ಮಣಿಪುರದ ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಶನಿವಾರ ಎರಡು ಸಶಸ್ತ್ರ ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.
ಕಾಂಗ್‌ಪೊಕ್ಪಿ ಜಿಲ್ಲೆಯ ಗಡಿಗೆ ಸಮೀಪವಿರುವ ಸ್ಥಳದಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಹೆಚ್ಚುವರಿ ರಾಜ್ಯ ಮತ್ತು ಕೇಂದ್ರ ಪಡೆಗಳು ಧಾವಿಸಿದೆ ಎಂದು ಹೇಳಿದರು.
ತೆಂಗ್ನೌಪಾಲ್ ಜಿಲ್ಲೆಯಲ್ಲಿ ಸಶಸ್ತ್ರ ಗ್ರಾಮ ಸ್ವಯಂಸೇವಕರು ಮತ್ತು ಅಪರಿಚಿತ ಬಂದೂಕುಧಾರಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಗಾಯಗೊಂಡ ಒಂದು ದಿನದ ನಂತರ ಈ ಘಟನೆ ನಡೆದಿದೆ.
ಇದನ್ನು ಓದಿದ್ದೀರಾ? ಲೋಕಸಭೆ ಚುನಾವಣೆ| ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ, ಇಬ್ಬರಿಗೆ ಗಾಯ
ಕಳೆದ ವರ್ಷ ಮೇ 3 ರಂದು ಮಣಿಪುರದಲ್ಲಿ ನಡೆದ ಜನಾಂಗೀಯ ಘರ್ಷಣೆ ಆರಂಭವಾಗಿದ್ದು ಕನಿಷ್ಠ 219 ಜನರು ಸಾವನ್ನಪ್ಪಿದ್ದಾತರೆ. ಪರಿಶಿಷ್ಟ ಪಂಗಡದ (ಎಸ್‌ಟಿ) ಸ್ಥಾನಮಾನಕ್ಕಾಗಿ ಮೈತಿ ಸಮುದಾಯದ ಬೇಡಿಕೆಯನ್ನು ಖಂಡಿಸಿ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದ್ದು ಈ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.
ಕಳೆದ ಒಂದು ತಿಂಗಳ ಅವಧಿಯಲ್ಲಿ ಮಣಿಪುರದಲ್ಲಿ ಹಿಂಸಾಚಾರ ಕಡಿಮೆಯಾಗಿತ್ತು. ಆದರೆ ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮತ್ತೆ ಹಿಂಸಾಚಾರ ಆರಂಭವಾಗಿದೆ.
ಮಣಿಪುರದ ಜನಸಂಖ್ಯೆಯ ಶೇಕಡ 53ರಷ್ಟಿರುವ ಮೈತಿಗಳು ಇಂಫಾಲ್ ಕಣಿವೆಯಲ್ಲಿ ಹೆಚ್ಚಾಗಿ ವಾಸಿಸುತ್ತಿದ್ದಾರೆ. ಬುಡಕಟ್ಟು ಜನಾಂಗದವರಾದ ನಾಗಾಗಳು ಮತ್ತು ಕುಕಿಗಳು ಶೇಕಡಾ 40ರಷ್ಟಿದ್ದಾರೆ.
ಹಿಂಸಾಚಾರದಲ್ಲಿ ತಮ್ಮ ಮನೆಗಳನ್ನು ಕಳೆದುಕೊಂಡ 50 ಸಾವಿರಕ್ಕೂ ಅಧಿಕ ಜನರು ಪ್ರಸ್ತುತ ನಿರಾಶ್ರಿತ ಶಿಬಿರದಲ್ಲಿದ್ದಾರೆ. ಈ ಶಿಬಿರದಲ್ಲಿಯೇ ಚುನಾವಣೆಯ ತಯಾರಿಯನ್ನು ಚುನಾವಣಾ ಅಧಿಕಾರಿಗಳು ನಡೆಸುತ್ತಿದ್ದಾರೆ.