ತಮ್ಮ ಪುತ್ರನಿಗೆ ಹಾವೇರಿ ಲೋಕಸಭಾ ಟಿಕೆಟ್ ನೀಡದಿರುವ ವಿಚಾರಕ್ಕೆ ಬಿಜೆಪಿಯ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಬಹಿರಂಗವಾಗಿಯೇ ಅಸಮಾಧಾನಗೊಂಡಿದ್ದಾರೆ. ಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ದಿಢೀರ್ ಸುದ್ದಿಗೋಷ್ಠಿ ನಡೆಸಿದ್ದ ಈಶ್ವರಪ್ಪ, “ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನನಗೆ ಕೊಟ್ಟಿರುವ ಮಾತನ್ನು ಉಳಿಸಿಕೊಳ್ಳಲಿಲ್ಲ” ಎಂದು ವಾಗ್ದಾಳಿ ನಡೆಸಿದ್ದರು.
ಈಶ್ವರಪ್ಪ ಪುತ್ರ ಕಾಂತೇಶ್ಗೆ ಟಿಕೆಟ್ ನೀಡದಿರುವ ಬಗ್ಗೆ ಬೆಂಗಳೂರಲ್ಲಿ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, “ನಾನು ಈಶ್ವರಪ್ಪ ಅವರ ಜೊತೆ ಮಾತನಾಡುತ್ತೇನೆ. ಈಶ್ವರಪ್ಪ ಪುತ್ರನನ್ನು ವಿಧಾನ ಪರಿಷತ್ ಸದಸ್ಯ ಮಾಡುವ ಬಗ್ಗೆ ಹೈಕಮಾಂಡ್ ಚಿಂತನೆ ಮಾಡಿದೆ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿ ಹೋಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿದ್ದೀರಾ? ರಾಜಕೀಯ ಬಿಟ್ಟು ಕೇಂದ್ರದಿಂದ ಮೇಕೆದಾಟು ಯೋಜನೆಗೆ ಬಿಜೆಪಿ ಅನುಮತಿ ಕೊಡಿಸಲಿ: ಡಿ ಕೆ ಶಿವಕುಮಾರ್
ಲೋಕಸಭೆ ಚುನಾವಣೆಗೆ ಬಿಜೆಪಿ ಹೈಕಮಾಂಡ್ ತನ್ನ ಎರಡನೇ ಪಟ್ಟಿಯನ್ನು ನಿನ್ನೆ ರಿಲೀಸ್ ಮಾಡಿದೆ. ಬಿಜೆಪಿಯ ಈ ಪಟ್ಟಿಯಲ್ಲಿ ಹಾವೇರಿಯಿಂದ ಈಶ್ವರಪ್ಪ ಪುತ್ರ ಕಾಂತೇಶ್ ಹೆಸರು ಇರಲಿದೆ ಎಂದು ನಿರೀಕ್ಷೆ ಮಾಡಲಾಗಿತ್ತು. ಬದಲಾದ ನಿರ್ಧಾರದಿಂದಾಗಿ ಬಿಜೆಪಿ ಹೈಕಮಾಂಡ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮಣೆ ಹಾಕಿದೆ. ಇದು ಈಶ್ವರಪ್ಪ ಅವರ ಆಕ್ರೋಶಕ್ಕೆ ಕಾರಣವಾಗಿದೆ.
