- ಸತೀಶ ಜಾರಕಿಹೊಳಿ ಪ್ರಚಾರ ವಾಹನಕ್ಕೆ ಸಿದ್ದರಾಮಯ್ಯ ಚಾಲನೆ
- ಬೆಳಗಾವಿಯಲ್ಲಿ 15 ಕ್ಷೇತ್ರಗಳು ಕಾಂಗ್ರೆಸ್ ಪಾಲು ಎಂದ ಸಿದ್ದರಾಮಯ್ಯ
ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಇಂದೇ (ಏ.15) ಬಿಡುಗಡೆಯಾಗಬಹುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬೆಳಗಾವಿಯಲ್ಲಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಕುರಿತು ಮಾಹಿತಿ ನೀಡಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಯ ಭರ್ಜರಿ ತಯಾರಿಯಲ್ಲಿರುವ ಕಾಂಗ್ರೆಸ್, ಈಗಾಗಲೇ ಅಭ್ಯರ್ಥಿಗಳ ಎರಡು ಪಟ್ಟಿ ಬಿಡುಗಡೆ ಮಾಡಿದೆ. ಇಂದು ಮೂರನೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಗಳಿವೆ.
ಈ ಕುರಿತು ಮಾತನಾಡಿದ ಸಿದ್ದರಾಮಯ್ಯ, “ಬೆಳಗಾವಿ ಜಿಲ್ಲೆಯ ಐದು ಕ್ಷೇತ್ರ ಸೇರಿ ಬಾಕಿ ಇರುವ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಅಂತಿಮ ಪಟ್ಟಿ ಇಂದು ಬಹುತೇಕ ಬಿಡುಗಡೆ ಆಗುತ್ತದೆ. ನಾನು ಪ್ರಚಾರ ಸಭೆ ಪ್ರಾರಂಭ ಮಾಡಿದ್ದೇನೆ” ಎಂದು ತಿಳಿಸಿದ್ದಾರೆ.
ಲಕ್ಷ್ಮಣ ಸವದಿ ಅವರಿಗೆ ಹೆಚ್ಚಿನ ಚುನಾವಣಾ ಜವಾಬ್ದಾರಿ ನೀಡುವ ಕುರಿತು ಮಾತನಾಡಿ, “ಬೆಳಗಾವಿಯಲ್ಲಿ ಮತ್ತು ಬೇರೆ ಎಲ್ಲೆಲ್ಲಿ ಪ್ರಚಾರಕ್ಕೆ ಹೋಗುತ್ತೇವೆ ಅಂತಾರೋ ಅಲ್ಲೆಲ್ಲಾ ಕಳುಹಿಸಿ ಕೊಡುತ್ತೇವೆ” ಎಂದಿದ್ದಾರೆ.
ಈ ಸುದ್ದಿ ಓದಿದ್ದೀರಾ? ಶಿಗ್ಗಾಂವಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಿಎಂ ಬಸವರಾಜ ಬೊಮ್ಮಾಯಿ
ನಗರದ ಕಾಂಗ್ರೆಸ್ ಭವನದ ಆವರಣದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಪ್ರಚಾರ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದ ಸಿದ್ದರಾಮಯ್ಯ, ಜಿಲ್ಲೆಯ 18 ಕ್ಷೇತ್ರಗಳ ಪೈಕಿ 15ರಲ್ಲಿ ಈ ಬಾರಿ ಕಾಂಗ್ರೆಸ್ ಗೆಲ್ಲಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
“ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಸಹ ಜಾರಿಕಿಹೊಳಿ ಅವರ ಪ್ರಚಾರದ ವಾಹನ ಬಳಸುತ್ತಾರೆ” ಎಂದು ತಿಳಿಸಿದ್ದಾರೆ.
ಈ ವೇಳೆ ಎಐಸಿಸಿ ಕಾರ್ಯದರ್ಶಿ ವಿಷ್ಣು ನಾಗ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ವಿಧಾನಪರಿಷತ್ ಸದಸ್ಯ ಪ್ರಕಾಶ ರಾಥೋಡ್, ಕೆಪಿಸಿಸಿ ಸದಸ್ಯ ರಾಜೇಂದ್ರ ಪಾಟೀಲ ಸೇರಿ ಮತ್ತಿತರರು ಉಪಸ್ಥಿತರಿದ್ದರು.
ಸಿದ್ದರಾಮಯ್ಯ ಅವರಿಗೆ ಈಗಾಗಲೇ ವರುಣಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಜೊತೆಗೆ ಕೋಲಾರದಿಂದಲೂ ಅವರು ಸ್ಪರ್ಧಿಸುತ್ತಾರೆ ಎನ್ನಲಾಗಿತ್ತು. ಆದರೆ, ಮೂಲಗಳ ಪ್ರಕಾರ ಸಿದ್ದರಾಮಯ್ಯ ಅವರು ಡಿ ಕೆ ಶಿವಕುಮಾರ್ ಆಪ್ತ ಕೊತ್ತೂರು ಮಂಜುನಾಥ್ ಅವರಿಗೆ ಟಿಕೆಟ್ ಕೊಡಿ ಎಂದಿದ್ದಾರೆ, ಸಿದ್ದರಾಮಯ್ಯ ಅವರು ಕೂಡ ವರುಣಾ ಕ್ಷೇತ್ರವೊಂದನ್ನೇ ಆಯ್ಕೆ ಮಾಡಿಕೊಳ್ಳುವರು ಎನ್ನಲಾಗುತ್ತಿದೆ.