ.
ವಿಕಲಚೇತನರಾಗಿ ಕಂಪ್ಯೂಟರ್ ಆಪರೇಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಮೇಶ್ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಉಪತಹಸೀಲ್ದಾರ್ ಶಿವಕುಮಾರ್ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ನಾಡ ಕಚೇರಿಯಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಕೂಡಲೇ ಪರಮೇಶ್ ಅವರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ರವಾನಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಪರಮೇಶ್ ಸಾವನ್ನಪ್ಪಿದ್ದಾರೆ.

“ಭಾನುವಾರ ಕೂಡ ಪರಮೇಶ್‌ಗೆ ನಾಡಕಚೇರಿಯಲ್ಲಿ ಕೆಲಸ ಮಾಡುವಂತೆ ತಾಕೀತು ಮಾಡಲಾಗಿದೆ. ಏಪ್ರಿಲ್ ನಿಂದ ವೇತನ ಬಂದಿಲ್ಲ. ಇದರಿಂದ ಕುಟುಂಬ ನಿರ್ವಹಣೆಗೆ ಸಮಸ್ಯೆಯಾಗಿದೆ. ವಿಕಲಚೇತನನಾಗಿದ್ದರೂ ಕನಿಕರ ತೋರದೆ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ. ನನ್ನ ಸಾವಿಗೆ ಉಪ ತಹಸೀಲ್ದಾರ್ ಶಿವಕುಮಾರ್ ಅವರೇ ನೇರ ಕಾರಣ” ಮೃತ ಪರಮೇಶ ಡೆತ್ ನೋಟ್‌ನಲ್ಲಿ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಈ ಕುರಿತು ಹುಲ್ಲಹಳ್ಳಿ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.