ಆಂಧ್ರ ಪ್ರದೇಶ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ಕೌಶಲ್ಯಾಭಿವೃದ್ಧಿ ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ಭಿನ್ನ ತೀರ್ಪು ನೀಡಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಿರುದ್ಧ ಬೋಸ್ ಮತ್ತು ನ್ಯಾಯಮೂರ್ತಿ ಬೆಲಾ ಎಂ.ತ್ರಿವೇದಿ ಅವರನ್ನೊಳಗೊಂಡ ಪೀಠ ತೀರ್ಪು ನೀಡಿದೆ. ಆದರೆ ಇಬ್ಬರು ನ್ಯಾಯಾಧೀಶರು ವಿಭಿನ್ನ ತೀರ್ಪು ನೀಡಿದ್ದಾರೆ.
ನ್ಯಾಯಮೂರ್ತಿ ಅನಿರುದ್ಧ ಬೋಸ್ ಅವರು, ಸೆಕ್ಷನ್ 17ಎ ಭ್ರಷ್ಟಾಚಾರ ತಡೆ ಕಾಯ್ದೆ ಅನ್ವಯ ಸರ್ಕಾರಿ ನೌಕರನ ತನಿಖೆಗೆ ಪೂರ್ವಾನುಮತಿ ಪಡೆಯಬೇಕು. ಆದರೆ ಚಂದ್ರಬಾಬು ಅವರನ್ನು ವಿಚಾರಣೆಗೆ ಒಳಪಡಿಸಲು ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆದಿಲ್ಲ ಎಂದು ತೀರ್ಪು ನೀಡಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅನಂತಕುಮಾರ್ ಎಂಬ ಬೆಂಕಿ ಬಾಲಕನೂ, ಜನಿವಾರದಾಟವೂ
ಈ ತೀರ್ಪಿಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ ಪೀಠದ ಮತ್ತೊಬ್ಬ ನ್ಯಾಯಮೂರ್ತಿ ಬೆಲಾ ಎಂ ತ್ರಿವೇದಿ, ಸೆಕ್ಷನ್ 17ಎ ಕಾಯ್ದೆಯನ್ನು 2018ರಲ್ಲಿ ತಿದ್ದುಪಡಿ ತರುವ ಮೊದಲೇ ಚಂದ್ರಬಾಬು ನಾಯ್ಡು ವಿರುದ್ಧ ಪ್ರಕರಣ ದಾಖಲಾಗಿದೆ. ಆದ ಕಾರಣ ತನಿಖೆಗೆ ಸೆಕ್ಷನ್ 17ಎ ಕಾಯ್ದೆಯ ಪೂರ್ವಾನುಮತಿ ಅಗತ್ಯವಿಲ್ಲ ಎಂದು ತಿಳಿಸಿದರು.
ಪ್ರಕರಣವನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ತ್ರಿಸದಸ್ಯ ಪೀಠಕ್ಕೆ ವರ್ಗಾಯಿಸಲಾಯಿತು. ಈ ಪ್ರಕರಣದಲ್ಲಿ ನಾಯ್ಡು ಅವರಿಗೆ ಆಂಧ್ರ ಪ್ರದೇಶ ಹೈಕೋರ್ಟ್ ಕಳೆದ ವರ್ಷ ನವೆಂಬರ್ 20ರಂದು ನಿಯಮಿತ ಜಾಮೀನು ಮಂಜೂರು ಮಾಡಿತ್ತು.
ಸೆಕ್ಷನ್ 17ಎ ತಿದ್ದುಪಡಿಯನ್ನು ಜುಲೈ 26,2018 ರಂದು ಜಾರಿಗೊಳಿಸಲಾಗಿದೆ. ಈ ಕಾಯ್ದೆಯ ಅನ್ವಯ ಸರ್ಕಾರಿ ಅಧಿಕಾರಿಯನ್ನು ಭ್ರಷ್ಟಾಚಾರ ತಡೆ ಕಾಯ್ದೆಯಡಿಯಲ್ಲಿ ವಿಚಾರಣೆಗೊಳಪಡಿಸಲು ಅಥವಾ ತನಿಖೆಗೊಳಪಡಿಸಲು ಸಂಬಂಧಿಸಿದ ಪೊಲೀಸ್ ಅಧಿಕಾರಿಯು ಸಕ್ಷಮ ಪ್ರಾಧಿಕಾರದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.