ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ‘ಪೇಯಿಂಗ್ ಗೆಸ್ಟ್’ (ಪಿಜಿ)ಸಂಸ್ಥೆಗಳನ್ನು ಆಹಾರ ಸುರಕ್ಷತಾ ಕಾಯ್ದೆಯಡಿ ಆರೋಗ್ಯ ಇಲಾಖೆಯಲ್ಲಿ ಕಡ್ಡಾಯವಾಗಿ ನೋಂದಣಿ ಮಾಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್.ಆರ್ ತಿಮ್ಮಯ್ಯ ಸೂಚನೆ ನೀಡಿದ್ದಾರೆ.
ಮಂಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. “ಆಹಾರ ಗುಣಮಟ್ಟ, ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಸರ್ಕಾರಿ ಮತ್ತು ಖಾಸಗಿ ವಸತಿ ನಿಲಯಗಳು, ಬಿಸಿಯೂಟ ನಡೆಸುವ ಶಾಲೆಗಳಿಗೆ ಕೆಲವು ಮಾನದಂಡಗಳನ್ನು ನಿಗದಿಪಡಿಸಲಾಗಿದೆ. ಆರೋಗ್ಯ ಸುರಕ್ಷೆಯ ದೃಷ್ಟಿಯಿಂದ ಇವನ್ನು ಕಡ್ಡಾಯವಾಗಿ ಪಾಲಿಸಬೇಕು” ಎಂದರು.
“ಜಿಲ್ಲೆಯ ಕೆಲವು ಖಾಸಗಿ ನರ್ಸಿಂಗ್ ಕಾಲೇಜುಗಳ ವಸತಿ ನಿಲಯಗಳಲ್ಲಿ ಇತ್ತೀಚೆಗೆ ವಾಂತಿ-ಬೇಧಿ ಪ್ರಕರಣಗಳು ಕಂಡುಬಂದ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕೆಲವು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಲಾಗಿದೆ. ಈ ಸಂಬಂಧ ಮಾಹಿತಿ ನೀಡಲು ಡಿಡಿಪಿಐ, ಸಂಬಂಧಪಟ್ಟ ಇಲಾಖೆಗಳ ಪ್ರಮುಖರು, ವಸತಿ ನಿಲಯಗಳ ಪ್ರಮುಖರ ಸಭೆಯನ್ನು ಕರೆಯಲಾಗಿದೆ” ಎಂದು ಮಾಹಿತಿ ನೀಡಿದರು.
“ಒಂದೊಮ್ಮೆ ಸಂಸ್ಥೆಗಳು ನಿಯಮಗಳನ್ನು ಪಾಲಿಸದಿದ್ದಲ್ಲಿ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಮೂಲಕ ಪ್ರಕರಣ ದಾಖಲಿಸಬಹುದಾಗಿದೆ. ಈ ಹಿಂದೆ ನಗರದ ಕದ್ರಿ ರಸ್ತೆಯ ನರ್ಸಿಂಗ್ ಕಾಲೇಜೊಂದರ ವಿದ್ಯಾರ್ಥಿ ನಿಲಯದಲ್ಲಿ ಕಲುಷಿತ ಆಹಾರ ಸೇವಿಸಿ ಅಸ್ವಸ್ಥಗೊಂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಸಂಬಂಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗಿದೆ. ಭಾನುವಾರದಂದು ಇನ್ನೊಂದು ಸಂಸ್ಥೆಯ ವಸತಿ ನಿಲಯದಲ್ಲಿ ಇಂತಹದ್ದೇ ಪ್ರಕರಣ ನಡೆದಿರುವುದು ಕಂಡುಬಂದಿದೆ. ಘಟನೆಯ ಸ್ಥಳದಲ್ಲಿದ್ದ ಆಹಾರದ ಸ್ಯಾಂಪಲ್ ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಕ್ರಮ ವಹಿಸಲಾಗುತ್ತದೆ” ಎಂದು ಹೇಳಿದರು.
“ವಳಚ್ಚಿಲ್‌ನ ಖಾಸಗಿ ಶಿಕ್ಷಣ ಸಂಸ್ಥೆಯೊಂದರ ವಿದ್ಯಾರ್ಥಿಗಳು ಕಲುಷಿತ ಆಹಾರ ಸೇವನೆಯಿಂದ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿ, ಅಲ್ಲಿನ ಅಡುಗೆ ಕೋಣೆಗೆ ಬಾಗಿಲು ಹಾಕಿಸಲಾಗಿದೆ. ದಾಸ್ತಾನು ಕೊಠಡಿಯಲ್ಲಿ ದಿನಸಿ, ತರಕಾರಿಗಳು, ಆಹಾರ ಪದಾರ್ಥಗಳ ಸ್ವಚ್ಛತೆ ಕಾಪಾಡುವುದರ ಜತೆಗೆ, ಇಲಿ, ಹೆಗ್ಗಣ, ಹಲ್ಲಿ ಕ್ರಿಮಿಕೀಟಗಳ ಹಾವಳಿ ಇರದಂತೆ ಎಚ್ಚರಿಕೆ ವಹಿಸಬೇಕು. ಎಲ್ಲ ವಸತಿ ನಿಲಯಗಳು ಪಾಲಿಸಬೇಕಾದ ನಿಯಮಗಳನ್ನು ಕಳುಹಿಸಲಾಗಿದ್ದು, ಇದು ಬಿಸಿಯೂಟ ಒದಗಿಸುವ ಶಾಲೆಗಳಿಗೂ ಅನ್ವಯಿಸುತ್ತದೆ” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ವಿದ್ಯುತ್ ಶಾರ್ಟ್ ಸರ್ಕ್ಯೂಟ್; ಸುಟ್ಟು ಹೋದ 6 ಎಕರೆ ಕಬ್ಬು