ಮೈಸೂರು ಜಿಲ್ಲೆಯಾದ್ಯಂತ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(ಎನ್‌ಜಿಟಿ) ರಾಜ್ಯ ಮಟ್ಟದ ಮೇಲ್ವಿಚಾರಣಾ ಸಮಿತಿ ಅಧ್ಯಕ್ಷ, ನ್ಯಾಯಮೂರ್ತಿ ಸುಭಾಷ್ ಬಿ ಆಡಿ ಅವರು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದರು.
ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಘನತ್ಯಾಜ್ಯ ನಿರ್ವಹಣೆ ಕುರಿತ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
“ಜೈವಿಕ ತ್ಯಾಜ್ಯವನ್ನು ಪರಿಣಾಮಕಾರಿಯಾಗಿ ವಿಲೇವಾರಿ ಮಾಡುವತ್ತ ಗಮನ ಹರಿಸುವಂತೆ ಮತ್ತು ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡುವ ವ್ಯಾಪಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮತ್ತು ನಿಯಮಗಳನ್ನು ಉಲ್ಲಂಘಿಸುವ ವ್ಯಾಪಾರಿಗಳ ವ್ಯಾಪಾರಿ ಪರವಾನಗಿಯನ್ನು ರದ್ದುಗೊಳಿಸಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.
“ತಮ್ಮ ವ್ಯಾಪ್ತಿಯಲ್ಲಿ ಘನತ್ಯಾಜ್ಯವನ್ನು ಪರಿಣಾಮಕಾರಿಯಾಗಿ ವಿಲೇವಾರಿ ಮಾಡಲು ಅಗತ್ಯ ಸಂಖ್ಯೆಯ ಪೌರಕಾರ್ಮಿಕರನ್ನು ನೇಮಿಸಬೇಕು” ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
“ಸರಿಯಾದ ರಸ್ತೆ, ಯುಜಿಡಿ ಮತ್ತು ಇತರ ನಾಗರಿಕ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳದಿದ್ದರೆ ಡೆವಲಪರ್‌ಗಳಿಗೆ ಹೊಸ ಲೇಔಟ್‌ಗಳನ್ನು ಅಭಿವೃದ್ಧಿಪಡಿಸಲು ಅವಕಾಶ ನೀಡಬಾರದು” ಎಂದು ಮುಡಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಸಂಸ ಪ್ರತಿಭಟನೆ
ಪ್ಲಾಸ್ಟಿಕ್ ಕವರ್‌ಗಳನ್ನು ಮಾರಾಟ ಮಾಡುವ ವ್ಯಾಪಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದ ಮತ್ತು ಹೊಸದಾಗಿ ನಿರ್ಮಿಸಲಾದ ಅಂಗಡಿಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳದ ಚಾಮುಂಡಿ ಬೆಟ್ಟ ಗ್ರಾಮ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.