ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪವನ್ನು ತನಿಖೆ ನಡೆಸಿ ಕಠಿಣ ಶಿಕ್ಷೆ ನೀಡಲು ಎಐಡಿಎಸ್‌ಒ ಆಗ್ರಹಿಸಿದೆ.
ಎಐಡಿಎಸ್‌ಒ ವಿಜಯಪುರ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಪತ್ರಿಕೆ ಹೇಳಿಕೆ ನೀಡಿದ್ದು, “ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಇಂತಹ ಒಂದು ಹೀನಾಯ ಘಟನೆಯ ಆರೋಪ ಬಂದಿರುವುದು ಖಂಡನೀಯ. ವಿಶ್ವವಿದ್ಯಾಲಯದ ಮ್ಯಾನೇಜ್ಮೆಂಟ್ ವಿಭಾಗದ ಮುಖ್ಯಸ್ಥ ಪ್ರೊ. ಮಲ್ಲಿಕಾರ್ಜುನ ಎನ್ ಎಲ್ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ, ಅಶ್ಲೀಲವಾಗಿ ನಿಂದಿಸಿದ್ದಾರೆಂಬ ಆರೋಪ ಬಂದಿದೆ” ಎಂದರು.
“ಹಲವಾರು ವಿದ್ಯಾರ್ಥಿನಿಯರು ಇಂತಹ ನೀಚ ಕೃತ್ಯಕ್ಕೆ ಭಯಪಟ್ಟು ಮಹಿಳೆಯರಿಗೆ ಭದ್ರತೆ ಬೇಕೆಂದೇ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿನಿಯರು ಮಹಿಳಾ ವಿಶ್ವವಿದ್ಯಾಲಯಕ್ಕೆ ಸೇರಿಕೊಳ್ಳುತ್ತಾರೆ. ಇಲ್ಲಿಯೂ ಇಂತಹ ಘಟನೆ ನಡೆದಿರುವುದು ಆಘಾತಕಾರಿ. ಮತ್ತೆ ಇಂತಹ ಘಟನೆ ಮರುಕಳಿಸಬಾರದೆಂದರೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಮಾಡಬೇಕು. ಇಂತಹ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯರಿಗೆ ಭದ್ರತೆ ಒದಗಿಸಬೇಕು” ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಮಹಿಳಾ ವಿವಿ ಸಂಶೋಧನಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಆರೋಪ
“ಘಟನೆಗೆ ಸಂಬಂಧಿಸಿದಂತೆ ಫೆಬ್ರವರಿ 27 ರಂದು ದೂರು ಸಲ್ಲಿಸಿದ್ದಾರೆಂದು ವರದಿಯಾಗಿದೆ. ಆದರೆ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಘಟನೆ ಬಗ್ಗೆ ಸೂಕ್ತವಾಗಿ ತನಿಖೆ ನಡೆಸಿ ತಪ್ಪಿತಸ್ಥರು ಯಾರೇ ಆಗಿರಲಿ ಅವರಿಗೆ ಕಠಿಣ ಶಿಕ್ಕೆ ವಿಧಿಸಬೇಕು” ಎಂದು ಒತ್ತಾಯಿಸಿದರು.