ಶಾಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಅನಪುರ ಶಾಲೆಯ ಮುಖ್ಯಶಿಕ್ಷಕನನ್ನು ಅಮಾನತು ಮಾಡಲಾಗಿದೆ.
ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಅನಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕನನ್ನು ಅಮಾನತು ಮಾಡಿ ಯಾದಗಿರಿ ಜಿಲ್ಲಾ ಪಂಚಾಯತ್ ಸಿಇಒ ಗರಿಮಾ ಪನ್ವಾರ ಆದೇಶ ಹೊರಡಿಸಿದ್ದಾರೆ.
ಶಾಲೆಯಲ್ಲಿ ಮುಖ್ಯಶಿಕ್ಷಕ ವಿದ್ಯಾರ್ಥಿಗಳನ್ನು ತನ್ನ ಚೇಂಬರ್‌ಗೆ ಕರೆಸಿಕೊಂಡು ಮೈ ಮುಟ್ಟುವುದು, ಕೆನ್ನೆ ಚಿವುಟುವುದು ಹಾಗೂ ಅಶ್ಲೀಲ ಜೋಕ್‌ಗಳನ್ನು ಹೇಳಿ ವಿದ್ಯಾರ್ಥಿಗಳೊಂದಿಗೆ ಅನುಚಿತವಾಗಿ ವರ್ತಿಸಿದ್ದರು ಎಂದು ಆರೋಪಿಸಲಾಗಿದೆ.
ವಿದ್ಯಾರ್ಥಿಗಳ ಜೊತೆ ಅಸಭ್ಯವಾಗಿ ವರ್ತಿಸುತ್ತಿರುವುದನ್ನು ತಿಳಿದು ಮುಖ್ಯಶಿಕ್ಷಕನಿಗೆ ಗ್ರಾಮ ಪಂಚಾಯತಿ ಮಾತಿ ಅಧ್ಯಕ್ಷ ಗೋಪಾಲರೆಡ್ಡಿ ಬುದ್ಧಿ ಹೇಳಿದ್ದರು. ಆದರೂ, ಆತ ತನ್ನ ಚಾಳಿ ಬಿಟ್ಟಿರಲಿಲ್ಲ ಎಂದು ಹೇಳಲಾಗಿದೆ.
ಇತ್ತೀಚೆಗೆ, ಮುಖ್ಯಶಿಕ್ಷಕನ ದುರ್ವರ್ತನೆ ವಿರುದ್ಧ ವಿದ್ಯಾರ್ಥಿಗಳ ಪೋಷಕರು ಶಿಕ್ಷಣ ಇಲಾಖೆಗೆ ದೂರು ನೀಡಿದ್ದರು. ಬಳಿಕ, ಕ್ಷೇತ್ರ ಶಿಕ್ಷಣಾಧಿಕಾರಿ, ತಹಶೀಲ್ದಾರ್ ಹಾಗೂ ಹಲವು ಅಧಿಕಾರಗಳು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಹೇಳಿಕೆ ಪಡೆದಿದ್ದಾರೆ.
ಕ್ಷೇತ್ರ ಶಿಕ್ಷಣಾಧಿಕಾರಿ ನೀಡಿದ ವರದಿಯನ್ನು ಆಧರಿಸಿ, ಶಿಕ್ಷಕನನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯತಿ ಸಿಇಒ ಆದೇಶ ಹೊರಡಿಸಿದ್ದಾರೆ.
“ಶಿಕ್ಷಕನ ವಿರುದ್ಧ ಎಫ್ಐಆರ್ ದಾಖಲಿಸಲು ಸೂಚಿಸಿದ್ಧೇನೆ. ಆತನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿಗೆ ತಿಳಿಸಿದ್ದೇನೆ” ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರು ಹೇಳಿದ್ದಾರೆ.