ಐಪಿಎಲ್ನಲ್ಲಿ ಆರ್ಸಿಬಿ ಸೋಲಿಗೆ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರೇ ಕಾರಣ ಎಂದು ಸೋಷಿಯಲ್ ಮೀಡಿಯಾಗಳಲ್ಲಿ ಕೆಲವು ದುಷ್ಕರ್ಮಿಗಳು ಅವಾಚ್ಯವಾಗಿ ನಿಂದಿಸಿರುವ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, “ಹೆಣ್ಣುಮಕ್ಕಳ ತುಚ್ಛೀಕರಣವನ್ನು ನಮ್ಮ ಸರ್ಕಾರ ಖಂಡಿತ ಸಹಿಸುವುದಿಲ್ಲ. ಇದಕ್ಕೆ ಕಾರಣಕರ್ತರಾದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.
ಈ ಬಗ್ಗೆ ‘ಎಕ್ಸ್’ನಲ್ಲಿ ಪೋಸ್ಟ್ ಹಾಕಿರುವ ಅವರು, “ಹೆಣ್ಣಿಗೆ ಸ್ವಾತಂತ್ರ್ಯವನ್ನು ನಿರಾಕರಿಸಿ ಗುಲಾಮಳನ್ನಾಗಿ ಮಾಡಿ ಮನೆಯೊಳಗೆ ಕೂರಿಸಿದ ಮನುವಾದದ ಸಂಕೋಲೆಯನ್ನು ಮಹಿಳೆಯರೇ ಕಿತ್ತುಹಾಕಿ ಸ್ವತಂತ್ರರಾಗುತ್ತಿದ್ದಾರೆ. ಸಂವಿಧಾನದತ್ತ ಸ್ವಾತಂತ್ರ್ಯದೊಂದಿಗೆ ಪುರುಷರಿಗೆ ಸರಿಸಮಾನರಾಗಿ ಎಲ್ಲ ಕ್ಷೇತ್ರಗಳಲ್ಲಿಯೂ ಮುನ್ನಡೆಯುತ್ತಿದ್ದಾರೆ” ಎಂದು ತಿಳಿಸಿದ್ದಾರೆ.
“ಪತಿಯನ್ನು ಕಳೆದುಕೊಂಡು ಹೆಣ್ಣುಮಕ್ಕಳು ಕೂಡಾ ವೈಯಕ್ತಿಕ ಬದುಕಿನ ನೋವುಗಳನ್ನು ನುಂಗಿಕೊಂಡು ಸಾಮಾಜಿಕ ಮತ್ತು ಔದ್ಯಮಿಕ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಮಾದರಿಯಾಗುತ್ತಿದ್ದಾರೆ. ಈ ಸಾಮಾಜಿಕ ಬದಲಾವಣೆಯಲ್ಲಿ ಬುದ್ಧ, ಬಸವ, ಅಂಬೇಡ್ಕರ್, ಗಾಂಧೀಜಿಯವರಂತಹ ಮಹನೀಯರ ಸಮಾಜ ಸುಧಾರಣೆಯ ಕೊಡುಗೆಯೂ ಇದೆ” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಹೆಣ್ಣಿಗೆ ಸ್ವಾತಂತ್ರ್ಯವನ್ನು ನಿರಾಕರಿಸಿ ಗುಲಾಮಳನ್ನಾಗಿ ಮಾಡಿ ಮನೆಯೊಳಗೆ ಕೂರಿಸಿದ ಮನುವಾದದ ಸಂಕೋಲೆಯನ್ನು ಮಹಿಳೆಯರೇ ಕಿತ್ತುಹಾಕಿ ಸ್ವತಂತ್ರರಾಗುತ್ತಿದ್ದಾರೆ. ಸಂವಿಧಾನದತ್ತ ಸ್ವಾತಂತ್ರ್ಯದೊಂದಿಗೆ ಪುರುಷರಿಗೆ ಸರಿಸಮಾನರಾಗಿ ಎಲ್ಲ ಕ್ಷೇತ್ರಗಳಲ್ಲಿಯೂ ಮುನ್ನಡೆಯುತ್ತಿದ್ದಾರೆ.
ಪತಿಯನ್ನು ಕಳೆದುಕೊಂಡು ಹೆಣ್ಣುಮಕ್ಕಳು ಕೂಡಾ ವೈಯಕ್ತಿಕ… pic.twitter.com/fT48QzaWD5— Siddaramaiah (@siddaramaiah) April 6, 2024
“ಇತಿಹಾಸದ ಚಕ್ರವನ್ನು ಹಿಂದಕ್ಕೆ ಎಳೆದೊಯ್ಯುವ ಪ್ರಯತ್ನವನ್ನು ಕೆಲವು ಕಿಡಿಗೇಡಿಗಳು ನಡೆಸುತ್ತಿದ್ದಾರೆ. ಇತ್ತೀಚೆಗೆ ಕೆಲವು ಗೊಡ್ಡು ಸಂಪ್ರದಾಯವಾದಿಗಳು ಪತಿಯನ್ನು ಕಳೆದುಕೊಂಡ ಹೆಣ್ಣು ಮಕ್ಕಳನ್ನು ಸಾರ್ವಜನಿಕವಾಗಿ ಅಪಮಾನಿಸಿ ತಮ್ಮ ವಿಕೃತಿಯನ್ನು ಮೆರೆಯುತ್ತಿರುವುದು ಖಂಡನೀಯ.
ಇದು ಸಂವಿಧಾನವನ್ನು ತಿರಸ್ಕರಿಸಿ ಮನುವಾದವನ್ನು ಪುರಸ್ಕರಿಸಬೇಕೆಂದು ಕೆಲವು ಸಮಾಜ ವಿರೋಧಿ ಶಕ್ತಿಗಳು ಹಾಕುತ್ತಿರುವ ಕೂಗಿನ ಫಲ” ಎಂದು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ‘RCB ಸೋಲಿಗೆ ಅಶ್ವಿನಿ ಪುನೀತ್ ರಾಜ್ಕುಮಾರ್ ಕಾರಣ’ ಎಂದು ಅವಹೇಳನಕಾರಿ ಟ್ವೀಟ್: ಕಮಿಷನರ್ಗೆ ದೂರು
“ಹೆಣ್ಣು ಮಕ್ಕಳ ತುಚ್ಛೀಕರಣವನ್ನು ನಮ್ಮ ಸರ್ಕಾರ ಖಂಡಿತ ಸಹಿಸುವುದಿಲ್ಲ. ಇದಕ್ಕೆ ಕಾರಣಕರ್ತರಾದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
