ಹಿರಿಯ ಪತ್ರಕರ್ತೆ ದಿ. ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ 11ನೇ ಆರೋಪಿಯಾಗಿರುವ ಎನ್. ಮೋಹನ್ ನಾಯಕ್ ಎಂಬಾತನಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವುದನ್ನು ವಿರೋಧಿಸಿ ಗೌರಿ ಲಂಕೇಶ್ ಸಹೋದರಿ ಕವಿತಾ ಲಂಕೇಶ್ ಅವರು ಸುಪ್ರೀಂ ಕೊರ್ಟಿಗೆ ಮೇಲ್ಮನವಿ ಸಲ್ಲಿಸಿದ್ದಾರೆ.
55 ವರ್ಷದ ಶೂಟರ್‌ಗಳಿಗೆ ಆಶ್ರಯ ನೀಡಲು ಮನೆ ಬಾಡಿಗೆ ಸೇರಿದಂತೆ ಲಾಜಿಸ್ಟಿಕ್ಸ್ ಒದಗಿಸಿದ ಆರೋಪ ಹೊತ್ತಿರುವ ಮೋಹನ್ ನಾಯಕ್‌ಗೆ ಕರ್ನಾಟಕ ಹೈಕೋರ್ಟ್ ಡಿಸೆಂಬರ್ 7, 2023 ರಂದು ಜಾಮೀನಿನ ಮೇಲೆ ಬಿಡುಗಡೆಗೆ ಮಾಡಲು ಆದೇಶಿಸಿತ್ತು. ಇದರ ವಿರುದ್ಧ ಕವಿತಾ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ಬಗ್ಗೆ ಈ ದಿನ.ಕಾಮ್ ಜೊತೆಗೆ ಮಾತನಾಡಿದ ಕವಿತಾ ಲಂಕೇಶ್ ಪರವಾಗಿ ವಾದಿಸುತ್ತಿರುವ ಹೈಕೋರ್ಟ್ ನ್ಯಾಯವಾದಿ ಎಸ್ ಬಾಲನ್, “ಜಾಮೀನು ನೀಡಿದ ಹೈಕೋರ್ಟ್ ತೀರ್ಪಿನ ವಿರುದ್ಧ ಕವಿತಾ ಲಂಕೇಶ್ ಅವರು ಡಿಸೆಂಬರ್ 15, 2023 ರಂದು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆಗೆ ಇನ್ನಷ್ಟೇ ದಿನಾಂಕ ನಿಗದಿಯಾಗಲಿದೆ” ಎಂದು ತಿಳಿಸಿದ್ದಾರೆ.
ಈ ನಡುವೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಕೂಡ ಜಾಮೀನು ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸುವ ಪ್ರಕ್ರಿಯೆಯಲ್ಲಿದ್ದು, ಈ ವಿಷಯವು ಕಾನೂನು ಇಲಾಖೆ ಸಮಿತಿಯ ಮುಂದಿದೆ ಎಂದು ವರದಿಯಾಗಿದೆ.
ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ಮೋಹನ್ ನಾಯಕ್
ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿದ್ದ ಮೋಹನ್ ನಾಯಕ್ ಜಾಮೀನು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಪುರಸ್ಕರಿಸಿದ್ದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಪೀಠ ಡಿಸೆಂಬರ್ 7, 2023ರಂದು ಅವರಿಗೆ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಗೆ ಮಾಡಲು ಆದೇಶಿತ್ತು.
1 ಲಕ್ಷ ಮೌಲ್ಯದ ವೈಯಕ್ತಿಕ ಬಾಂಡ್ ಹಾಗೂ ಇಬ್ಬರ ಭದ್ರತಾ ಖಾತರಿ ಒದಗಿಸಬೇಕು. ಪ್ರತಿ ವಿಚಾರಣೆಗೂ ನ್ಯಾಯಾಲಯಕ್ಕೆ ಹಾಜರಾಗಬೇಕು. ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು. ಇಂಥದ್ದೇ ಪ್ರಕರಣದಲ್ಲಿ ಭಾಗಿಯಾಗುವಂತಿಲ್ಲ ಎಂಬ ಷರತ್ತುಗಳನ್ನು ನ್ಯಾಯಪೀಠ ವಿಧಿಸಿತ್ತು. ಗೌರಿ ಲಂಕೇಶ್ ಪ್ರಕರಣದಲ್ಲಿ 56 ವರ್ಷದ ಮೋಹನ್ ನಾಯಕ್ ಜಾಮೀನು ಪಡೆದ ಮೊದಲ ಆರೋಪಿ ಎನಿಸಿದ್ದರು.
ವಿಶೇಷ ನ್ಯಾಯಾಲಯ ಸ್ಥಾಪನೆಗೆ ಆದೇಶಿಸಿದ್ದ ಸಿಎಂ ಸಿದ್ದರಾಮಯ್ಯ
ಗೌರಿ ಲಂಕೇಶ್ ಹಾಗೂ ಹಿರಿಯ ಸಾಹಿತಿ, ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಆದೇಶ ಹೊರಡಿಸಿದ್ದರು.
ಪ್ರಕರಣದ ವಿಚಾರಣೆಯು ನ್ಯಾಯಾಲಯದಲ್ಲಿ ಜುಲೈ, 2022 ರಿಂದ ಪ್ರಾರಂಭಗೊಂಡಿದ್ದು, ನ್ಯಾಯಾಲಯದ ಅನುದಿನದ ಪ್ರಕರಣಗಳು ಸಾಕಷ್ಟು ಸಂಖ್ಯೆಯಲ್ಲಿ ಇರುವುದರಿಂದ ವಿಚಾರಣೆಯು ನಿಧಾನಗತಿಯಲ್ಲಿ ಸಾಗಿದೆ. ಆದ್ದರಿಂದ, ಈ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸಿ, ಪೂರ್ಣಾವಧಿ ನ್ಯಾಯಾಧೀಶರನ್ನು ನೇಮಕ ಮಾಡುವಂತೆ ಗೌರಿ ಲಂಕೇಶ್ ಸಹೋದರಿ ಕವಿತಾ ಲಂಕೇಶ್ ರವರು ಸರ್ಕಾರವನ್ನು ಕೋರಿದ್ದರು. ಇದನ್ನು ಸಿಎಂ ಸಿದ್ದರಾಮಯ್ಯ ಪುರಸ್ಕರಿಸಿದ್ದರು.
ಗೌರಿ ಲಂಕೇಶ್ 2017ರ ಸೆ.5ರಂದು ಹತ್ಯೆಗೀಡಾಗಿದ್ದು, ಈ ಸಂಬಂಧ ವಿಶೇಷ ತನಿಖಾ ದಳ ರಚಿಸಲಾಗಿದೆ. ಇದುವರೆಗೂ 18 ಆರೋಪಿಗಳು ಬಂಧನಕ್ಕೊಳಗಾಗಿದ್ದು, 1200 ಪುರಾವೆ ಹಾಗೂ 500ಕ್ಕೂ ಹೆಚ್ಚು ವಿವಿಧ ಬಗೆಯ ಸಾಕ್ಷ್ಯಗಳನ್ನೊಳಗೊಂಡ ಚಾರ್ಜ್ ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.