ಯು.ಪಿ.ಎಸ್.ಸಿ, ಕೆ.ಎ.ಎಸ್, ಬ್ಯಾಂಕಿಂಗ್, ಗ್ರೂಪ್ ಸಿ,ಎಸ್.ಎಸ್.ಸಿ ಮತ್ತು ಆರ್.ಆರ್.ಬಿ ಹುದ್ದೆಗಳಿಗೆ ತರಬೇತಿ ಪಡೆಯಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳ ಆಯ್ಕೆಗಾಗಿ ಫೆ.18ರಂದು ಪರೀಕ್ಷೆಗಳು ನಡೆಯಲಿವೆ. ಅಂದು ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಗದಗ ಜಿಲ್ಲಾಧಿಕಾರಿ ತಿಳಿಸಿದ್ಅರೆ.
ಪರೀಕ್ಷೆ ನಡೆಯುವ ಬಗ್ಗೆ ಪ್ರಕಟಣೆ ಹೊರಡಿಸಿರುವ ಅವರು, “ಪರೀಕ್ಷಾ ಸಮಯದಲ್ಲಿ ನಕಲು ಮಾಡುವುದು, ಪರೀಕ್ಷಾರ್ಥಿಗಳ ಬದಲು ಬೇರೆಯವರು ಪರೀಕ್ಷೆಗೆ ಹಾಜರಾಗುವುದು ಮುಂತಾದ ಅವ್ಯವಹಾರ ತಡೆಗಟ್ಟಲು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು, ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಫೆ.18ರಂದು ಜಿಲ್ಲೆಯ 04 ಪರೀಕ್ಷಾ ಕೇಂದ್ರಗಳ ಸುತ್ತಲೂ 200ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ” ಎಂದು ತಿಳಿಸಿದ್ದಾರೆ.
ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಝರಾಕ್ಸ್ ಅಂಗಡಿ, ಬುಕ್ ಸ್ಟಾಲ್, ಫೋಟೋ ಕಾಪಿಯರ್‍ಗಳನ್ನು ಬಂದ್ ಮಾಡಲು ಆದೇಶಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್ ಮತ್ತು ಇತರೇ ಸಂಪರ್ಕ ಸಲಕರಣೆಗಳನ್ನು ತರುವುದು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.