ರಾಜ್ಯದ ಕಳೆದ ಒಂಭತ್ತು ತಿಂಗಳಲ್ಲಿ ಕಾಂಗ್ರೆಸ್ ಆಡಳಿತವು ದಲಿತ ಸಮುದಾಯದ ವಿಚಾರದಲ್ಲಿ ಕೇವಲ ಮಾತಿನಲ್ಲಿ ಮಾತ್ರ ಕಾಳಜಿ ತೋರಿ, ದಲಿತ ಸಮುದಾಯವನ್ನು ವಂಚಿಸುತ್ತಿದೆ ಎಂದು ಆರೋಪಿಸಿ ದಾವಣಗೆರೆ ಜಿಲ್ಲಾ ಬಿಜೆಪಿ ಪ್ರತಿಭಟನೆ ನಡೆಸಿದೆ.
ದಾವಣಗೆರೆ ನಗರದ ಕೆ ಬಿ ಬಡಾವಣೆಯಲ್ಲಿರುವ ಬಿಜೆಪಿ ಕಚೇರಿಯಿಂದ ಎಸಿ ಕಚೇರಿಯವರೆಗೆ ಮೆರವಣಿಗೆ ತೆರಳಿ ಉಪವಿಭಾಗಾಧಿಕಾರಿಗೆ ಮನವಿ ಸೊಲ್ಲಿಸಿದರು.
ಚುನಾವಣೆಯಲ್ಲಿ ತಮ್ಮ ಗೆಲುವಿನ ಸಲುವಾಗಿ ದಲಿತರಿಗೆ ಮೀಸಲಿಟ್ಟಿದ್ದ ₹11,144 ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲು ವರ್ಗಾಯಿಸಿ ದಲಿತ ಹಿತವನ್ನು ಬಲಿಕೊಟ್ಟು ತಮ್ಮ ಸ್ವಾರ್ಥ ಸಾಧನೆ ಪೂರೈಸಿಕೊಂಡು ಇವರ ಡೋಂಗಿ ದಲಿತ ಕಾಳಜಿಯನ್ನು ಬಯಲು ಮಾಡಿದೆ. ದಲಿತರ ಹಿತರಕ್ಷಣೆ ಮಾಡಬೇಕಿದ್ದ ಸಮಾಜಕಲ್ಯಾಣ ಸಚಿವ ಹೆಚ್ ಸಿ ಮಹದೇವಪ್ಪನವರು ಈ ಅನ್ಯಾಯದ ವಿರುದ್ದ ಸೊಲ್ಲೆತ್ತದೆೇ ಕಾಂಗ್ರೆಸ್ ಪಾರ್ಟಿಯ ಹಿತಕ್ಕೆ ದಲಿತ ಸಮುದಾಯದ ಹಿತವನ್ನು ರಾಜಿ ಮಾಡಿಕೊಂಡಿದ್ದಾರೆ. ಸಿದ್ದರಾಮಯ್ಯನವರು ಅಲ್ಪಸಂಖ್ಯಾತರಿಗೆ ₹10,000 ಕೋಟಿ ಹಣವನ್ನು ವೆಚ್ಚ ಮಾಡಲು ಮಾತ್ರ ಯಾವ ಗ್ಯಾರಂಟಿಯೂ ಅಡ್ಡ ಬಂದಿಲ್ಲ. ದಲಿತರ ಹಿತಾಸಕ್ತಿಗಿಂತ ಓಟು ಬ್ಯಾಂಕ್ ರಾಜಕಾರಣವು ಸರ್ಕಾರಕ್ಕೆ ಆದ್ಯತೆಯಾಗಿರುವುದು ಶೋಚನೀಯ ಸಂಗತಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.
“ಮೊರಾರ್ಜಿ ಶಾಲೆಯ ಅಭಿವೃದ್ಧಿ ಮತ್ತು ಹೊಸ ಶಾಲೆಗಳ ಆರಂಭಕ್ಕೆ ಮೀಸಲಾದ ಹಣವು ಇತರ ಯೋಜನೆಗಳಿಗೆ ಬಳಕೆಯಾಗಿ ದಲಿತ ಮತ್ತು ಹಿಂದುಳಿದ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಸರ್ಕಾರ ಚಲ್ಲಾಟವಾಡುತ್ತಿದೆ. ದಲಿತ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಮೀಸಲಿಟ್ಟ ಹಣವೂ ದುರ್ಬಳಕೆಯಾಗಿ ಉನ್ನತ ಶಿಕ್ಷಣದಿಂದ ದಲಿತ ವಿದ್ಯಾರ್ಥಿಗಳನ್ನು ವಂಚಿತರನ್ನಾಗಿ ಮಾಡಲಾಗುತ್ತಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯ ಸಲುವಾಗಿ ಶಿಕ್ಷಣವನ್ನು ನಿರ್ಲಕ್ಷಿಸಲಾಗುತ್ತಿದೆ” ಎಂದು ಆರೋಪಿಸಿದರು.
“ರಾಜ್ಯದಲ್ಲಿ ಕಳೆದ ಎಂಟು ತಿಂಗಳಿನಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಗೃಹ ನಿರ್ಮಾಣ ಯೋಜನೆಯು ಸ್ಥಗಿತಗೊಂಡಿದೆ. ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ಸಾವಿರಾರು ಮನೆಗಳನ್ನು ನಿರ್ಮಿಸಿ ಹಂಚುತ್ತಿದ್ದರೆ, ರಾಜ್ಯ ಸರ್ಕಾರದ ಯೋಜನೆಯು ಕೋಮಾ ಸ್ಥಿತಿಗೆ ತಲುಪಿದೆ. ರೈತನಿಧಿ ಯೋಜನೆಯಲ್ಲಿ ದಲಿತ ಕುಟುಂಬದ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನವು ಸ್ಥಗಿತಗೊಂಡಿದೆ” ಎಂದು ಹೇಳಿದರು.
“ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರಲ್ಲಿ ಉದ್ಯಮಶೀಲತೆ ಉತ್ತೇಜಿಸುವ ಯೋಜನೆಯನ್ನು ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಆಸಕ್ತಿಯಿಲ್ಲದಂತಾಗಿದೆ. ಗ್ಯಾರಂಟಿಗೆ ಹಣ ನೀಡಬೇಕಾದ ಕಾರಣ 2024-25ರ ಮುಂಗಡ ಪತ್ರದಲ್ಲಿ ಮತ್ತೆ 11 ಸಾವಿರ ಕೋಟಿ ಅನುದಾನ ಕಡಿತವಾಗಿದೆ. ಸಂವಿಧಾನ ಜಾಥಾ ಮಾಡುತ್ತಿರುವ ಸರ್ಕಾರ ಸಂವಿಧಾನದ ಆಶಯಕ್ಕೆ ದಲಿತರಿಗೆ ಸೇರಬೇಕಾದ ಅನುದಾನ ನಿರಾಕರಿಸಿ ಅನ್ಯಾಯ ಮಾಡುತ್ತಿದೆ” ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಗ್ರಾಮ ಪಂಚಾಯತಿಯಲ್ಲಿ ಭ್ರಷ್ಟಾಚಾರ – ಕ್ರಮಕ್ಕೆ ಆಗ್ರಹ; ಇಲ್ಲವಾದಲ್ಲಿ ಉಪವಾಸ ಸತ್ಯಾಗ್ರಹ
ಮಾಜಿ ಶಾಸಕ ಎಸ್ ಎ ರವೀಂದ್ರನಾಥ್, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಎ ಎಚ್ ಶಿವಯೋಗಿ ಸ್ವಾಮಿ, ಜಿಲ್ಲಾಧ್ಯಕ್ಷ ಎನ್ ರಾಜಶೇಖರ್ ನಾಗಪ್ಪ, ಪಕ್ಷದ ಮುಖಂಡರುಗಳಾದ ಯಶವಂತರಾವ್, ಪ್ರಧಾನ ಕಾರ್ಯದರ್ಶಿಗಳಾದ ಐರಾಣಿ ಅಣ್ಣೇಶ್, ಧನಂಜಯ ಕಡ್ಲೆಬಾಳ, ಅನಿಲ್ ಕುಮಾರ್ ನಾಯಕ್, ಜಿ ಎಸ್ ಅನಿತ್ ಕುಮಾರ, ಮಾಜಿ ಶಾಸಕ ಎಂ ಬಸವರಾಜ ನಾಯಕ್, ನಿಕಟ ಪೂರ್ವ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ, ರಾಜ್ಯ ಎಸ್ ಟಿ ಮೋರ್ಚಾ ಉಪಾಧ್ಯಕ್ಷ ಶ್ರೀನಿವಾಸ್ ದಾಸ್ ಕರಿಯಪ್ಪ, ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ಬಿ ಟಿ ಶಾಮ್, ಮಹಾನಗರ ಪಾಲಿಕೆ ಸದಸ್ಯರುಗಳಾದ ಎಸ್ ಟಿ ವೀರೇಶ್, ಪ್ರಸನ್ನ ಕುಮಾರ್, ಶಿವಾನಂದ, ಜಾದವ್, ಬಾತಿ ವೀರೇಶ್, ರೂಪ ಕಾಟವೆ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೈಲಜಾ ಸೇರಿದಂತೆ ಪಕ್ಷದ ಕಾರ್ಯಕರ್ತರು ಹಾಜರಿದ್ದರು.