ರಾಜ್ಯದ ಹಲವು ಭಾಗಗಳಲ್ಲಿ ಬಿಸಿಲು ಧಗೆ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ಭಾನುವಾರ ಕಲಬುರಗಿ ಜಿಲ್ಲೆಯಲ್ಲಿ ಅತೀ ಅಧಿಕ 43.1 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಗರಿಷ್ಠ 37.6 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ನಗರದಲ್ಲಿ ಕಳೆದ ಎಂಟು ವರ್ಷದಲ್ಲೇ ಅತ್ಯಧಿಕ ತಾಪಮಾನ ಇದಾಗಿದೆ.
ರಾಜ್ಯದಾದ್ಯಂತ ಭಾನುವಾರ ಒಣಹವೆ ಇದ್ದು, ಒಳನಾಡಿನ ಕೆಲವು ಕಡೆಗಳಲ್ಲಿ ಉಷ್ಣಾಂಶದಲ್ಲಿ ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಹೆಚ್ಚಳ ಕಂಡು ಬಂದಿದೆ. ಇನ್ನು ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿಯ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಅಧಿಕ ಉಷ್ಣಾಂಶ ದಾಖಲಾಗಿದೆ.
ಇದನ್ನು ಓದಿದ್ದೀರಾ? ಏಪ್ರಿಲ್ 8ರ ಬಳಿಕ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಈ ತಾಪದ ನಡುವೆಯು ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು (ಎಪ್ರಿಲ್ 8) ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಇನ್ನು ಮುಂದಿನ ಮೂರು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ವಿಜಯಪುರದಲ್ಲಿ ಎಪ್ರಿಲ್ 11ರಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇದನ್ನು ಓದಿದ್ದೀರಾ? ರಾಜ್ಯದ ಉತ್ತರ ಒಳನಾಡು ಸೇರಿದಂತೆ ಹಲವೆಡೆ ಮಳೆ : 5 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’
ಇನ್ನು ಎಪ್ರಿಲ್ 12ರಂದು ಮತ್ತು ಎಪ್ರಿಲ್ 13ರಂದು ದಕ್ಷಿಣ ಕನ್ನಡ, ಉಡುಪಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬಾಗಲಕೋಟೆ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಎರಡು ದಿನಗಳ ತಾಪಮಾನ ಮುನ್ಸೂಚನೆ
ಮುಂದಿನ 2 ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಚಿಕ್ಕಮಗಳೂರಿನ ಪಶ್ಚಿಮ ಭಾಗಗಳು ಜಿಲ್ಲೆಗಳಲ್ಲಿ ಬಿಸಿ ಮತ್ತು ಆದ್ರತೆ ಹೆಚ್ಚಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನವು ಮುಂದಿನ 2 ದಿನಗಳಲ್ಲಿ ಉತ್ತರ ಒಳನಾಡಿನ ಎಲ್ಲಾ ಸ್ಥಳಗಳಲ್ಲಿ ಮತ್ತು ಬೆಂಗಳೂರು ಗ್ರಾಮಾಂತರ ಮತ್ತು ನಗರ, ರಾಮನಗರ, ಶಿವಮೊಗ್ಗ, ದಾವಣಗೆರೆ, ಮೈಸೂರು, ಮಂಡ್ಯ, ಹಾಸನ ಮತ್ತು ತುಮಕೂರು ಜಿಲ್ಲೆಗಳಲ್ಲಿ 2-4 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆಯಿದೆ.
ಇದನ್ನು ಓದಿದ್ದೀರಾ? ಬೆಂಗಳೂರು | ಬಿಸಿಲಿನ ಮಧ್ಯೆ ಸಂಚಾರ ಪೊಲೀಸರಿಗೆ ನಿತ್ಯ ನೀರು ಕೊಡುವ ನೀರ್‌ಸಾಬ್
ಇಂದು ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಗದಗ, ಕಲಬುರಗಿ, ಹಾವೇರಿ, ಧಾರವಾಡ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಉಷ್ಣ ಅಲೆ ಅಧಿಕವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಬಿಸಿಲಿನ ವಾತಾವರಣ ಹೆಚ್ಚಾಗುತ್ತಿದ್ದಂತೆ ಕೆಸಿ ಜನರಲ್ ವಾರ್ಡ್ ಸೇರಿದಂತೆ ಹಲವು ಆಸ್ಪತ್ರೆಗಳಲ್ಲಿ ಸನ್‌ಸ್ಟ್ರೋಕ್ ವಾರ್ಡ್‌ಗಳನ್ನು ಆರಂಭಿಸಲಾಗಿದೆ. ಜನರು ನೀರು ಹೆಚ್ಚಾಗಿ ಕುಡಿಯುವಂತೆ, ಡಿಹೈಡ್ರೇಟ್ ಆಗದಂತೆ ನೋಡಿಕೊಳ್ಳಲು ವೈದ್ಯರು ಸಲಹೆ ನೀಡಿದ್ದಾರೆ.
ಇನ್ನು ಮುಂದಿನ 2 ದಿನಗಳಲ್ಲಿ ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಧಾರವಾಡ, ರಾಯಚೂರು ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ರಾತ್ರಿ ವೇಳೆ ಬಿಸಿ ಹೆಚ್ಚಾಗುವ ಸಾಧ್ಯತೆಯಿದೆ.