ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿರುವ ಟೈಲರಿಂಗ್ ಅಂಗಡಿಯಲ್ಲಿ ಬುಧವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಉಸಿರುಗಟ್ಟಿ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಂಟೋನ್ಮೆಂಟ್ ಪ್ರದೇಶದ ದಾನಾ ಬಜಾರ್‌ನಲ್ಲಿರುವ ಅಂಗಡಿಯಲ್ಲಿ ಮುಂಜಾನೆ 4 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಟೈಲರಿಂಗ್ ಅಂಗಡಿ ಮತ್ತು ಇತರ ವಾಣಿಜ್ಯ ಮಳಿಗೆಗಳು ಕಟ್ಟಡದ ನೆಲ ಮಹಡಿಯಲ್ಲಿದ್ದು, ಜನರು ಮೇಲಿನ ಮಹಡಿಯಲ್ಲಿ ವಾಸಿಸುತ್ತಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.
“ಬೆಳಿಗ್ಗೆ 4 ಗಂಟೆ ಸುಮಾರಿಗೆ ಅಂಗಡಿಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. ಘಟನೆಯ ಬಗ್ಗೆ 4.15 ಕ್ಕೆ ಪೊಲೀಸರಿಗೆ ಮಾಹಿತಿ ಬಂದಿದೆ. ಬೆಂಕಿಯಿಂದಾಗಿ ಅಂಗಡಿಯ ಮೇಲಿನ ಮೊದಲ ಮಹಡಿಯಲ್ಲಿದ್ದ ಮನೆಗೆ ಹೊಗೆ ಆವರಿಸಿಕೊಂಡಿದೆ. ಪರಿಣಾಮ ಮನೆಯಲ್ಲಿದ್ದ ಏಳು ಬಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ” ಎಂದು ಪೊಲೀಸ್ ಆಯುಕ್ತ ಮನೋಜ್ ಲೋಹಿಯಾ ತಿಳಿಸಿದ್ದಾರೆ.
ಮೃತರಲ್ಲಿ ಮೂವರು ಮಹಿಳೆಯರು, ಇಬ್ಬರು ಪುರುಷರು ಹಾಗೂ ಇಬ್ಬರು ಮಕ್ಕಳು ಎಂದು ಅವರು ತಿಳಿಸಿದ್ದಾರೆ.
ಅಗ್ನಿ ಅವಘಡಕ್ಕೆ ನಿಖರ ಕಾರಣ ಎನೆಂದು ತಿಳಿದುಬಂದಿಲ್ಲ. ತನಿಖೆಯ ನಂತರ ತಿಳಿಯಲಿದೆ ಎಂದು ಅವರು ತಿಳಿಸಿದ್ದಾರೆ.