ಕಳೆದ ವಿಧಾನಸಭಾ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ದಾಖಲಾಗಿದ್ದ ಪ್ರಕರಣದಲ್ಲಿ ಮಾಜಿ ಸಚಿವ ಶ್ರೀರಾಮುಲು ಅವರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರಾಗಬೇಕು. ಇಲ್ಲದಿದ್ದಲ್ಲಿ ಬಂಧನ ವಾರೆಂಟ್ ಹೊರಡಿಸುವುದಾಗಿ ಎಚ್ಚರಿಕೆ ನೀಡಿದೆ.
ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಶ್ರೀರಾಮುಲು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠ ವಜಾಗೊಳಿಸಿದೆ. “ಮ್ಯಾಜಿಸ್ಟ್ರೇಟ್ ನ್ಯಾಯಾಲಯ 4 ಬಾರಿ ಸಮನ್ಸ್ ನೀಡಿದರೂ, ಕೋರ್ಟ್‌ಗೆ ಹಾಜರಾಗಿಲ್ಲ. ನ್ಯಾಯಾಲಯದ ಆದೇಶವನ್ನು ನಗಣ್ಯ ಮಾಡುವಂತಿಲ್ಲ. ಯಾವ ಪ್ರತಿಷ್ಠೆಯ ಕಾರಣಕ್ಕೆ ಹಾಜರಾಗಿಲ್ಲ. ಮುಂದಿನ ವಿಚಾರಣೆಗೆ ವೇಳೆ ಹಾಜರಾಗಬೇಕು” ಎಂದು ಎಚ್ಚರಿಸಿದೆ.
“ರಾಜ್ಯದಲ್ಲಿ ಯಾವುದೇ ಸಚಿವರಾಗಲಿ, ಮಾಜಿ ಸಚಿವರಾಗಲಿ ಪ್ರಕರಣ ದಾಖಲಾಗಿ, ಸಮನ್ಸ್ ನೀಡದ ಮೇಲೆ ನ್ಯಾಯಾಲಯದ ಮುಂದೆ ಹಾಜರಾಗಬೇಕು. ಶ್ರೀರಾಮುಲು ಮುಂದಿನ ವಿಚಾರಣೆ ವೇಳೆ ಹಾಜರಾಗದಿದ್ದರೆ, ಬಂಧನ ವಾರಂಟ್ ಹೊರಡಿಸಬೇಕಾಗುತ್ತದೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ.