- 2 ದಿನಗಳ ಹಿಂದಷ್ಟೆ ಗ್ಯಾಂಗ್‌ಸ್ಟರ್ ಅತೀಕ್ ಅಹ್ಮದ್, ಆತನ ಸಹೋದರನನ್ನು ಹತ್ಯೆ ಮಾಡಿದ್ದ ದುಷ್ಕರ್ಮಿಗಳು
- ಶೂಟೌಟ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಸಾರ್ವಜನಿಕರು
ಉತ್ತರ ಪ್ರದೇಶದಲ್ಲಿ ಒಂದು ವಾರದ ಅವಧಿಯಲ್ಲಿಯೇ ಮತ್ತೊಂದು ಶೂಟೌಟ್ ನಡೆದಿದೆ. ಜಲೌನ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಕಾಲೇಜು ಪರೀಕ್ಷೆ ಮುಗಿಸಿ ಹಿಂತಿರುಗುತ್ತಿದ್ದ ಯುವತಿಗೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.
ಸ್ಥಳೀಯ ಪೊಲೀಸ್ ಠಾಣೆಯಿಂದ ಕೇವಲ 200 ಮೀಟರ್ ದೂರದಲ್ಲಿರುವ ಜನನಿಬಿಡ ಸ್ಥಳದಲ್ಲೇ ದುಷ್ಕರ್ಮಿಗಳು ಗುಂಡು ಹಾರಿಸಿದ್ದು, ಹತ್ಯೆಗೆ ಬಳಸಿದ ಗನ್‌ಅನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಒಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಸಂತ್ರಸ್ತೆಯನ್ನು 21 ವರ್ಷದ ರೋಶ್ನಿ ಅಹಿರ್ವಾರ್ ಎಂದು ಗುರುತಿಸಲಾಗಿದೆ. ಈಕೆ ಬಿಎ ವ್ಯಾಸಂಗ ಮಾಡುತ್ತಿದ್ದಳು. ವಿದ್ಯಾರ್ಥಿನಿ ಬೆಳಿಗ್ಗೆ 11 ಗಂಟೆಗೆ ಪರೀಕ್ಷೆ ಮುಗಿಸಿ ರಾಮ್ ಲಖನ್ ಪಟೇಲ್ ಮಹಾವಿದ್ಯಾಲಯದಿಂದ ಮನೆಗೆ ಹಿಂದಿರುಗುತ್ತಿದ್ದಾಗ ಬಜಾಜ್ ಪಲ್ಸರ್ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ದೇಶಿ ನಿರ್ಮಿತ ಪಿಸ್ತೂಲ್‌ನಿಂದ ಆಕೆಯ ತಲೆಗೆ ಗುಂಡು ಹಾರಿಸಿದ್ದು, ರೋಶ್ನಿ ಸ್ಥ ಳದಲ್ಲೇ ಸಾವನ್ನಪ್ಪಿದ್ದಾಳೆ.
ಗುಂಡು ಹಾರಿಸಿದ ತಕ್ಷಣ ಸ್ಥಳೀಯರು ದುಷ್ಕರ್ಮಿಗಳನ್ನು ಹಿಡಿಯಲು ಯತ್ನಿಸಿದ್ದು, ಆದರೆ, ಅವರು ಗನ್ ಎಸೆದು ಪರಾರಿಯಾಗಿದ್ದಾರೆ. ವಿದ್ಯಾರ್ಥಿನಿಯ ಪೋಷಕರು ರಾಜ್ ಅಹಿರ್ವಾರ್ ಎಂಬುವನ ವಿರುದ್ಧ ದೂರು ನೀಡಿದ್ದು , ಇದರ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಸ್ಥಳೀಯರು ಮತ್ತು ಪೊಲೀಸರು ನೋಡುತ್ತಿದ್ದಂತೆ ವಿದ್ಯಾರ್ಥಿನಿ ರಕ್ತದ ಮಡುವಿನಲ್ಲಿ ನೆಲದ ಮೇಲೆ ನರಳಾಡಿ ಸಾವನ್ನಪ್ಪಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಯೋಗಿ ಆದಿತ್ಯನಾಥ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಟೀಕೆ ವ್ಯಕ್ತವಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಹಲವಾರು ನೆಟ್ಟಿಗರು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯನ್ನು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚಿಗಷ್ಟೆ ಗ್ಯಾಂಗ್‌ಸ್ಟರ್ ಅತೀಕ್ ಅಹ್ಮದ್ ಹಾಗೂ ಆತನ ಸಹೋದರನ ಪತ್ರಕರ್ತರ ವೇಷದಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು.