ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತಂದೆಯೊಬ್ಬ ಮಗನನ್ನೇ ಗುಂಡಿಕ್ಕಿ ಕೊಲೆ ಮಾಡಿದ ಘಟನೆ ಗುರುವಾರ ರಾತ್ರಿ ನಡೆದಿದೆ.
ನರ್ತನ್ ಬೋಪಣ್ಣ (32) ಕೊಲೆಯಾದ ದುರ್ದೈವಿ. ಸುರೇಶ್ ಆರೋಪಿ ತಂದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕರೆಕಲ್ನ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಸುರೇಶ್ ಎಂಬವರು ಮಗ ನರ್ತನ್ ಬೋಪಣ್ಣ ಅವರನ್ನು ಗುಂಡಿಕ್ಕಿ ಕೊಲೆ ಮಾಡಿದ್ದಾರೆ.
ಘಟನೆ ನಡೆದ ತಕ್ಷಣ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದರು. ಈ ವೇಳೆ, ನರ್ತನ್ ಗಂಭೀರವಾಗಿ ಗಾಯಗೊಂಡಿದ್ದರು. ಅವರು ಸಾವು ಬದುಕಿನ ನಡುವೆ ಹೋರಾಡುತ್ತಿದ್ದರು. ಇದನ್ನು ಗಮನಿಸಿದ ಪೊಲೀಸರು ಕೂಡಲೇ ನರ್ತನ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆದರೆ, ಚಿಕಿತ್ಸೆ ಫಲಕಾರಿಯಾಗದೇ, ಸಾವನ್ನಪ್ಪಿದ್ದಾರೆ. ಸದ್ಯ, ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಈ ಸುದ್ದಿ ಓದಿದ್ದೀರಾ? ತ್ಯಾಜ್ಯ ಉತ್ಪಾದಕರಿಂದ ಆಸ್ತಿ ತೆರಿಗೆಯೊಂದಿಗೆ ಸೇವಾ ಶುಲ್ಕ ಸಂಗ್ರಹಿಸಲು ಬಿಬಿಎಂಪಿ ನಿರ್ಧಾರ
ಸದ್ಯ ಘಟನೆಯ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರೆದಿದೆ.