ಹಲವು ಕಾಮಗಾರಿಗಳ ಶಂಕು ಸ್ಥಾಪನೆ ಮತ್ತು ಉದ್ಘಾಟನೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 4ರಂದು ಬೆಂಗಳೂರು ಗ್ರಾಮಂತರ ಜಿಲ್ಲೆಯ ನೆಲಮಂಗಲ ತಾಲೂಕಿಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಮಗಾರಿಗಳ ಪೂರ್ಣ ಮಾಹಿತಿಯೊಂದಿಗೆ ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿ.ಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತನಾಡಿದರು.
“ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯಿಂದ ದ್ವಿತೀಯ ಹಂತದಲ್ಲಿ ಸಂಸ್ಕರಿಸಿ 243 ಎಂಎಲ್‌ಡಿ ನೀರನ್ನು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ 70 ಕೆರೆಗಳಿಗೆ ನೀರು ತುಂಬಿಸುವ ಮೊದಲನೇ ಹಂತದ ಕಾಮಗಾರಿಗೆ (1081ಕೋಟಿ) ಶಂಕುಸ್ಥಾಪನೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ನೆಲಮಂಗಲ ತಾಲೂಕಿನಲ್ಲಿ ಕೈಗೊಂಡಿರುವ ಹಲವು ಇಲಾಖೆಗಳ ಕಾಮಗಾರಿಗಳಿಗೆ ಭೂಮಿ ಪೂಜೆ ಹಾಗೂ ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮವು ನೆಲಮಂಗಲ ತಾಲೂಕಿನ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳಬೇಕಿದೆ” ಎಂದರು.
“ಶಿಷ್ಟಾಚಾರದಂತೆ ನಾಲ್ಕು ಜಿಲ್ಲೆಗಳನ್ನು ಪ್ರತಿನಿಧಿಸುವ ಆಮಂತ್ರಣ ಪತ್ರಿಕೆ ಸಿದ್ದಪಡಿಸಿ, ಪ್ರಮುಖವಾಗಿ ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಇಲಾಖೆ, ಕೆಪಿಟಿಸಿಎಲ್‌ನ ಕಾಮಗಾರಿಗಳು
ಶಂಕುಸ್ಥಾಪನೆ ಮತ್ತು ಉದ್ಘಾಟನೆಗೊಳ್ಳಲಿದ್ದು, ಸಂಪೂರ್ಣ ವಿವರ ನೀಡಬೇಕು” ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರುಸ್ಥಾಪನೆಗೆ ಒತ್ತಾಯ
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಎಚ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಟಿ ಕೆ ರಮೇಶ್, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಮುಖ್ಯ ಲೆಕ್ಕಾಧಿಕಾರಿ ಶ್ರೀನಿವಾಸ್, ಯೋಜನಾ ನಿರ್ದೇಶಕ ವಿಠ್ಠಲ ಕಾವ್ಳೆ, ಜಿಲ್ಲಾಮಟ್ಟದ ಅಧಿಕಾರಿಗಳು, ಸಿಬ್ಬಂದಿ ಇದ್ದರು.