2023-24ನೇ ಸಾಲಿನಲ್ಲಿ ಬೆಂಗಳೂರಿನಲ್ಲಿ ಆಯೋಜಿಸಿರುವ ’15 ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ದ ರಾಯಭಾರಿಯನ್ನಾಗಿ ಕನ್ನಡ ಚಿತ್ರರಂಗದ ನಟ ಡಾಲಿ ಧನಂಜಯ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ಚಲನಚಿತ್ರ ಅಕಾಡೆಮಿಯ ವತಿಯಿಂದ ಪ್ರತಿವರ್ಷ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವವನ್ನು ಆಯೋಜಿಸುತ್ತ ಬಂದಿದೆ. ಅದರಂತೆ 2023-24ನೇ ಸಾಲಿನಲ್ಲಿ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಫೆಬ್ರವರಿ 29 ರಿಂದ ಮಾರ್ಚ್ 07ರವರೆಗೆ ಏರ್ಪಡಿಸಲಾಗಿದೆ.
ಚಿತ್ರೋತ್ಸವದ ಉದ್ಘಾಟನಾ ಸಮಾರಂಭವನ್ನು ಗುರುವಾರ ವಿಧಾನಸೌಧದ ಪೂರ್ವ ದ್ವಾರದ ಮೆಟ್ಟಿಲುಗಳ ಮುಂಭಾಗದಲ್ಲಿ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಮಾರ್ಚ್ 7ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.
