- ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಟಾಸ್ಕ್‌ಫೋರ್ಸ್ ಸಭೆ
- ಪೈಪ್, ಮೋಟರ್, ಟ್ಯಾಂಕ್ ದುರಸ್ಥಿಗೆ ಅಗತ್ಯ ಸಿದ್ಧತೆ ಕೈಗೊಳ್ಳಲು ಸೂಚನೆ
ಜನರಿಗೆ ಸಮರ್ಪಕ ನೀರು ಸರಬರಾಜಿಗೆ ಸಂಬಂಧಿಸಿದಂತೆ ಕುಡಿಯುವ ನೀರಿನ ಯೋಜನೆಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ನಿಗಾವಹಿಸಬೇಕು ಎಂದು ಅಧಿಕಾರಿಗಳಿಗೆ ಕೊಪ್ಪಳ ಜಿಲ್ಲಾಧಿಕಾರಿ ಎಂ ಸುಂದರೇಶಬಾಬು ಸೂಚಿಸಿದರು.
ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಮುಂದಿನ ದಿನಗಳಲ್ಲಿ ಬೋರ್‌ವೆಲ್‌ಗಳಲ್ಲಿ ಕುಡಿಯುವ ನೀರು ಕಡಿಮೆಯಾದರೆ ಅದಕ್ಕೆ ಪರ್ಯಾಯವಾಗಿ ಖಾಸಗಿ ಬೋರ್‌ವೆಲ್ ಗುರುತಿಸಿ, ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು” ಎಂದು ನಿರ್ದೇಶನ ನೀಡಿದರು.
ಪೈಪ್‌ಲೈನ್ ಸೋರಿಕೆ, ಮೋಟರ್ ದುರಸ್ಥಿ ಮತ್ತು ಟ್ಯಾಂಕ್ ದುರಸ್ಥಿಗೆ ಸಂಬಂಧಿಸಿದಂತೆ ಸಾಮಗ್ರಿಗಳನ್ನು ಸಿದ್ದತೆಯಲ್ಲಿ ಇಟ್ಟುಕೊಳ್ಳಬೇಕು. ಒಂದು ವೇಳೆ ಪೈಪ್‌ಲೈನ್ ಲಿಕೇಜ್ ಮತ್ತು ಮೋಟರ್ ದುರಸ್ಥಿ ಸಮಸ್ಯೆ ಬಂದರೆ ಅವುಗಳನ್ನು ತಕ್ಷಣವೇ ದುರಸ್ಥಿ ಮಾಡಬೇಕು ಎಂದು ಸ್ಥಳೀಯ ಸಂಸ್ಥೆಯ ಅಧಿಕಾರಿಗಳಿಗೆ ಸೂಚಿಸಿದರು.
ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆ ಇಲ್ಲವೆಂದು ಎಂದು ಸ್ಥಳೀಯ ಸಂಸ್ಥೆಯ ಮುಖ್ಯಸ್ಥರು ಸಭೆಗೆ ತಿಳಿಸಿದರು.
ಕೊಪ್ಪಳ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಧಿಕಾರಿ (ಸಿಇಒ) ರಾಹುಲ್ ರತ್ನಂ ಪಾಂಡೆಯ ಮಾತನಾಡಿ, ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಭೆ ನಡೆಸಿ, ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದರೆ ತಕ್ಷಣ ಅದನ್ನು ಬಗೆಹರಿಸಬೇಕು ಎಂದು ಪಿಡಿಓಗಳಿಗೆ ತಿಳಿಸಲಾಗಿದೆ ಮತ್ತು ಈಗಾಗಲೇ ದುರಸ್ಥಿಗೆ ಬಂದಿರುವುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ಥಿಪಡಿಸಲಾಗುತ್ತಿದೆ ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಬೊಮ್ಮನಹಳ್ಳಿ ಕಾಂಗ್ರೆಸ್ ಅಭ್ಯರ್ಥಿಯಾದ ಚಿತ್ರ ನಿರ್ಮಾಪಕ ಉಮಾಪತಿ ಗೌಡ
ಜಿಲ್ಲಾಧಿಕಾರಿ ಮಾತಾಡಿ, ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ದೂರು ರಜಿಸ್ಟರ್‌ನ್ನು ನಿರ್ವಹಿಸಿ, ದೂರು ದಾಖಲಾದ ಸಮಯ ಮತ್ತು ದೂರಿನ ಕುರಿತು ಕೈಗೊಂಡ ಕ್ರಮದ ಬಗ್ಗೆ ರಜಿಸ್ಟರ್‌ನಲ್ಲಿ ನಮೂದಿಸಲು ಮತ್ತು ಸರ್ಕಾರದಿಂದ ಅನುಷ್ಠಾನಗೊಂಡ ಡಿಬಿಒಟಿ, ಜೆ.ಜೆ.ಎಂ ಮತ್ತು ಇತರೆ ಯೋಜನೆಗಳಡಿ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ಸರಿಯಾಗಿ ಸರಬರಾಜು ಆಗುತ್ತಿರುವ ಬಗ್ಗೆ ಪರಿಶೀಲನೆ ಮಾಡಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಲು ಸೂಚಿಸಿದರು.
ಪೈಪ್‌ಲೈನ್ ಸೋರಿಕೆ ಮತ್ತು ಮೋಟರ್ ದುರಸ್ಥಿ, ಬೋರ್‌ವೇಲ್ ದುರಸ್ಥಿ ಹಾಗೂ ಟ್ಯಾಂಕರ್‌ಗಳು ದುರಸ್ಥಿಪಡಿಸಲು ಸಾಮಗ್ರಿಗಳನ್ನು ಸಿದ್ದಪಡಿಸಿಟ್ಟುಕೊಳ್ಳಲು ಸಂಬಂಧಿಸಿದ ಏಜೆನ್ಸಿಯವರಿಗೆ ತಿಳಿಸಲು ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ನಿರ್ದೇಶನ ನೀಡಲು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ತಿಳಿಸಿದರು.
ವಾರಕ್ಕೊಂದು ಸಭೆ ನಡೆಸಲು ಸೂಚನೆ
ತಾಲೂಕು ಮಟ್ಟದಲ್ಲಿ ತಾಲೂಕು ಟಾಸ್ಕ್ ಫೋರ್ಸ್ ಸಮಿತಿಯವರು ವಾರಕೊಮ್ಮೆ ಸಭೆ ನಡೆಸಿ ಈ ಕಾರ್ಯಾಲಯಕ್ಕೆ ಸಭಾ ನಡವಳಿ ಸಲ್ಲಿಸಬೇಕು. ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಂದಲ್ಲಿ ತಕ್ಷಣವೇ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಹೋಗಿ ಸಮಸ್ಯೆಯನ್ನು 24 ಗಂಟೆಯೊಳಗೆ ಬಗೆಹರಿಸಲು ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲೆಯಲ್ಲಿ ಸದ್ಯಕ್ಕೆ ಜಾನುವಾರುಗಳಿಗೆ ಮೇವಿನ ಸಮಸ್ಯೆ ಇಲ್ಲ ಎಂದು ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು. ಸಭೆಯಲ್ಲಿ ನಾನಾ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ಇನ್ನೀತರ ಅಧಿಕಾರಿಗಳು ಹಾಜರಿದ್ದರು.