“ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯನ್ನು ಭಾರತ ಚುನಾವಣಾ ಆಯೋಗವು ಈಗಾಗಲೇ ಘೋಷಿಸಿದ್ದು, ಅದರಂತೆ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ” ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಾಹಿತಿ ನೀಡಿದರು.
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ ಗುರುವಾರ ಪಾಲಿಕೆಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, “ಭಾರತ ಚುನಾವಣಾ ಆಯೋಗವು ಶಿಕ್ಷಕರ ಉಪ ಚುನಾವಣೆಯ ವೇಳಾಪಟ್ಟಿಯನ್ನು ಹೊರಡಿಸಿದ್ದು, ಅದರಂತೆ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ” ಎಂದು ಹೇಳಿದರು.
“2024ರ ಜನವರಿ 23ರಂದು ಅಧಿಸೂಚನೆ ಹೊರಡಿಸಿ, ಜನವರಿ 30ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಜನವರಿ 31ರಂದು ನಾಮಪತ್ರಗಳ ಪರಿಶೀಲನೆ, ಫೆಬ್ರವರಿ 2ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿದ್ದು, ಫೆಬ್ರವರಿ 16ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಫೆಬ್ರವರಿ 20 ರಂದು ಮತ ಎಣಿಕೆ ನಡೆಯಲಿದ್ದು, ಫೆಬ್ರವರಿ 23 ರಂದು ಚುನಾವಣಾ ಪ್ರಕ್ರಿಯೆ ಕೊನೆಗೊಳ್ಳಲಿದೆ” ಎಂದು ತಿಳಿಸಿದರು.
“ಶಿಕ್ಷಕರ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯಲ್ಲಿ 11,763 ಮತದಾರರಿದ್ದು, ಹೊಸದಾಗಿ ಬಂದಿರುವ 1048 ಅರ್ಜಿಗಳನ್ನು ಪರಿಶೀಲಿಸಲಾಗುತ್ತಿದೆ. ಅಂತಿಮ ಮತದಾರರ ಪಟ್ಟಿಯಲ್ಲಿ ನಕಲಿರುವ 97 ಮತಗಳನ್ನು ಕಾನೂನು ರೀತಿಯಲ್ಲಿ ತೆಗೆಯಲು ಕ್ರಮ ಕೈಗೊಳ್ಳಲಾಗುವುದು. ನಗರದ 28 ವಿಧಾನಸಭಾ ಕ್ಷೇತ್ರದಲ್ಲಿ 34 ಮತಗಟ್ಟೆಗಳಿರಲಿವೆ” ಎಂದು ಹೇಳಿದರು.
ಮಾದರಿ ನೀತಿ ಸಂಹಿತೆ ಜಾರಿ
“ಮಾದರಿ ನೀತಿ ಸಂಹಿತೆಯು ಭಾರತ ಚುನಾವಣೆ ಆಯೋಗದಿಂದ ಶಿಕ್ಷಕರ ಚುನಾವಣೆಯನ್ನು ಘೋಷಣೆ ಮಾಡಿರುವ ದಿನದಿಂದ ಅಂದರೆ ಜನವರಿ 16 ರಂದು ಜಾರಿಗೆ ಬರಲಿದ್ದು, ಫೆಬ್ರವರಿ 23ರಂದು ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳುವ ದಿನ ನೀತಿ ಸಂಹಿತೆಯು ಪೂರ್ಣಗೊಳ್ಳಲಿದೆ” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಿಲ್ಡರ್ ಅಪಹರಿಸಿ ಕಿರುಕುಳ ನೀಡಿದ 8 ಜನರ ವಿರುದ್ಧ ಎಫ್ಐಆರ್ ದಾಖಲು
ರಾಜ್ಯಮಟ್ಟದ ಗಣರಾಜ್ಯೋತ್ಸವ ಆಚರಣೆಗೆ ಎಲ್ಲ ರೀತಿಯ ಸಿದ್ದತೆ
2024ನೇ ಸಾಲಿನ ರಾಜ್ಯ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆಯು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯಲಿದ್ದು, ಅದಕ್ಕೆ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
“ಗಣರಾಜ್ಯೋತ್ಸವ ದಿನಾಚರಣೆಯ ದಿನ ಆವರಣಕ್ಕೆ ಬರುವ ಅತೀ ಗಣ್ಯರು, ಗಣ್ಯರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಯಾವ ದ್ವಾರದಲ್ಲಿ ಬರಬೇಕು ಹಾಗೂ ವಾಹನಗಳ ಪಾರ್ಕಿಂಗ್ ಸ್ಥಳ ವಿಚಾರವಾಗಿ ಯಾವುದೇ ಲೋಪಗಳಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು” ಸೂಚನೆ ನೀಡಿದರು.
“ಪ್ರತಿ ವರ್ಷದಂತೆ ಗಣರಾಜ್ಯೋತ್ಸವ ಸಮಾರಂಭದಲ್ಲಿ ಕವಾಯತು ಪ್ರದರ್ಶನಕ್ಕಾಗಿ ಅಗತ್ಯ ಏರ್ಪಾಡುಗಳನ್ನು ಮಾಡಿಕೊಂಡು ಪೊಲೀಸ್ ಇಲಾಖೆಯಿಂದ ಶಿಷ್ಟಾಚಾರದನ್ವಯ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು” ಎಂದು ಸೂಚನೆ ನೀಡಿದರು.
“ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ವೇಳೆ ಮೈದಾನದಲ್ಲಿ ಧೂಳು ಏಳುವ ಸಾಧ್ಯತೆಯಿದ್ದು, ಮೈದಾನಕ್ಕೆ ನೀರನ್ನು ನಿಯಮಿತವಾಗಿ ಸಿಂಪಡಿಸಿ ಮಣ್ಣಿನ ಧೂಳು ಏಳದಂತೆ ಅಗತ್ಯ ಕ್ರಮ ವಹಿಸಬೇಕು” ಎಂದರು.
ಈ ವೇಳೆ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಆರ್ ರಾಮಚಂದ್ರನ್, ಅಪರ ಜಿಲ್ಲಾ ಚುನಾವಣಾಧಿಕಾರಿ ಡಾ. ಹರೀಶ್ ಕುಮಾರ್, ದಯಾನಂದ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.