ಡಾ. ರಾಜ್ ಕುಮಾರ್ ಅಭಿನಯದ ಬಂಗಾರದ ಮನುಷ್ಯ ಚಿತ್ರದ ‘ಆಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ’ ಹಾಡಿನೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಬಜೆಟ್ ಮಂಡನೆ ಆರಂಭಿಸಿದರು.
ಬೆಂಗಳೂರಿನಲ್ಲಿ ಆಕರ್ಷಕ ಪ್ರವಾಸಿ ತಾಣ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುವುದು. ನಗರಾಭಿವೃದ್ಧಿ ಅಂಗಸಂಸ್ಥೆ ಬಿಬಿಎಂಪಿ, ಬಿಎಂಆರ್‌ಸಿಎಲ್, ಬಿಡಬ್ಲ್ಯುಎಸ್‌ಎಸ್‌ಬಿ, ಬಿಡಿಎನಲ್ಲಿ ಸೋಲಾರ್ ಪಾರ್ಕ್ ನಿರ್ಮಾಣ ಮಾಡಲಾಗುವುದು. 2025ರೊಳಗೆ 44 ಕಿ.ಮೀ ಮೆಟ್ರೋ ಮಾರ್ಗ ಸೇರ್ಪಡೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಈ ಸಂದರ್ಭದಲ್ಲಿ ಘೋಷಣೆ ಮಾಡಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರೈತಸ್ನೇಹಿ- ಚುನಾವಣಾ ಸಮಯದ ಗಿಮಿಕ್ ಆಗದಿರಲಿ
ತೆರಿಗೆ ಸಂಗ್ರಹದಲ್ಲಿ ರಾಜ್ಯವು ಮುಂಚೂಣಿಯಲ್ಲಿದೆ. ಗ್ಯಾರಂಟಿ ಯೋಜನೆಗಳಿಂದ ಜನರ ಆದಾಯ ಹೆಚ್ಚಳವಾಗಿದೆ. ಇದರ ಪರಿಣಾಮ ತೆರಿಗೆ ಸಂಗ್ರಹ ಹೆಚ್ಚಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಬೆಂಗಳೂರು ಬಿಸಿನೆಸ್ ಕಾರಿಡಾರ್ ರೂಪಿಸಲು ಬಜೆಟ್‌ನಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. 73 ಕಿ.ಮೀ ಉದ್ದದ ರಸ್ತೆಯನ್ನು 27 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ ಪಿಪಿಪಿ ಮಾದರಿಯಲ್ಲಿ ಆರ್‌ಎಫ್‌ಪಿ ಕರೆಯಲಾಗುವುದು. ಬೆಂಗಳೂರಿನಲ್ಲಿ 250 ಮೀಟರ್ ಎತ್ತರದ ಸ್ಕೈಡೆಕ್ ನಿರ್ಮಾಣ ಮಾಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು
ರಾಜ್ಯದ ಮೂರು ಜಿಲ್ಲೆಗಳಲ್ಲಿ ಆಹಾರ ಪಾರ್ಕ್
ರಾಜ್ಯದ ಮೂರು ಜಿಲ್ಲೆಗಳಲ್ಲಿ ಆಹಾರ ಪಾರ್ಕ್ ನಿರ್ಮಾಣ ಮಾಡಲಾಗುವುದು. ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ, ಬೆಂಗಳೂರು ಗ್ರಾ. ಜಿಲ್ಲೆ ಮೂಗೆನಹಳ್ಳಿ ಬಳಿ ಆಹಾರ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.
ತೋಟಗಾರಿಕೆ ಬೆಳೆಗಳಿಗೆ ವಿಜಯಪುರ ಜಿಲ್ಲೆಯು ಹೆಸರುವಾಸಿಯಾಗಿದೆ. ಈ ಭಾಗದಲ್ಲಿ ತೋಟಗಾರಿಕೆ ಬೆಳೆಗಳಿಗೆ ಇನ್ನಷ್ಟು ಉತ್ತೇಜನ ನೀಡಲು ವಿಜಯಪುರ ಜಿಲ್ಲೆಯ ಆಲಮೇಲದಲ್ಲಿ ತೋಟಗಾರಿಕೆ ಕಾಲೇಜನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಘೋಷಣೆ ಮಾಡಿದರು.
ಏಷ್ಯಾದಲ್ಲಿಯೇ ಅತಿ ಹೆಚ್ಚು ರೇಷ್ಮೆಗೂಡು ಮಾರಾಟ ವಹಿವಾಟು ನಡೆಸುವ ರಾಮನಗರ ಮತ್ತು ಶಿಡ್ಲಘಟ್ಟದಲ್ಲಿರುವ ರೇಷ್ಮೆ ಮಾರುಕಟ್ಟೆಗಳನ್ನು ಮೊದಲನೇ ಹಂತದಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ಹೈ-ಟೆಕ್ ಮಾರುಕಟ್ಟೆಗಳನ್ನಾಗಿ ಅಭಿವೃದ್ಧಿಪಡಿಸಲು ಈಗಾಗಲೇ ಕ್ರಮವಹಿಸಲಾಗಿದೆ. ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ 250 ಕೋಟಿ ರೂ. ವೆಚ್ಚದಲ್ಲಿ ಎರಡನೇ ಹಂತದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.