ದಾವಣಗೆರೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣೆಯ ಪ್ರಕ್ರಿಯೆ ಪ್ರಾರಂಭಗೊಂಡಿದ್ದು, ಏಪ್ರಿಲ್ 12ರಿಂದ ಏಪ್ರಿಲ್ 19ರವರೆಗೆ ನಾಮಪತ್ರ ಸಲ್ಲಿಕೆಗೆ ಕಾಲಾವಕಾಶವಿದೆ. ಅಭ್ಯರ್ಥಿಗಳ ನಾಮಪತ್ರಗಳನ್ನು ಚುನಾವಣಾಧಿಕಾರಿ ಅವರಿಗೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗೆ ಐದು ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
2024ರ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 12ರಂದು ಚಾಲನೆ ದೊರೆತಿದ್ದು ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 12ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಮೊದಲ ದಿನ ಐದು ಮಂದಿ ಅಭ್ಯರ್ಥಿಗಳಿಂದ ಆರು ನಾಮಪತ್ರಗಳು ಸಲ್ಲಿಕೆಯಾಗಿವೆ.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಎರಡು ನಾಮಪತ್ರ, ತಿಪ್ಪೇಸ್ವಾಮಿ ಕೆ ಎ ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯೂನಿಸ್ಟ್), ಉತ್ತಮ ಪ್ರಜಾಕೀಯ ಪಕ್ಷದಿಂದ ಈಶ್ವರ, ಕೆ ಆರ್ ಎಸ್ ಪಕ್ಷದಿಂದ ರಾಘವೇಂದ್ರ ಜಿ ಪಿ ಹಾಗೂ ಪಕ್ಷೇತರರಾಗಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ವಿನಯ್‍ಕುಮಾರ್ ಜಿ ಬಿ ನಾಮಪತ್ರ ಸಲ್ಲಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಲೋಕಸಭೆ ಚುನಾವಣೆ | ಏ.13ರಿಂದ ಅಂಚೆ ಮತದಾನ
ದಾವಣಗೆರೆಯಲ್ಲಿ ಅಧಿಕೃತವಾಗಿ ಶುಕ್ರವಾರದಿಂದ ಚುನಾವಣಾ ರಣಕಣ ರಂಗೇರಿದ್ದು, ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಮೂಲಕ ಅಧಿಕೃತವಾಗಿ ಲೋಕಸಭಾ ಚುನಾವಣೆಯ ಅಖಾಡಕ್ಕೆ ಇಳಿಯಲಿದ್ದಾರೆ ಮತ್ತು ಮತ ಬೇಟೆಯನ್ನು ಪ್ರಾರಂಭ ಮಾಡಲಿದ್ದಾರೆ.
