ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿ ತಿಹಾರ್ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ನಡೆಸಲು ದೆಹಲಿ ಹೈಕೋರ್ಟ್ ಗುರುವಾರ ನಿರಾಕರಿಸಿದೆ.
ಒಂದು ವಾರದ ಹಿಂದೆ, ಕೇಜ್ರಿವಾಲ್ ಅವರು ಮದ್ಯ ನೀತಿ ಪ್ರಕರಣದಲ್ಲಿ ಇಡಿ ಕಸ್ಟಡಿಯಲ್ಲಿರುವ ಕಾರಣ ಅವರನ್ನು ಸಿಎಂ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ದೆಹಲಿ ಹೈಕೋರ್ಟ್‌ನಲ್ಲಿ ಹೊಸ ಪಿಐಎಲ್ ಸಲ್ಲಿಸಲಾಗಿದೆ. ಹಿಂದೂ ಸೇನೆಯ ರಾಷ್ಟ್ರೀಯ ಅಧ್ಯಕ್ಷ ವಿಷ್ಣು ಗುಪ್ತಾ ಪಿಐಎಲ್ ಸಲ್ಲಿಸಿದ್ದರು.
ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮನ್ಮೀತ್ ಪ್ರೀತಮ್ ಸಿಂಗ್ ಅರೋರಾ ಅವರ ವಿಭಾಗೀಯ ಪೀಠವು ಗುಪ್ತಾ ಅವರ ಅರ್ಜಿಯನ್ನು ವಜಾಗೊಳಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.
ಇದನ್ನು ಓದಿದ್ದೀರಾ? ಪುಸ್ತಕ, ಶುಗರ್ ಸೆನ್ಸರ್, ಔಷಧಿ; ತಿಹಾರ್ ಜೈಲಿನಲ್ಲಿ ಕೇಜ್ರಿವಾಲ್‌ಗೆ ಸಿಗುವ ಸೌಲಭ್ಯಗಳಿವು
“ಸಿಎಂ ಆಗಿ ಮುಂದುವರಿಯಬೇಕೆ ಅಥವಾ ಬೇಡವೇ ಎಂಬುವುದು ಕೇಜ್ರಿವಾಲ್ ಅವರ ಆಯ್ಕೆ” ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. “ಕೆಲವೊಮ್ಮೆ, ವೈಯಕ್ತಿಕ ಹಿತಾಸಕ್ತಿಯು ರಾಷ್ಟ್ರೀಯ ಹಿತಾಸಕ್ತಿಗೆ ಅಧೀನವಾಗಿರಬೇಕು. ಆದರೆ ಅದು ಅವರ (ಅರವಿಂದ್ ಕೇಜ್ರಿವಾಲ್) ವೈಯಕ್ತಿಕ ಆಯ್ಕೆ” ಎಂದು ನ್ಯಾಯಾಲಯ ಹೇಳಿದೆ.
ಅರ್ಜಿದಾರರು ಭಾರತದ ಲೆಫ್ಟಿನೆಂಟ್ ಗವರ್ನರ್ ಅಥವಾ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಬಹುದು ಎಂದಿರುವ ಕೋರ್ಟ್, ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಲು ಅರ್ಜಿದಾರರಿಗೆ ತಿಳಿಸಿದೆ.
ದೆಹಲಿ ಹೈಕೋರ್ಟ್ ಎರಡನೇ ಬಾರಿಗೆ ಸಿಎಂ ಸ್ಥಾನದಿಂದ ಕೇಜ್ರಿವಾಲ್ ವಜಾ ಕೋರಿದ್ದ ಅರ್ಜಿ ವಜಾಗೊಳಿಸಿದೆ. ಈ ಹಿಂದೆ ಮಾರ್ಚ್ 28ರಂದು ಹೈಕೋರ್ಟ್ ಇದೇ ವಿಚಾರವಾಗಿ ಸುರ್ಜಿತ್ ಸಿಂಗ್ ಯಾದವ್ ಎಂಬವರು ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿದೆ.
ಪ್ರಸ್ತುತ, ಅಬಕಾರಿ ನೀತಿ ಪ್ರಕರಣದಲ್ಲಿ ರೂಸ್ ಅವೆನ್ಯೂ ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ನಂತರ ಸಿಎಂ ಕೇಜ್ರಿವಾಲ್ ಅವರು ತಿಹಾರ್ ಜೈಲಿನಲ್ಲಿದ್ದಾರೆ. ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯವು ಮಾರ್ಚ್ 21 ರಂದು ಬಂಧಿಸಿದೆ.