ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಮೈತ್ರಿ ಅಭ್ಯರ್ಥಿಯಾಗಿ ಎಚ್ ಡಿ ಕುಮಾರಸ್ವಾಮಿ ಸ್ಪರ್ಧೆ ಮಾಡಲಿದ್ದಾರೆ. ಈ ಬಗ್ಗೆ ಅಧಿಕೃತವಾಗಿ ಸಂಜೆ 5 ಗಂಟೆಯೊಳಗೆ ಘೋಷಣೆಯಾಗಲಿದೆ.
ಇಂದು ಬೆಂಗಳೂರಿನಲ್ಲಿ ಜೆಡಿಎಸ್ ಕೋರ್ ಕಮಿಟಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ, “ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅಥವಾ ಪುಟ್ಟರಾಜು ಅಭ್ಯರ್ಥಿಯನ್ನಾಗಿಸುವ ಬಗ್ಗೆ ಚರ್ಚೆ ನಡೆಸಿದ್ದೆವು. ಆದರೆ ಅವರು ನಾವು ಯಾವುದೇ ಕಾರಣಕ್ಕೂ ಒಪ್ಪಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ಜೆಡಿಎಸ್ ಪಕ್ಷದ ಪುನಶ್ಚೇತನಕ್ಕಾಗಿ ನಾನು ತಲೆಕೊಡುತ್ತೇನೆ” ಎಂದು ತಿಳಿಸಿದ್ದಾರೆ.
“ಸಂಜೆ 4 ಅಥವಾ 5 ಗಂಟೆಯೊಳಗೆ ಅಧಿಕೃತವಾಗಿ ತಿಳಿಸುತ್ತೇವೆ. ಮಂಡ್ಯದ ಮುಖಂಡರ ಇಂದು ಸಂಜೆ ಸಭೆ ಇದೆ. ಆ ಬಳಿಕ ಅಧಿಕೃತವಾಗಿ ಘೋಷಣೆ ಮಾಡುತ್ತೇವೆ. ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಸಿ, ಕಾರ್ಯಕರ್ತರ ಆಗ್ರಹಕ್ಕೆ ಮನ್ನಣೆ ನೀಡುವ ಬಗ್ಗೆಯೂ ಮಾತುಕತೆ ನಡೆಸಿದ್ದೇವೆ” ಎಂದು ತಿಳಿಸಿದ್ದಾರೆ.
“ಕೋಲಾರ, ಮಂಡ್ಯ ಹಾಗೂ ಹಾಸನ ಕ್ಷೇತ್ರವನ್ನು ಬಿಜೆಪಿ ಹೈಕಮಾಂಡ್ ನಮಗೆ ಬಿಟ್ಟುಕೊಟ್ಟಿದೆ. ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಮೂರು ಮಂದಿ ಆಕಾಂಕ್ಷಿಗಳಿದ್ದಾರೆ. ಇವತ್ತು ಸಂಜೆಯೊಳಗೆ ಪ್ರಕಟಿಸುತ್ತೇವೆ. ಹಾಸನದಿಂದ ದೇವೇಗೌಡರ ತೀರ್ಮಾನದಂತೆ ಪ್ರಜ್ವಲ್ ರೇವಣ್ಣ ಸ್ಪರ್ಧಿಸಲಿದ್ದಾರೆ” ಎಂದು ತಿಳಿಸಿದ್ದಾರೆ.
ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಪ್ರಮುಖವಾಗಿ ಮೈತ್ರಿ ಅಭ್ಯರ್ಥಿಗಳ ಆರು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಸಭೆಯಲ್ಲಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರೂ ಸೇರಿದಂತೆ ಹಲವರು ಭಾಗಿಯಾಗಿದ್ದರು” ಎಂದು ತಿಳಿಸಿದ್ದಾರೆ.
ನಾಡಿನ ಬಿಜೆಪಿ ಸಂಸದರಿಗೆ ಧ್ವನಿ ಇಲ್ಲ ಎಂಬ ಆರೋಪ ಇದೆ. ಹೀಗಾಗಿ, ನಾಡಿನ ಸಮಸ್ಯೆಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ನಾವು ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದೇವೆ. ಮಂಡ್ಯ, ಹಾಸನ ಹಾಗೂ ಕೋಲಾರದಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲಲಿದ್ದಾರೆ. ದೇಶದೆಲ್ಲೆಡೆ ಮೋದಿ ಇದೆ. ಹೀಗಾಗಿ, ಮೂರು ಕ್ಷೇತ್ರದಲ್ಲೂ ಮೈತ್ರಿ ಅಭ್ಯರ್ಥಿ ಗೆಲ್ಲಲಿದ್ದಾರೆ” ಎಂದು ತಿಳಿಸಿದರು.
ಜಿ.ಟಿ. ದೇವೇಗೌಡರ ಅಧ್ಯಕ್ಷತೆಯಲ್ಲಿ ಇಂದು ಜೆಡಿಎಸ್ ಪಕ್ಷದ ಕೋರ್ ಕಮಿಟಿ ಸಭೆ ನಡೆಯಿತು.
ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರು ಸೇರಿದಂತೆ ಕೋರ್ ಕಮಿಟಿ ಸದಸ್ಯರು ಉಪಸ್ಥಿತರಿದ್ದರು.
ಸಭೆಯಲ್ಲಿ ಎನ್ಡಿಎ ಮೈತ್ರಿಕೂಟದ ಮಿತ್ರ ಪಕ್ಷ ಬಿಜೆಪಿ ಜೊತೆಗಿನ ಹೊಂದಾಣಿಕೆ ಹಾಗೂ… pic.twitter.com/am0sLZ98og— Janata Dal Secular (@JanataDal_S) March 26, 2024
“ಕೋರ್ ಕಮಿಟಿಯಲ್ಲಿ ತಮಿಳುನಾಡಿನ ಡಿಎಂಕೆ ಸರ್ಕಾರವು ಮೇಕೆದಾಟು ಯೋಜನೆ ಜಾರಿ ಮಾಡಲು ಬಿಡಲ್ಲ ಎಂದು ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಬಗ್ಗೆಯೂ ಚರ್ಚೆ ನಡೆಸಿದ್ದೇವೆ. ನೀರಾವರಿ ಯೋಜನೆಗಳಲ್ಲಿ ರಾಜ್ಯದ ರೈತರಿಗೆ ನಿರಂತರ ಅನ್ಯಾಯವಾಗ್ತಿದೆ. ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ನಿರ್ಲಕ್ಷ್ಯ ವಹಿಸಿದೆ. ಈಗ ನರೇಂದ್ರ ಮೋದಿಯವರ ಮೇಲೆ ಗೂಬೆ ಕೂರಿಸುತ್ತಿದೆ. ಕೇವಲ ಶಂಕುಸ್ಥಾಪನೆ ನೆರವೇರಿಸಿದ್ದು ಮಾತ್ರ ಕಾಂಗ್ರೆಸ್ನ ಕೀರ್ತಿ” ಎಂದು ಕುಮಾರಸ್ವಾಮಿ ಆರೋಪಿಸಿದರು.
