ಚಿತ್ರದುರ್ಗದ ಡಾ. ಶಿವಮೂರ್ತಿ ಮುರುಘಾ ಶ್ರೀ ವಿರುದ್ಧದ ಸಾಮೂಹಿಕ ಅತ್ಯಾಚಾರ, ಎಸ್‌ಸಿ-ಎಸ್‌ಟಿ ದೌರ್ಜನ್ಯ ತಡೆ ಪ್ರಕರಣ ರದ್ದು ಪಡಿಸಿ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಈ ಮೂಲಕ ಮುರುಘಾ ಶ್ರೀ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ಪುರಸ್ಕರಿಸಿದೆ.
ಆದರೆ ಅತ್ಯಾಚಾರ ಮತ್ತು ಪೋಕ್ಸೊ ಕಾಯಿದೆಯ ವಿವಿಧ ಸೆಕ್ಷನ್‌ಗಳ ಅಡಿ ಆರೋಪ ನಿಗದಿ ಮುಂದುವರಿಯಲಿದೆ ಎಂದಿರುವ ಕರ್ನಾಟಕ ಹೈಕೋರ್ಟ್ ಹೊಸದಾಗಿ ಆರೋಪ ನಿಗದಿ ಮಾಡಿ, ಪ್ರಕ್ರಿಯೆ ಮುಂದುವರಿಸಲು ವಿಚಾರಣಾಧೀನ ನ್ಯಾಯಾಲಯಕ್ಕೆ ಆದೇಶಿಸಿದೆ.
ಡಾ. ಶಿವಮೂರ್ತಿ ಮುರುಘಾ ಶರಣರು 2023ರ ಏಪ್ರಿಲ್ 13 ಮತ್ತು 20ರಂದು ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿ ತಮ್ಮ ವಿರುದ್ಧ ಚಿತ್ರದುರ್ಗದ ವಿಶೇಷ ನ್ಯಾಯಾಲಯವು ಆರೋಪ ನಿಗದಿ ಮಾಡಿರುವ ಆದೇಶಗಳನ್ನು ವಜಾ ಮಾಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು.
“ಆರೋಪ ನಿಗದಿ ಮಾಡುವ ಸಂದರ್ಭದಲ್ಲಿ ವಿಶೇಷ ನ್ಯಾಯಾಲಯವು ಅಂಚೆ ಕಚೇರಿಯಂತೆ ವರ್ತಿಸಬಾರದಿತ್ತು” ಎಂದು ಹೇಳಿರುವ ಹೈಕೋರ್ಟ್, ಮುರುಘಾ ಶ್ರೀ ವಿರುದ್ಧ ತಪ್ಪಾಗಿ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ವರದಿಯಾಗುವುದಕ್ಕೂ ಮುನ್ನ 3.5 ವರ್ಷಗಳ ಹಿಂದೆ ಸಾಕ್ಷ್ಯ ನಾಶಪಡಿಸಲಾಗಿದ್ದು, ಐಪಿಸಿ ಸೆಕ್ಷನ್ 201ರ ಅಡಿ ತಪ್ಪಾಗಿ ಸಾಕ್ಷ್ಯ ನಾಶ ಆರೋಪ ಹೊರಿಸಲಾಗಿದೆ” ಎಂದು ಹೇಳಿದೆ.
ಈ ಸಂದರ್ಭದಲ್ಲೇ ಹೈಕೋರ್ಟ್, “ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದ ಐಪಿಸಿ ಸೆಕ್ಷನ್ 376(2)ಎನ್ ಮತ್ತು ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯಿದೆ–2012ರ ಸೆಕ್ಷನ್ 4 ಮತ್ತು 6ರ ಅಡಿ ಆರೋಪ ಮುಂದುವರಿಯಲಿವೆ” ಎಂದು ತಿಳಿಸಿದೆ.
“ಮುರುಘಾ ಶ್ರೀ ನಮ್ಮ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ” ಎಂದು ಆರೋಪಿಸಿ 2022ರ ಆಗಸ್ಟ್ 26ರಂದು ಮೈಸೂರಿನ ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಇಬ್ಬರು ಬಾಲಕಿಯರು ದೂರು ದಾಖಲಿಸಿದ್ದು, 2022ರ ಸೆಪ್ಟೆಂಬರ್ 1ರಂದು ಪೊಲೀಸರು ಮುರುಘಾ ಶ್ರೀರನ್ನು ಬಂಧಿಸಿದ್ದರು.
ಇದಾದ ಬಳಿಕ ಮುರುಘಾ ಶ್ರೀ ವಿರುದ್ಧ ಲೈಂಗಿಕ ಕಿರುಕುಳದ ಆರೋಪವನ್ನು ಮತ್ತಿಬ್ಬರು ಬಾಲಕಿಯರು ಮಾಡಿದ್ದು, ಈ ಪ್ರಕರಣದಲ್ಲಿ 2023ರ ನವೆಂಬರ್‌ನಲ್ಲಿ ಶ್ರೀಗಳಿಗೆ ಹೈಕೋರ್ಟ್‌ನಿಂದ ಜಾಮೀನು ನೀಡಲಾಗಿದೆ. ಆದರೆ ಚಿತ್ರದುರ್ಗ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.