ರಾಜ್ಯದಲ್ಲಿ 2ನೇ ಹಂತದಲ್ಲಿ ಮತದಾನ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಶುಕ್ರವಾರ ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ(ಏ.12) ಆರಂಭವಾಗಲಿದೆ.
ಮೊದಲ ದಿನವೇ ಕಲಬುರಗಿ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್‌ನ ರಾಧಾಕೃಷ್ಣ ದೊಡ್ಡಮನಿ ನಾಮಪತ್ರ ಸಲ್ಲಿಸಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ಬಳ್ಳಾರಿ ಮೀಸಲು ಕ್ಷೇತ್ರದಲ್ಲಿಈ.ತುಕಾರಾಂ ಅವರೂ ಶುಕ್ರವಾರವೇ ನಾಮಪತ್ರ ಸಲ್ಲಿಸಲಿದ್ದಾರೆ.
ಮಾಜಿ ಸಿಎಂಗಳಾದ ಜಗದೀಶ ಶೆಟ್ಟರ್ ಬೆಳಗಾವಿಯಲ್ಲಿ ಹಾಗೂ ಬಸವರಾಜ ಬೊಮ್ಮಾಯಿ ಹಾವೇರಿ ಕ್ಷೇತ್ರದಲ್ಲಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಧಾರವಾಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾಗಿದ್ದು, ಇವರು ಸೇರಿದಂತೆ ಹಲವು ಪ್ರಮುಖರು 2ನೇ ಹಂತದ ಈ ಚುನಾವಣೆ ಎದುರಿಸುತ್ತಿದ್ದಾರೆ.
ಕರಾವಳಿಯ ಉತ್ತರ ಕನ್ನಡ, ಮಲೆನಾಡಿನ ಶಿವಮೊಗ್ಗ, ಮಧ್ಯ ಕರ್ನಾಟಕದ ದಾವಣಗೆರೆ, ಕಲ್ಯಾಣ ಹಾಗೂ ಕಿತ್ತೂರು ಕರ್ನಾಟಕದ ಕ್ಷೇತ್ರಗಳಲ್ಲಿ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಲೆ ಏರಿಕೆ, ನಿರುದ್ಯೋಗವೇ ಚುನಾವಣೆ ವಿಷಯ; ಎಚ್ಚೆತ್ತ ಮತದಾರರು
ಬಿಜೆಪಿ–ಜೆಡಿಎಸ್ ನಡುವೆ ಲೋಕಸಭಾ ಚುನಾವಣಾ ಮೈತ್ರಿಯಾಗಿ ಕ್ಷೇತ್ರಗಳ ಹಂಚಿಕೆ ಮಾಡಿಕೊಂಡಿವೆ. ಜೆಡಿಎಸ್ಗೆ ಬಿಟ್ಟುಕೊಟ್ಟ ಯಾವ ಕ್ಷೇತ್ರಗಳೂ ಎರಡನೇ ಹಂತದಲ್ಲಿ ಇಲ್ಲ. ಹೀಗಾಗಿ, ಎಲ್ಲ 14 ಕ್ಷೇತ್ರಗಳಲ್ಲೂ ಕಾಂಗ್ರೆಸ್–ಬಿಜೆಪಿ ಮಧ್ಯೆ ನೇರ ಸ್ಪರ್ಧೆ ಇದೆ. ಆದರೆ, ನಾಲ್ಕು ಕ್ಷೇತ್ರಗಳಲ್ಲಿ ಬಂಡಾಯದ ಕಹಳೆ ಮೊಳಗಿಸಿರುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರೆ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಹಾಗೂ ಕೇಂದ್ರದಲ್ಲಿನ ಆಡಳಿತಾರೂಢ ಬಿಜೆಪಿ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿವೆ. ಶಿವಮೊಗ್ಗ ಹಾಗೂ ಧಾರವಾಡ ಕ್ಷೇತ್ರಗಳಲ್ಲಿ ಬಿಜೆಪಿಗೆ, ಬಾಗಲಕೋಟೆ ಹಾಗೂ ದಾವಣಗೆರೆಯಲ್ಲಿ ಕಾಂಗ್ರೆಸ್‌ಗೆ ಬಂಡಾಯದ ಕಾವು ಎದುರಾಗಿದೆ.
2ನೇ ಹಂತದ ಚುನಾವಣೆ ಕ್ಷೇತ್ರಗಳು
ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ
ಚುನಾವಣಾ ವೇಳಾಪಟ್ಟಿ ಏನು?
ಏ.12 – ಅಧಿಸೂಚನೆ
ಏ.19 – ನಾಮಪತ್ರ ಸಲ್ಲಿಸಲು ಕೊನೆ ದಿನ
ಏ.20 – ನಾಮಪತ್ರಗಳ ಪರಿಶೀಲನೆ
ಏ.22 – ನಾಮಪತ್ರ ಹಿಂಪಡೆಯಲು ಕೊನೆ ದಿನ
ಮೇ 7 – ಮತದಾನ
ಜೂ.4 – ಮತ ಎಣಿಕೆ
ಸುರಪುರ ಉಪ ಚುನಾವಣೆ
ಸುರಪುರ ಎಸ್ಟಿ ಮೀಸಲು ಕ್ಷೇತ್ರದ ಉಪ ಚುನಾವಣೆಗೂ ಶುಕ್ರವಾರ (ಏ.12) ಅಧಿಸೂಚನೆ ಹೊರಬೀಳಲಿದೆ. ರಾಜ್ಯದಲ್ಲಿನ ಸಾರ್ವತ್ರಿಕ ಚುನಾವಣೆ 2ನೇ ಹಂತದ ವೇಳಾಪಟ್ಟಿಯೇ ಈ ಉಪಚುನಾವಣೆಗೆ ಅನ್ವಯವಾಗಲಿದೆ.
