ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಕುಡಿಯುವ ನೀರಿನ ಆಭಾವ ಉಂಟಾಗದಂತೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಶಾಸಕ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ದಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಯಚೂರು ನಗರದ ಗ್ರಾಮೀಣ ಶಾಸಕರ ಕಚೇರಿಯಲ್ಲಿ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
“ಬೇಸಿಗೆ ಕಾಲ ಆರಂಭವಾಗಿದ್ದು, ನಾಲ್ಕು ತಿಂಗಳುಗಳ ಕಾಲ ಗ್ರಾಮಗಳಲ್ಲಿ ಜನರಿಗೆ ಕುಡಿಯುವ ನೀರಿನ ಅಭಾವವಾಗಾದಂತೆ ನೋಡಿಕೊಳ್ಳಬೇಕು” ಎಂದು ಹೇಳಿದರು.
“ಆರ್‌ಡಬ್ಲ್ಯೂಎಸ್ ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿಗಳು ಒಟ್ಟಾಗಿ ಸೇರಿ ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ, ಕ್ಯಾಂಪ್‌ಗಳಲ್ಲಿ ಕೂಡಲೇ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು. ಟ್ಯಾಂಕರ್ ಮಾಲೀಕರ ಜೊತೆ ಮಾತನಾಡಿ, ದರ ನಿಗದಿ ಮಾಡಿ ಅವುಗಳಿಗೆ ಜಿಪಿಎಸ್ ಅಳವಡಿಸಬೇಕು. ಗ್ರಾಮಗಳ ಜನರಿಗೆ ನೀರೊದಗಿಸುವ ಕೆಲಸ ಮಾಡನೇಕು” ಎಂದರು.
“ಅಗತ್ಯವಿದ್ದ ಕಡೆ ಖಾಸಗಿ ಬೊರ್‌ವೆಲ್ ಮಾಲೀಕರ ಜತೆಗೆ ಮಾತನಾಡಿ ಅವರ ಗ್ರಾಮಗಳ ಜನರಿಗೆ ಕುಡಿಯುವ ನೀರು ಒದಗಿಸಬೇಕು. ಬೋರ್‌ವೆಲ್ ಮಾಲೀಕರೊಂದಿಗೆ ಲೀಜ್ ಅಗ್ರಿಮೆಂಟ್ ಮಾಡಿಕೊಂಡು ಜನರಿಗೆ ನೀರು ಒದಗಿಸಬೇಕು. ಕೃಷ್ಣ ಮತ್ತು ತುಂಗಭದ್ರಾ ನದಿಗಳಲ್ಲಿ ಕೂಡ ನೀರು ಬತ್ತಿ ಹೋಗಿದೆ. ಜಲಮೂಲಗಳೂ ಕೂಡ ಬತ್ತಿ ಹೋಗಿವೆ. ಹಾಗಾಗಿ ನದಿ ಪಾತ್ರದ ಜನರಿಗೆ ನೀರಿನ ಆಭಾವವಾಗದಂತೆ ನೋಡಿಕೊಳ್ಳಬೇಕು” ಎಂದರು.
“ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿ ಸಹಾಯವಾಣಿ ಆರಂಭಿಸಬೇಕು. ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಪಂಚಾಯಿತಿ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಇರುವ ಗ್ರಾಮಗಳನ್ನು ಗುರುತಿಸಿ ಪಟ್ಟಿಯನ್ನು ಸಿದ್ಧಪಡಿಸಿ ತಾಲೂಕಿನ ಅಧಿಕಾರಿಗಳಿಗೆ ನೀಡಬೇಕು. ಆಯಾ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು. ಮೊದಲು ಕುಡಿಯುವ ನೀರು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ರೈತ ಮಾರುಕಟ್ಟೆ ಕರ ವಸೂಲಿಗೆ ಟೆಂಡರ್; ನಿಯಮ ಉಲ್ಲಂಘಿಸಿದಲ್ಲಿ ಕ್ರಿಮಿನಲ್ ಪ್ರಕರಣ ದಾಖಲು
ಸಭೆಯಲ್ಲಿ ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನಗೌಡ, ಉಪಾಧ್ಯಕ್ಷ ಬಷೀರ್ ಅಹ್ಮದ್, ಸಹಾಯಕ ಆಯುಕ್ತ ಸುಭಾಷ್, ತಹಶೀಲ್ದಾರ್ ಸುರೇಶ್ ವರ್ಮಾ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.
ವರದಿ : ಹಫೀಜುಲ್ಲ
