ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ 75 ವರ್ಷವಾದರೂ ಗಟ್ಟಿಯಾಗಿ ನಿಲ್ಲಲು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಈ ದೇಶಕ್ಕೆ ಕೊಟ್ಟ ಬೃಹತ್ ಲಿಖಿತ ಸಂವಿಧಾನವೇ ಕಾರಣವಾಗಿದೆ ಎಂದು ಅರಣ್ಯ, ಜೈವಿಕ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಬಿ. ಖಂಡ್ರೆ ಹೇಳಿದರು.
ಬೀದರ ಜಿಲ್ಲಾಡಳಿತ ವತಿಯಿಂದ ಬೀದರ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 75ನೇ ಗಣರಾಜ್ಯೊತ್ಸವ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
“ಬಾಬಾ ಸಾಹೇಬ್ ಅಂಬೇಡ್ಕರ್ ಸೇರಿದಂತೆ ಸಂವಿಧಾನ ರಚನಾ ಸಮಿತಿ 2 ವರ್ಷ 11 ತಿಂಗಳು, 17 ದಿನಗಳ ಅವಧಿಯಲ್ಲಿ ಸುದೀರ್ಘ ಚರ್ಚೆ ನಡೆಸಿ ರಚಿಸಿದ ಲಿಖಿತ ಸಂವಿಧಾನ ನಮ್ಮದಾಗಿದೆ ಹಾಗೂ ನಮ್ಮ ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿದೆ. ಸರ್ವರಿಗೂ ಸಮಾನತೆ, ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ನೀಡಿದೆ” ಎಂದು ಹೇಳಿದರು.
“ಸಮಾಜ ಕಲ್ಯಾಣ ಇಲಾಖೆಯಿಂದ ಸಂವಿಧಾನ ಜಾಗೃತಿ ಜಾಥಾ ಅಭಿಯಾನವನ್ನು ಬೀದರ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದು, ಸಮಾಜದ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಮನಸುಗಳು ಇದರ ಭಾಗವಾಗಲಿದ್ದಾರೆ. ಜಾಗೃತಿ ಜಾಥಾವನ್ನು ಸ್ತಬ್ಧಚಿತ್ರಗಳ ಮೂಲಕ ಪ್ರಜಾಪ್ರಭುತ್ವದ ಸಿದ್ಧಾಂತ, ಸಮಾನತೆಯ ತತ್ವ, ಸಮಾಜೋದ್ಧಾರದ ಆಕಾಂಕ್ಷೆಗಳನ್ನು ಜನರಿಗೆ ಅರಿವು ಮೂಡಿಸಲಾಗುತ್ತಿದ್ದು, ಈ ಜಾಥವು ಬೀದರ ಜಿಲ್ಲೆಯ 185 ಗ್ರಾಮ ಪಂಚಾಯಿತಿಗಳಲ್ಲಿ ಫೆ.23ರವರೆಗೆ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಸಂಚರಿಸಿ ನಂತರ ಫೆ.25 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲ್ಲಿರುವ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದೆ” ಎಂದರು.
ಬಳಿಕ ಪ್ರಜಾಪ್ರಭುತ್ವದ ಸಿದ್ಧಾಂತ, ಸಮಾನತೆಯ ತತ್ವ, ಸಮಾಜೋದ್ಧಾರದ ಆಕಾಂಕ್ಷೆಗಳನ್ನು ಜನರಿಗೆ ಅರಿವು ಮೂಡಿಸುವ ಸಲುವಾಗಿ ಸ್ತಬ್ಧಚಿತ್ರಗಳ ಸಂವಿಧಾನ ಜಾಗೃತಿ ಜಾಥಾ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಅಂದಾಜು 100 ಕೋಟಿ ವೆಚ್ಚದಲ್ಲಿ ಜಿಲ್ಲಾಡಳಿತ ಕಚೇರಿಗಳ ಸಂಕೀರ್ಣ ನಿರ್ಮಾಣ: ಸಚಿವ ಈಶ್ವರ ಖಂಡ್ರೆ
ಈ ಸಂದರ್ಭದಲ್ಲಿ ಪೌರಾಡಳಿತ ಹಾಗೂ ಹಜ್ ಸಚಿವ ರಹೀಮ್ ಖಾನ್, ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ವಿಧಾನ ಪರಿಷತ್ ಶಾಸಕರಾದ ರಘುನಾಥರಾವ ಮಲ್ಕಾಪೂರೆ, ಅರವಿಂದಕುಮಾರ ಅರಳಿ, ಬೀದರ ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ದೀಲಿಪ್ ಬದೋಲೆ, ಪೊಲೀಸ್ ಅಧೀಕ್ಷಕ ಚನ್ನಬಸವಣ್ಣ ಲಂಗೋಟಿ, ಸಹಾಯಕ ಆಯುಕ್ತ ಲವೀಶ್ ಓರ್ಡಿಯಾ, ಅಪರ ಜಿಲ್ಲಾಧಿಕಾರಿ ಶಿವುಕುಮಾರ ಶೀಲವಂತ, ಪೊಲೀಸ್ ಉಪಾಧೀಕ್ಷಕ ಮಹೇಶ ಮೇಘಣ್ಣನವರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಶಾಲಾ-ಕಾಲೇಜಿನ ಶಿಕ್ಷಕರು, ವಿದ್ಯಾರ್ಥಿಗಳು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.