ಜಿಲ್ಲೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರು ಮೇವಿನ ಸ್ಥಿತಿಗತಿಯ ಜೊತೆಗೆ ಬರನಿರ್ವಹಣೆಯನ್ನು ಸಮರ್ಪಕವಾಗಿ ಯಾವುದೇ ತೊಂದರೆಯಾಗದಂತೆ ನಿರ್ವಹಿಸಲು ಗದಗ ಜಿಲ್ಲಾಧಿಕಾರಿ ವೈಶಾಲಿ. ಎಂ.ಎಲ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಛೇರಿಯ ಸಭಾಂಗಣದಲ್ಲಿ ಶುಕ್ರವಾರ (ಫೆ.16) ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಗತಿ ಪರಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಕುಡಿಯುವ ನೀರು, ಮೇವಿನ ಸ್ಥಿತಿಗತಿ ಮತ್ತು ಬರನಿರ್ವಹಣೆ ಸಂಬಂಧಿಸಿದಂತೆ ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಅಧಿಕಾರಿ ವರ್ಗ ಕಾರ್ಯನಿರ್ವಹಿಸಬೇಕು. ಕುಡಿಯುವ ನೀರಿನ ತೊಂದರೆಗೊಳಗಾದ ಗ್ರಾಮಗಳನ್ನು ಈಗಾಗಲೇ ಗುರುತಿಸಿದ್ದು ಯಾವುದೇ ಕಾರಣಕ್ಕೂ ಜಿಲ್ಲೆಯ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮ ಜರುಗಿಸಬೇಕೆಂದು ತಿಳಿಸಿದರು.
ಅಗತ್ಯ ಬಿದ್ದಲ್ಲಿ ಉತ್ತಮ ಗುಣಮಟ್ಟದ ನೀರಿರುವ ಖಾಸಗಿ ಬೋರ್‍ವೆಲ್‍ಗಳ ಸಹಾಯದ ಮೂಲಕ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಮತ್ತು ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಮೇವು ಬ್ಯಾಂಕ್‍ಗಳಲ್ಲಿ ಸಮರ್ಪಕ ಹಾಗೂ ಉತ್ತಮ ಗುಣಮಟ್ಟದ ಮೇವಿನ ದಾಸ್ತಾನು ಮಾಡಿಟ್ಟುಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಭೆಯಲ್ಲಿ ಆದೇಶಿಸಿದರು.
ತುಂಗಭದ್ರ ನದಿಗೆ ಜಲಾಶಯದಿಂದ ನೀರು ಬಿಡುಗಡೆಯಾಗುತ್ತಿದೆ. ಕಾಲುವೆಯ ಪಾತ್ರದಲ್ಲಿ ಜನ ಜಾನುವಾರುಗಳನ್ನು ಬಿಡದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಲು ಸಂಬಂಧಿತ ತಹಶೀಲ್ದಾರರಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು ನೀರು ಬಿಡುತ್ತಿರುವುದು ಕೇವಲ ಕುಡಿಯುವ ಉದ್ದೇಶಕ್ಕಾಗಿ ಮಾತ್ರ.
ಕಾಲುವೆ ಪಾತ್ರದಲ್ಲಿರುವ ರೈತ ಬಾಂದವರು ನೀರನ್ನು ಪಂಪ್‍ಸೆಟ್‍ಗಳ ಮೂಲಕ ನೀರೆತ್ತಿ ಬೆಳೆಗಳಿಗೆ ಹಾಯಿಸಬಾರದು. ಈ ಕುರಿತು ತಹಸೀಲ್ದಾರರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ಪ್ರಸ್ತುತ ಜಲಾಶಯಗಳಲ್ಲಿ ಹಿಂದಿನ ವರ್ಷಕ್ಕಿಂತ ನೀರಿನ ಪ್ರಮಾಣ ಕಡಿಮೆ ಇದ್ದು ಮುಂದಿನ ದಿನಗಳಲ್ಲಿ ನೀರಿನ ಬೇಡಿಕೆ ಹೆಚ್ಚಾಗುವ ಸಾಧ್ಯತೆಯನ್ನು ಮನಗಂಡು ಈಗ ಹರಿಬಿಡಲಾಗುವ ನೀರನ್ನು ಪೋಲಾಗದಂತೆ ಸಂಗ್ರಹಿಸಿಕೊಂಡು ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಳಸಲು ಕ್ರಮ ವಹಿಸಬೇಕು. ಹೆಸ್ಕಾಂ ಅಧಿಕಾರಿಗಳು ನೀರು ಬಿಡುವ ದಿನಗಳಲ್ಲಿ ಕಾಲುವೆಗುಂಟ ಅಳವಡಿಸಿರುವ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವ ಮೂಲಕ ರೈತರು ಬೆಳೆಗಳಿಗೆ ನೀರು ಬಳಸದಂತೆ ಜಾಗೃತ ವಹಿಸಬೇಕು ಎಂದರು.
ತಾಲೂಕಾವಾರು ತಹಸೀಲ್ದಾರರು ಪ್ರತೀ ವಾರಕ್ಕೊಮ್ಮೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಗಳನ್ನು ನಡೆಸಿ ಮುಂಜಾಗ್ರತಾ ಕ್ರಮಗಳನ್ನು ವಹಿಸಿದ ಬಗ್ಗೆ ಕಚೇರಿಗೆ ವರದಿ ಸಲ್ಲಿಸುವಂತೆ ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಉಪವಿಭಾಗಧಿಕಾರಿ ಡಾ.ವೆಂಕಟೇಶ್ ನಾಯಕ್, ಕೃಷಿ ಜಂಟಿ ನಿರ್ದೇಶಕಿ ತಾರಾಮಣಿ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಶಶಿಕಾಂತ ಕೋಟೆಮನಿ, ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ. ಹುಲಗಣ್ಣವರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೋಡ, ಪಿ.ಆರ್.ಇ.ಡಿ. ಕಾರ್ಯಪಾಲಕ ಅಭಿಯಂತರ ಎಸ್.ಆರ್.ಗೌಡರ, ತಾಲೂಕಾ ತಹಸೀಲ್ದಾರರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.