ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆಯೂ ಆರಂಭವಾಗಿದೆ. ಈ ನಡುವೆ, ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ನಡುವೆ ಇನ್ನೂ ಸೀಟು ಹಂಚಿಕೆ ಕಸರತ್ತು ನಡೆಯುತ್ತಲೇ ಇದ್ದು, ಜೆಡಿಎಸ್‌ಗೆ 3 ಕ್ಷೇತ್ರಗಳನ್ನು ಬಿಜೆಪಿ ಬಿಟ್ಟುಕೊಟ್ಟಿದೆ ಎಂದು ಮೂಲಗಳು ತಿಳಿಸಿವೆ.
ಮಂಡ್ಯ, ಹಾಸನ ಮತ್ತು ಕೋಲಾರ ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ ಎಂದು ತಿಳಿದುಬಂದಿದೆ. ಅಲ್ಲದೆ, ಬೆಂಗಳೂರು ಗ್ರಾಮಾಂತರದಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡರ ಅಳಿಯ ಸಿ.ಎನ್ ಮಂಜುನಾಥ್ ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ.
ಈಗಾಗಲೇ, ರಾಜ್ಯದ 28 ಲೋಕಸಭಾ ಸ್ಥಾನಗಳ ಪೈಕಿ 20 ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ. ಅಭ್ಯರ್ಥಿಗಳ ಘೋಷಣೆ ವೇಳೆ, ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಯಾವುದೇ ಸಭೆಗಳಿಗೆ ತಮ್ಮನ್ನು ಕರೆಯುತ್ತಿಲ್ಲ ಎಂದು ಜೆಡಿಎಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ, 2 ಕ್ಷೇತ್ರಕ್ಕಾಗಿ ಇಷ್ಟೆಲ್ಲ ಮಾಡಬೇಕಿತ್ತಾ ಎಂದು ಎರಡು ದಿನಗಳ ಹಿಂದೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದರು. ಇದೀಗ, ಮೂರು ಕ್ಷೇತ್ರಗಳನ್ನು ಜೆಡಿಎಸ್ ತನ್ನ ಪಾಲಿಗೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ.
ಜೆಡಿಎಸ್ ಮತ್ತು ಬಿಜೆಪಿ ನಡುವಿನ ಸೀಟು ಹಂಚಿಕೆ ಮಾತುಕತೆ ಕೋಲಾರ ಕ್ಷೇತ್ರದಲ್ಲಿ ಬಿಕ್ಕಟ್ಟಿಗೆ ಸಿಲುಕಿದೆ. ಕಳೆದ ಬಾರಿ, ಕೋಲಾರದಲ್ಲಿ ಗೆದ್ದಿದ್ದ ಬಿಜೆಪಿ, ಕ್ಷೇತ್ರದಲ್ಲಿ ತನ್ನ ಹಿಡಿತ ಸಾಧಿಸಲು ಬಯಸಿತ್ತು. ಆದರೆ, ಜೆಡಿಎಸ್ ಎರಡು ಸ್ಥಾನಕ್ಕೆ ಒಪ್ಪುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿತ್ತು.
2019ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಸ್ಥಾನಗಳಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದನ್ನು ಗೆದ್ದಿದ್ದವು. ಕಳೆದ ವರ್ಷ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಅಧಿಕಾರದಲ್ಲಿದೆ.