ರಾಯಚೂರು ನಗರಸಭೆ ಶೀಘ್ರದಲ್ಲಿಯೇ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಲಿದೆ ಎಂದು ರಾಜ್ಯ ಪೌರಾಡಳಿತ ಸಚಿವ ರಹೀಮ್ ಖಾನ್ ಅವರು ಹೇಳಿದರು.
ರಾಯಚೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮುಖಂಡರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. “ಸಚಿವ ಸಂಪುಟದಲ್ಲಿ ಮೂರ್ನಾಲ್ಕು ಬಾರಿ ಈ ವಿಷಯದ ಬಗ್ಗೆ ಪ್ರಸ್ತಾಪಿಸಲಾಗಿದೆ. ನಗರ ಸಭೆಗೆ ಸರ್ಕಾರದಿಂದ ಕೇವಲ ₹10 ಕೋಟಿ ಅನುದಾನ ನೀಡಲಾಗುತ್ತದೆ. ಆದರೆ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿದರೆ, ₹50 ಕೋಟಿ ಅನುದಾನ ಬಿಡುಗಡೆಯಾಗಲಿದೆ. ಹಾಗಾಗಿ ಮಹಾನಗರ ಪಾಲಿಕೆಯಾಗಿ ಮೇಲ್ದದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಹೇಳಿದರು.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾರ್ಯಕರ್ತರು ಮತ್ತು ಮುಖಂಡರು ಅತ್ಯಂತ ಸಕ್ರಿಯವಾಗಿ ಚುನಾವಣೆಯನ್ನು ಎದುರಿಸಲು ಸಿದ್ಧಗೊಳ್ಳಬೇಕಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಾಮಕರಣ ನಿರೀಕ್ಷೆ ತೀವ್ರಗೊಂಡಿದೆ. ಮುಖಂಡರು ಮತ್ತು ಕಾರ್ಯಕರ್ತರಿಗೆ ನಾಮಕರಣ ದೊರೆಯಲೇಬೇಕು ಎನ್ನುವುದರಲ್ಲಿ ಯಾವುದೇ ಆಕ್ಷೇಪವಿಲ್ಲ. ಸರ್ಕಾರ ಈ ನಿಟ್ಟಿನಲ್ಲಿ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಮಟ್ಟದ ಎಲ್ಲ ನಾಮಕರಣಗಳನ್ನು ಮುಂದಿನ ಹದಿನೈದು ದಿನಗಳಲ್ಲಿ ಪೂರ್ಣಗೊಳಿಸುವಂತೆ ಆದೇಶಿಸಿದ್ದಾರೆ.
ಮುಂದಿನ 15 ದಿನಗಳಲ್ಲಿ ಎಲ್ಲ ನಾಮಕರಣ ಪ್ರಕ್ರಿಯೆಗಳು ಪೂರ್ಣಗೊಳ್ಳುವ ವಿಶ್ವಾಸವನ್ನು ವ್ಯಕ್ತಪಡಿಸಿದವರು, ಲೋಕಸಭೆ ಚುನಾವಣೆಯಲ್ಲಿ ಪ್ರತಿಯೊಬ್ಬ ಮುಖಂಡರು ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಅತಿ ಹೆಚ್ಚಿನ ಸ್ಥಾನ ಕಾಂಗ್ರೆಸ್ ಗೆಲ್ಲುವಂತೆ ಮಾಡುವ ಜವಾಬ್ದಾರಿ ನಿರ್ವಹಿಸಬೇಕಾಗಿದೆ” ಎಂದರು.
“ರಾಜ್ಯ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಬೋಸರಾಜು ಅವರು ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ನಿರಂತರವಾಗಿ ಸರ್ಕಾರದೊಂದಿಗೆ ಚರ್ಚಿಸುತ್ತಾರೆ. ಕೆಲ ಸಂದರ್ಭದಲ್ಲಿ ಸರ್ಕಾರದ ಮೇಲೆ ಒತ್ತಡ ಹಾಕುವ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಅನುದಾನವನ್ನು ಪಡೆಯುತ್ತಾರೆ. ರಾಯಚೂರು ವಿಶ್ವವಿದ್ಯಾಲಯ ಅನುದಾನಕ್ಕೆ ಸಂಬಂಧಿಸಿದ ಸಭೆಯಲ್ಲಿ ಮುಖ್ಯಮಂತ್ರಿಗಳೊಂದಿಗೆ ನೇರವಾಗಿ ಮಾತನಾಡುವ ಮೂಲಕ ₹48 ಕೋಟಿ ಅನುದಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ” ಎಂದರು.
“ಪೌರಾಡಳಿತ ಇಲಾಖೆಯಿಂದ ದೊರೆಯಬೇಕಾದ ಯಾವುದೇ ಸೌಕರ್ಯಗಳನ್ನು ರಾಯಚೂರು ಜಿಲ್ಲೆಗೆ ಮೊದಲ ಆದ್ಯತೆ ಮೇರೆಗೆ ನೀಡಲಾಗುತ್ತದೆ. ರಾಯಚೂರು ನಗರದಲ್ಲಿ ಅನೇಕ ಸಮಸ್ಯೆಗಳಿದ್ದು, ಈ ಬಗ್ಗೆ ಚರ್ಚಿಸಲು ಜಿಲ್ಲೆಯಲ್ಲಿ ಪರಿಶೀಲನಾ ಸಭೆ ನಡೆಸುವಂತೆ ಬೋಸರಾಜು ಅವರು ನಿರಂತರವಾಗಿ ಒತ್ತಾಯಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಈ ಪರಿಶೀಲನಾ ಸಭೆ ನಡೆಸಲಾಗುತ್ತಿದೆ” ಎಂದು ಹೇಳಿದರು.
“ಹಿಂದಿನ ಬಿಜೆಪಿ ಸರ್ಕಾರ ಬಡವರು ಮತ್ತು ದಲಿತರ ಹಾಗೂ ರೈತರ ಬಗ್ಗೆ ಯಾವುದೇ ಕಾಳಜಿ ಹೊಂದಿರಲಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ದಲಿತರು, ಬಡವರು ಹಾಗೂ ರೈತರ ಪರ ಕಳಕಳಿ ಹಿನ್ನೆಲೆಯಲ್ಲಿ ಐದು ಗ್ಯಾರಂಟಿಗಳ ಮೂಲಕ ಜೀವನ ಭದ್ರತೆಯನ್ನು ಒದಗಿಸಿದೆ. ಈ ಐದು ಗ್ಯಾರಂಟಿಗಳನ್ನು ಸಮರ್ಪಕವಾಗಿ ಜಾರಿಗೊಳಿಸುವ ಗುರಿ ನಮ್ಮ ಮುಂದೆ ಇರುವುದರಿಂದ ಅನುದಾನ ಬಿಡುಗಡೆಯಲ್ಲಿ ಕೊಂಚ ತೊಂದರೆಯಾದರೂ, ಈಗ ಎಲ್ಲವೂ ಸರಿ ಹೋಗುವ ರೀತಿಯಲ್ಲಿ ಅನುದಾನ ಬಿಡುಗಡೆ ಆರಂಭಗೊಂಡಿದೆ” ಎಂದರು.
ಈ ಸುದ್ದಿ ಓದಿದ್ದೀರಾ? ಕೆರಗೋಡು ಧ್ವಜ ವಿವಾದ: ಫೆ.7ರಂದು ಕರೆ ಕೊಟ್ಟಿದ್ದ ಮಂಡ್ಯ ಬಂದ್ ವಾಪಸ್
ಕಾಂಗ್ರೆಸ್ ಮುಖಂಡ ಪಾರಸ್‌ಮಲ್ ಸುಖಾಣ ಅವರು ಮಾತನಾಡಿ, “ಜಿಲ್ಲೆಯಲ್ಲಿ ಅನೇಕ ಸಮಸ್ಯೆಗಳಿವೆ. ಈ ಬಗ್ಗೆ ಸರ್ಕಾರ ಗಮನಿಸಬೇಕಾಗಿದೆ” ಎಂದರು.
ಸಭೆಯಲ್ಲಿ ಸಚಿವ ಎನ್ ಎಸ್ ಬೋಸರಾಜು, ಶಾಸಕ ಹಂಪಯ್ಯ ನಾಯಕ, ಮುಖಂಡರುಗಳಾದ ಮಹ್ಮದ್ ಶಾಲಂ, ಜಿ ಬಸವರಾಜರೆಡ್ಡಿ, ಜಯಣ್ಣ, ಅಮರೇಗೌಡ ಹಂಚಿನಾಳ, ರುದ್ರಪ್ಪ ಅಂಗಡಿ ಸೇರಿದಂತೆ ಇತರರು ಇದ್ದರು.
ವರದಿ : ಹಫೀಜುಲ್ಲ